ಬೀದರ್: ಕೊರೊನಾ ವೈರಸ್ ಸೋಂಕು ಕುರಿತಂತೆ ಸಾರ್ವಜನಿಕರಿಗೆ ಮಾಹಿತಿ ಲಭ್ಯವಾಗಲು ಜಿಲ್ಲಾ ಕೇಂದ್ರದಲ್ಲಿ ಸಹಾಯವಾಣಿ ಕೇಂದ್ರ ಆರಂಭಿಸುವ ಕುರಿತಂತೆ ಜಿಲ್ಲಾಧಿಕಾರಿಗಳಾದ ಡಾ.ಹೆಚ್.ಆರ್ ಮಹಾದೇವ್ ಅವರು ಡಿಹೆಚ್‍ಓ ಮತ್ತು ಇನ್ನಿತರ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಟಿ.ಎಂ ವಿಜಯ್‍ಭಾಸ್ಕರ್ ಅವರು ಇಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ಬಳಿಕ ಜಿಲ್ಲಾಧಿಕಾರಿಗಳು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಹೊರ ದೇಶ ಅಥವಾ ಹೊರ ರಾಜ್ಯಗಳಿಂದ ವಿಮಾನ, ರೈಲ್ವೆ ಅಥವಾ ಬಸ್‍ಗಳ ಮೂಲಕ ಜಿಲ್ಲೆಗೆ ಆಗಮಿಸುವ ವ್ಯಕ್ತಿಗಳ ತಪಾಸಣೆ ನಡೆಸಬೇಕು. ಕೆಲವು ದಿನಗಳ ಹಿಂದೆ ಜಿಲ್ಲೆಗೆ ಯಾರಾದರೂ ಕೊರೊನಾ ಸೋಂಕು ಪೀಡಿತ ರಾಷ್ಟ್ರಗಳಿಂದ ಆಗಮಿಸಿದ್ದರೆ ಆ ವ್ಯಕ್ತಿಗಳ ಮಾಹಿತಿ ಕಲೆ ಹಾಕಿ, ಅವರ ಮೇಲೆ ವಿಶೇಷ ನಿಗಾ ವಹಿಸಬೇಕು ಎಂದು ತಿಳಿಸಿದರು.
Advertisement
Advertisement
ಜಾತ್ರೆ, ಸಂತೆಗಳು ಸಾಧ್ಯವಾದಷ್ಟು ನಡೆಯದಂತೆ ಎಚ್ಚರ ವಹಿಸುವುದು ಸೂಕ್ತ. ವಿಮಾನ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣಗಳಲ್ಲಿ ಸ್ವಯಂ ಘೋಷಣಾ ಪ್ರಮಾಣ ಪತ್ರಗಳ ಅರ್ಜಿಗಳು ಮತ್ತು ಹೆಲ್ಪ್ ಡೆಸ್ಕ್ ವ್ಯವಸ್ಥೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ತಾಲೂಕು ಮಟ್ಟದ ಆರೋಗ್ಯಾಧಿಕಾರಿಗಳು ಸಹ ಸಕ್ರಿಯವಾಗಿ ಕರ್ತವ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು. ಗ್ರಾಮೀಣ ಭಾಗದಲ್ಲಿ ಕೊರೊನಾ ಸೋಂಕಿನ ಬಗ್ಗೆ ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದು ಸೂಚಿಸಿದರು.
Advertisement
Advertisement
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಸೂರ್ಯಕಾಂತ ಎಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ವಿ.ಜಿ ರೆಡ್ಡಿ, ಬೀದರ ಬ್ರಿಮ್ಸ್ ನಿರ್ದೇಶಕರಾದ ಡಾ. ಶಿವಕುಮಾರ್, ಬ್ರಿಮ್ಸ್ ವೈದ್ಯಾಧಿಕಾರಿಗಳಾದ ವಿಜಯ್‍ಕುಮಾರ್ ಅಂತಪನೋರ್ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.