ಬೆಂಗಳೂರು: ನಗರದಲ್ಲಿ ಬೆಳ್ಳಂಬೆಳಗ್ಗೆ ಜಿಟಿಜಿಟಿ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಭಾನುವಾರ ರಾತ್ರಿಯಿಂದ ಮಳೆ ಸುರಿಯುತ್ತಿದೆ. ಮಲ್ಲೇಶ್ವರಂ, ಮತ್ತಿಕೆರೆ, ಹೆಬ್ಬಾಳ, ಯಶವಂತಪುರ ರಾಜಾಜಿನಗರ, ವಿಜಯನಗರ, ಸ್ಯಾಟಲೈಟ್ ಹಾಗೂ ಜಾಲಹಳ್ಳಿ ಕ್ರಾಸ್ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಪರಿಣಾಮ ವಾಹನ ಸವಾರರು ಪರದಾಡುವಂತಾಗಿದೆ. ಭಾನುವಾರವೂ ಬೆಳ್ಳಂಬೆಳಗ್ಗೆ ಮಳೆಯಾಗಿತ್ತು. ಇಂದು ಕೂಡ ಮುಂದುವರಿದಿದೆ. ಪರಿಣಾಮ ಬೆಳಗ್ಗೆ ಕೆಲಸಕ್ಕೆ ತೆರಳುವವರಿಗೆ ಕಿರಿಕಿರಿ ಉಂಟುಮಾಡಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದ್ದು, ನಾಳೆಯೂ ಇದೇ ರೀತಿ ಮುಂದುವರಿಯುವ ಸಾಧ್ಯತೆ ಇದೆ. ಹವಾಮಾನ ಮುನ್ಸೂಚನೆ ಪ್ರಕಾರ ಸೆ.24ರವರೆಗೂ ಇದೇ ರೀತಿ ಮಳೆ ಮುಂದುವರಿಯಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್. ಶ್ರೀನಿವಾಸ್‍ರೆಡ್ಡಿ ಮಾಧ್ಯಮಕ್ಕೆ ತಿಳಿಸಿದ್ದಾರೆ.