Connect with us

Bengaluru City

ನನ್ನ ವಿರುದ್ಧ ತನಿಖೆ ನಡೆಸಿ – ರಾಜ್ಯ ಸರ್ಕಾರಕ್ಕೆ ಜಮೀರ್ ಸವಾಲ್

Published

on

ಬೆಂಗಳೂರು: ಡ್ರಗ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಅವರು ರಾಜ್ಯ ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ.

ಇಂದು ಸರಣಿ ಟ್ವೀಟ್ ಮಾಡಿರುವ ಜಮೀರ್, 2019 ಜೂನ್ 08ರಂದು ನಾನು, ಸಂಜನಾ ಅವರ ಜೊತೆ ಶ್ರೀಲಂಕಾಕ್ಕೆ ಹೋಗಿದ್ದೆ ಎಂದು ಆರೋಪಿಸಲಾಗಿದೆ. ಹಾಗಿದ್ದಲ್ಲಿ ವಿಮಾನ ಪ್ರಯಾಣದ ಟಿಕೆಟ್‍ಗಳಿರಬೇಕಲ್ಲಾ? ಹೋಟೆಲ್‍ನಲ್ಲಿ ವಾಸ್ತವ್ಯ ಹೂಡಿದ್ದರೆ ಅಲ್ಲಿಯೂ ದಾಖಲೆಗಳು ಇರಬೇಕಲ್ಲಾ? ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ನನ್ನ ಓಡಾಟದ ಚಿತ್ರಗಳೂ ಇರಬೇಕಲ್ವಾ? ಈ ಬಗ್ಗೆಯೂ ತನಿಖೆ ನಡೆಯಲಿ ಎಂದಿದ್ದಾರೆ.

ನಾನು ರಾಜಕೀಯದಲ್ಲಿರುವ ವ್ಯಕ್ತಿ, ಸುಳ್ಳು ಆರೋಪಗಳು, ಚಾರಿತ್ರ್ಯ ಹರಣದ ಪ್ರಯತ್ನಗಳು ನನಗೆ ಹೊಸತೇನಲ್ಲ. ಅವೆಲ್ಲವನ್ನು ಜನಾಶೀರ್ವಾದದ ಬಲದಿಂದ ಎದುರಿಸುತ್ತಾ ಬಂದಿದ್ದೇನೆ. ನಾನು ಏನೆನ್ನುವುದು ನಾನು ನಂಬಿರುವ ಜನ ಮತ್ತು ನನ್ನ ಆತ್ಮಸಾಕ್ಷಿಗೆ ಗೊತ್ತಿದೆ ಎಂದು ಇನ್ನೊಂದು ಟ್ವೀಟ್ ಮಾಡಿರುವ ಜಮೀರ್ ತಮ್ಮ ಮೇಲೆ ಆರೋಪ ಮಾಡುವವರ ಮೇಲೆ ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಅಧಿಕಾರದಲ್ಲಿರುವುದು ಬಿಜೆಪಿ ಸರ್ಕಾರ. ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಿದ್ದರೆ ನಾನೇನೋ ಪ್ರಭಾವ ಬೀರುತ್ತಿದ್ದೆ ಎಂದು ಹೇಳಬಹುದಿತ್ತು. ಈಗ ನಟಿ ಸಂಜನಾ ಪೊಲೀಸರ ವಶದಲ್ಲಿದ್ದಾರೆ. ಆದ್ದರಿಂದ ಪೊಲೀಸರು ಆಕೆಯನ್ನು ವಿಚಾರಣೆಗೊಳಪಡಿಸಿ ಮಾಹಿತಿ ಪಡೆದುಕೊಳ್ಳಲಿ. ಅದೇ ರೀತಿ ಶ್ರೀಲಂಕಾ ಪ್ರವಾಸದ ಬಗ್ಗೆಯೂ ತನಿಖೆ ನಡೆಸಲಿ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಪೊಲೀಸರು ನಡೆಸುವ ತನಿಖೆಯಲ್ಲಿ ಸಂಬರಗಿ ಮಾಡಿರುವ ಆರೋಪಗಳು ಸಾಬೀತಾದರೆ ನನ್ನ ಸಂಪೂರ್ಣ ಆಸ್ತಿಯನ್ನು ರಾಜ್ಯ ಸರ್ಕಾರಕ್ಕೆ ಬರೆದುಕೊಡಲು ಸಿದ್ಧನಿದ್ದೇನೆ. ನನ್ನ ಮೇಲಿನ ಆರೋಪಗಳು ಸುಳ್ಳು ಎಂದು ಕಂಡುಬಂದರೆ ಆರೋಪಿಗಳನ್ನು ಈ ನೆಲದ ಕಾನೂನಿನ ಪ್ರಕಾರ ಶಿಕ್ಷೆಗೆ ಗುರಿಪಡಿಸಲಿ. ಡ್ರಗ್ಸ್ ನಂಟಿಗೆ ಸಂಬಂಧಿಸಿದಂತೆ ನನ್ನ ಮೇಲಿನ ಆರೋಪ ಸತ್ಯಕ್ಕೆ ದೂರವಾದುದ್ದು. ಈ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಸಿಎಂ ಯಡಿಯೂರಪ್ಪ ಅವರಿಗೆ ಹಾಗೂ ಗೃಹ ಸಚಿವ ಬೊಮ್ಮಾಯಿಯವರಿಗೆ ಒತ್ತಾಯಿಸುತ್ತೇನೆ ಎಂದು ಜಮೀರ್ ಟ್ವೀಟ್ ಮಾಡಿದ್ದಾರೆ.

Click to comment

Leave a Reply

Your email address will not be published. Required fields are marked *