ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಪೂರ್ಣಗೊಳ್ಳುವ ಮೊದಲೇ ಕಾಲುವೆ ಕುಸಿತವಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ದೊಡ್ಡ ಕಿಟ್ಟದಹಳ್ಳಿ ಬಳಿ ನಡೆದಿದೆ.
ಬರದನಾಡು ಚಿತ್ರದುರ್ಗ ಜಿಲ್ಲೆಯ ಕನಸಿನ ಕೂಸು ಯೋಜನೆಯಾಗಿರುವ ಭದ್ರಾ ಮೇಲ್ದಂಡೆ ಯೋಜನೆಯಿಂದ ಈಗಾಗಲೇ ಪ್ರಾಯೋಗಿಕವಾಗಿ ವಾಣಿವಿಲಾಸ ಸಾಗರಕ್ಕೆ ಇದೇ ಕಾಲುವೆಯಿಂದ ನೀರು ಹರಿಸಲಾಗಿತ್ತು. ಆದರೆ ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿದ ಮಳೆಯಿಂದಾಗಿ ಈ ಕಾಲುವೆ ಕುಸಿತಗೊಂಡಿದೆ.
ಜಿಲ್ಲೆಯ ಹೊಸದುರ್ಗ ತಾಲೂಕಿನ ದೊಡ್ಡ ಕಿಟ್ಟದಹಳ್ಳಿ ಬಳಿ ಭದ್ರಾ ಮೇಲ್ದಂಡೆ ಯೋಜನೆಯ ಕಾಲುವೆ ಕುಸಿದಿದ್ದು, ಒಂದೇ ಮಳೆಗೆ ಭದ್ರಾ ಮೇಲ್ದಂಡೆ ಯೋಜನೆ ಕಾಲುವೆ ಕುಸಿದಿದ್ದರಿಂದ ರೈತರಲ್ಲಿ ಆತಂಕ ಮನೆ ಮಾಡಿದೆ. ಅಲ್ಲದೆ, ಈ ಕುರಿತು ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳಪೆ ಕಾಮಗಾರಿ ಮಾಡಿದ್ದಕ್ಕೆ ಈ ಭಾಗದ ಅನ್ನದಾತರು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನು ಯೋಜನಾಬದ್ಧವಾಗಿ ಹಾಗೂ ವ್ಯವಸ್ಥಿತವಾಗಿ ಮಾಡುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.