– ಮೃತರ ಕುಟುಂಬಗಳಿಗೆ 6 ಲಕ್ಷ ರೂ. ಪರಿಹಾರ
ಪಾಟ್ನಾ: ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ದೋಣಿ ದುರಂತದಲ್ಲಿ (Bihar Boat Tragedy) 13 ಮಕ್ಕಳು ಮೃತಪಟ್ಟಿದ್ದಾರೆ. ಸುಮಾರು 15ರಿಂದ 20 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿ ಮಗುಚಿಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ.
ನಿನ್ನೆ ರಾತ್ರಿ ಸುಮಾರು 8:30ರ ವೇಳೆಗೆ ಮಕ್ಕಳು ಪಕ್ಕದ ಹಳ್ಳಿಯಲ್ಲಿ ನಡೆಯುತ್ತಿದ್ದ ಹಬ್ಬದಲ್ಲಿ ಭಾಗವಹಿಸಲು ದೋಣಿಯಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ದೋಣಿ ಮಗುಚಿಬಿದ್ದಿದೆ. ತಕ್ಷಣವೇ ವಿಪತ್ತು ನಿರ್ವಹಣಾ ತಂಡಗಳು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.
ಘಟನೆಯಲ್ಲಿ ಈವರೆಗೆ ಏಳು ಜನರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ತಂಡ ಸ್ಥಳೀಯ ಡೈವರ್ಗಳ ಸಹಕಾರದೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಸಿದೆ. ಮೃತಪಟ್ಟ 13 ಮಕ್ಕಳೂ 15 ವರ್ಷ ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನವರು ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಮಾಹಿತಿ ನೀಡಿದ್ದಾರೆ.
ಮೋದಿ ಸಂತಾಪ, 2 ಲಕ್ಷ ರೂ. ಪರಿಹಾರ
ದೋಣಿ ದುರಂತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಮೃತರ ಹತ್ತಿರದ ಸಂಬಂಧಿಕರಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಗಾಯಗೊಂಡವರಿಗೆ ತಲಾ 50,000 ರೂ. ಆರ್ಥಿಕ ನೆರವು ನೀಡಲಾಗುತ್ತದೆ.
4 ಲಕ್ಷ ರೂ. ಪರಿಹಾರ ಘೋಷಿಸಿದ ಬಿಹಾರ ಸಿಎಂ
ಬಿಹಾರ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಕೂಡ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಆರ್ಥಿಕ ನೆರವು ಘೋಷಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ.ಇದನ್ನೂ ಓದಿ: SIR ಇತ್ತೀಚಿನದ್ದು.. ರಾಹುಲ್ ನೇತೃತ್ವದಲ್ಲಿ ಕಾಂಗ್ರೆಸ್ ಚುನಾವಣೆಗಳಲ್ಲಿ ಸೋಲುತ್ತಲೇ ಬಂದಿದೆ: ಅಮಿತ್ ಶಾ ವಾಗ್ದಾಳಿ
ದೋಣಿ ಮಗುಚಲು ನಿಖರ ಕಾರಣವೇನು ಎಂಬ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದ್ದು, ಘಟನೆಯ ಬಳಿಕ ಯಾರಾದರೂ ನಾಪತ್ತೆಯಾಗಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.ಇದನ್ನೂ ಓದಿ: AI Voice Cloning | ಸೈಬರ್ ವಂಚನೆಯ ಹೊಸ ಅಸ್ತ್ರ – ಪಾರಾಗೋದು ಹೇಗೆ?

