– 28,240 ಫಲಾನುಭವಿಗಳಿಗೆ ಸವಲತ್ತು ವಿತರಣೆ
ಕೋಲಾರ: ಸಚಿವ ಸಂಪುಟ ವಿಸ್ತರಣೆಯಿಂದ ಮುಂದೂಡಿಕೆಯಾಗಿದ್ದ ಮಾಲೂರಿನ ಬೃಹತ್ ಸಮಾವೇಶ ಇದೇ ಆ.10 ರಂದು ನಡೆಯಲಿದೆ. ಸಚಿವ ಸ್ಥಾನ ಹಂಚಿಕೆ ಅಸಮಾಧಾನದ ನಡುವೆ ಕೋಲಾರಕ್ಕೆ (Kolar) ಸಿಎಂ ಭೇಟಿ ನೀಡುತ್ತಿದ್ದು, 20 ದಿನಗಳ ಬಳಿಕ ಬೃಹತ್ ಸಮಾವೇಶ ಕಾರ್ಯಕ್ರಮ ನಿಗದಿಯಾಗಿದೆ.
ಆಗಸ್ಟ್ 10ರ ಸೋಮವಾರ ಮಾಲೂರಿನಲ್ಲಿ ನಡೆಯಲಿರುವ ಸಮಾವೇಶದಲ್ಲಿ (Congress Convention) ಸಿಎಂ ಡಿ.ಕೆ ಶಿವಕುಮಾರ್ (DK Shivakumar), ಡಿಸಿಎಂ ಪರಮೇಶ್ವರ್ ಹಾಗೂ ಹಲವು ಸಚಿವರು ಬೃಹತ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. 3,200 ಕೋಟಿ ರೂ.ಮೊತ್ತದ ವಿವಿಧ ಅಭಿವೃದ್ದಿ ಕಾಮಗಾರಿಗಳ ಶಂಕುಸ್ಥಾಪನೆ, ಕಾಮಗಾರಿ ಉದ್ಘಾಟನೆ ಸೇರಿ ಫಲಾನುಭವಿಗಳ ಬೃಹತ್ ಸಮಾವೇಶ ಇದಾಗಿದೆ.


ಮಾಲೂರು ತಾಲ್ಲೂಕಿನ 28,240 ಜನ ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆ ಕಾರ್ಯಕ್ರಮದಲ್ಲಿ ಮೇಲ್ಸೇತುವೆ ಕಾಮಗಾರಿ, ಕೆರೆ ಅಭಿವೃದ್ದಿ, ಹೊಸ ಬಸ್ ನಿಲ್ದಾಣ, ಆಸ್ಪತ್ರೆ ಕಟ್ಟಡ ಸೇರಿದಂತೆ ಹಲವು ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಲಿದೆ. ಇನ್ನೂ ಸಮಾವೇಶದಲ್ಲಿ ಸುಮಾರು 50 ರಿಂದ 60 ಸಾವಿರ ಜನರು ಭಾಗಿಯಾಗುವ ಸಾಧ್ಯತೆ ಇದ್ದು, ಸಿಎಂ ಆದ ಬಳಿಕ ಮೊದಲ ಬಾರಿಗೆ ಕೋಲಾರಕ್ಕೆ ಆಗಮಿಸುತ್ತಿದ್ದು, ಬೃಹತ್ ಸಮಾವೇಶದ ಮೂಲಕ ಸಿಎಂ ಡಿಕೆಶಿ ನೇತೃತ್ವದ ಸರ್ಕಾರ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಶಕ್ತಿ ಪ್ರದರ್ಶನ ಮಾಡಲಿದ್ದಾರೆ. ಕೋಲಾರ ಜಿಲ್ಲೆಯ ಮಾಲೂರು ಹೊರ ವಲಯದ ಚೊಕ್ಕಂಡಹಳ್ಳಿ ಬಳಿ ಹಾಕಲಾಗಿರುವ ಬೃಹತ್ ವೇದಿಕೆ ಸಿದ್ಧಗೊಳ್ಳುತ್ತಿರುವ ಸ್ಥಳದಲ್ಲಿ ಜಿಲ್ಲಾಧಿಕಾರಿ ಎಂ.ಆರ್ ರವಿಕುಮಾರ್ ಅವರೊಂದಿಗೆ ಜಂಟಿ ಪೂರ್ವಭಾವಿ ಸಿದ್ಧತಾ ಸಭೆ ನಡೆಸಿದ ಬಳಿಕ ಶಾಸಕ ನಂಜೇಗೌಡ ಮಾಹಿತಿ ನೀಡಿದ್ರು.
ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಎಂ.ಆರ್ ರವಿಕುಮಾರ್, ಮುಖ್ಯಮಂತ್ರಿಗಳು, ಸಚಿವರು, ಸಂಸದರು, ಶಾಸಕರು ಸೇರಿದಂತೆ ಹಲವು ಗಣ್ಯರು ಭಾಗವಹಿಸುವ ಈ ಕಾರ್ಯಕ್ರಮವನ್ನ ಅಚ್ಚುಕಟ್ಟಾಗಿ ನಡೆಸಲು ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಸಿಎಂ ಕಚೇರಿಯ ನಿರ್ದೇಶನದಂತೆ ಸೋಮವಾರ ಕಾರ್ಯಕ್ರಮ ನಡೆಯಲಿದ್ದು, ತಾಲೂಕು ಹಾಗೂ ಜಿಲ್ಲಾಡಳಿತದ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡುತ್ತಿವೆ. ಪೊಲೀಸ್, ಪಂಚಾಯತ್ ರಾಜ್ ಸೇರಿದಂತೆ ಎಲ್ಲ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಭದ್ರತೆ ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ಈ ಕಾರ್ಯಕ್ರಮದ ಯಶಸ್ಸಿಗೆ ಮಾಧ್ಯಮಗಳ ಸಹಕಾರವೂ ಅಗತ್ಯ ಎಂದು ಮನವಿ ಮಾಡಿದರು.
ಇನ್ನೂ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪ್ರವೀಣ್ ಪಿ ಬಾಗೇವಾಡಿ ಉಪಸ್ಥಿತರಿದ್ರು.

