ನವದೆಹಲಿ: ಐಟಿ ಕಾರಿಡಾರ್ ಡಿ ನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಹೈಕೋರ್ಟ್ ಆದೇಶಕ್ಕೆ ತಡೆ ನೀಡಿರುವ ಸುಪ್ರೀಂ ಕೋರ್ಟ್ ಸದ್ಯಕ್ಕೆ ಬಿ.ಎಸ್ ಯಡಿಯೂರಪ್ಪ ವಿರುದ್ಧ ತನಿಖೆ ಮಾಡದಂತೆ ಸೂಚಿಸಿದೆ.
ತಮ್ಮ ವಿರುದ್ಧ ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ಸೂಚಿಸಿದ ಹಿನ್ನೆಲೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಬಿ.ಎಸ್ ಯಡಿಯೂರಪ್ಪ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ. ಎನ್.ವಿ ರಮಣ ನೇತೃತ್ವದ ತ್ರಿ ಸದಸ್ಯ ಪೀಠ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿತು.
2000-2001ನಲ್ಲಿ ಐಟಿ ಕಾರಿಡಾರ್ ಯೋಜನೆಗೆ ವಶಪಡಿಸಿಕೊಂಡ ಭೂಮಿಯನ್ನು 2006 ರಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ಬಿ.ಎಸ್ ಯಡಿಯೂರಪ್ಪ ಅಧಿಕಾರ ದುರ್ಬಳಕೆ ಮಾಡಿಕೊಂಡು ಆಪ್ತರ ಹೆಸರಿಗೆ ಡಿ ನೋಟಿಫಿಕೇಷನ್ ಮಾಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ವಾಸುದೇವ ರೆಡ್ಡಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇದನ್ನೂ ಓದಿ: ಹೈಕಮಾಂಡ್‍ಗೆ ಸೆಡ್ಡು ಹೊಡೆದ ಬಿಎಸ್‍ವೈ – ಪುತ್ರನಿಗೆ ಕ್ಷೇತ್ರ ಬಿಟ್ಟುಕೊಟ್ಟಿರುವ ಹಿಂದಿದೆ ಹಲವು ಲೆಕ್ಕಾಚಾರ
ಈ ಪ್ರಕರಣವನ್ನು ವಜಾ ಮಾಡುವಂತೆ ಬಿ.ಎಸ್ ಯಡಿಯೂರಪ್ಪ ಹಾಗೂ ಮತ್ತೋರ್ವ ಆರೋಪಿ ಆರ್.ವಿ ದೇಶಪಾಂಡೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಆರ್.ವಿ ದೇಶಪಾಂಡೆ ಅವರನ್ನು ಪ್ರಕರಣದಿಂದ ಕೈ ಬಿಟ್ಟು ಬಿಎಸ್‌ವೈ ವಿರುದ್ಧ ತನಿಖೆ ನಡೆಸಲು ಸೂಚನೆ ನೀಡಿತ್ತು. ಈ ಆದೇಶವನ್ನು ಪ್ರಶ್ನೆ ಮಾಡಿ ಬಿ.ಎಸ್ ಯಡಿಯೂರಪ್ಪ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ಬಾಬ್ರಿ ಮಸೀದಿ ವಿವಾದ: ಅಡ್ವಾಣಿ ಸೇರಿ ಹಲವು ನಾಯಕರನ್ನು ಖುಲಾಸೆಗೊಳಿಸಿದ್ದ ಅರ್ಜಿ ಆ.1ಕ್ಕೆ ವಿಚಾರಣೆ