ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ಭಾರತ ರತ್ನ ಗೌರವವನ್ನು ಪ್ರದಾನ ಮಾಡಿದರು.
ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಣಬ್ ಅವರ ಜತೆಗೆ ಸಾಮಾಜಿಕ ಕಾರ್ಯಕರ್ತ ನಾನಾಜಿ ದೇಶ್‍ಮುಖ್ ಹಾಗೂ ಅಸ್ಸಾಮಿ ಗಾಯಕ ಭೂಪೇನ್ ಹಜಾರಿಕಾ ಅವರಿಗೆ ಮರಣೋತ್ತರವಾಗಿ ಭಾರತರತ್ನವನ್ನು ನೀಡಿ ಗೌರವಿಸಲಾಯಿತು. ನಾನಾಜಿ ದೇಶ್‍ಮುಕ್ ಮತ್ತು ಭೂಪೇನ್ ಹಜಾರಿಕಾ ಅವರ ಪರವಾಗಿ ಕುಟುಂಬ ಸದಸ್ಯರು ಭಾರತ ರತ್ನ ಪ್ರಶಸ್ತಿಯನ್ನು ಸ್ವೀಕರಿಸಿದರು.
Advertisement
Advertisement
ದಶಕಗಳ ಕಾಲ ದೇಶಕ್ಕೆ ಪ್ರಣಬ್ ಮುಖರ್ಜಿ ಸಲ್ಲಿಸಿದ ಕೊಡುಗೆಗಾಗಿ ಪ್ರಧಾನಿ ಮೋದಿ ಸರ್ಕಾರ ಈ ವರ್ಷದ ಜನವರಿಯಲ್ಲಿ ‘ಭಾರತ ರತ್ನ’ ಪ್ರಶಸ್ತಿ ಘೋಷಿಸಿತ್ತು. ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರದಲ್ಲಿ ಹಣಕಾಸು ಖಾತೆ ಸೇರಿದಂತೆ ನಾನಾ ಬಗೆಯ ಖಾತೆಗಳನ್ನು ನಿಭಾಯಿಸಿದ ಮುಖರ್ಜಿ ಅವರು 2012ರಲ್ಲಿ 13ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದರು. 2017ರವರೆಗೆ ರಾಷ್ಟ್ರಪತಿ ಭವನದಲ್ಲಿ ಪ್ರಣಬ್ ಮುಖರ್ಜಿ ಜವಾಬ್ದಾರಿ ವಹಿಸಿದ್ದರು.
Advertisement
ಜನಸಂಘದ ಪ್ರಮುಖ ನಾಯಕ ನಾನಾಜಿ ದೇಶ್‍ಮುಖ್ ನಾಗರಿಕರಿಗೆ ಶಿಕ್ಷಣ, ಆರೋಗ್ಯ ಕ್ಷೇತ್ರ ಸಿಗಬೇಕೆಂದು ಹೋರಾಡಿದ ಸಾಮಾಜಿಕ ಕಾರ್ಯಕರ್ತರು. ರಾಜ್ಯಸಭಾ ಸದಸ್ಯರಾಗಿಯೂ ನಾನಾಜಿ ಹೊಣೆ ನಿಭಾಯಿಸಿದ್ದರು. 1999ರಲ್ಲಿ ಪದ್ಮವಿಭೂಷಣ ಪ್ರಶಸ್ತಿಗೂ ನಾನಾಜಿ ಭಾಜನರಾಗಿದ್ದರು.
Advertisement
Watch LIVE as President Kovind presents Bharat Ratna to Shri Pranab Mukherjee, Shri Nanaji Deshmukh (posthumously) and Dr Bhupen Hazarika (posthumously) at Rashtrapati Bhavan https://t.co/dmvFSQQGMS
— President of India (@rashtrapatibhvn) August 8, 2019
ಅಸ್ಸಾಂನ ಸಾದಿಯಾ ಗ್ರಾಮದ ಭೂಪೇನ್ ದೊಡ್ಡ ಸಾಧಕರಾಗಿದ್ದು, ಗೀತೆರಚನೆಕಾರ, ಸಂಗೀತ ನಿರ್ದೇಶಕ, ಗಾಯಕ, ಕವಿ, ಪತ್ರಕರ್ತ, ಚಲನಚಿತ್ರ ನಿರ್ಮಾಪಕ ಹಾಗೂ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. 1975ರಲ್ಲಿ ಅತ್ಯುತ್ತಮ ಸಂಗೀತ ನಿರ್ದೇಶಕ ರಾಷ್ಟ್ರೀಯ ಪ್ರಶಸ್ತಿ, 1985ರಲ್ಲಿ ಕೇಂದ್ರ ಸಂಗೀತ ನಾಟಕ ಪ್ರಶಸ್ತಿ, 1977 ಪದ್ಮಶ್ರೀ, 2001ರಲ್ಲಿ ಪದ್ಮಭೂಷಣ, 1992 ದಾದಾ ಸಾಹೇಬ್ ಫಾಲ್ಕೆ, 2012ರಲ್ಲಿ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿಯನ್ನು ಸರ್ಕಾರ ನೀಡಿ ಗೌರವಿಸಿತ್ತು.