ಆನೇಕಲ್: ರಸ್ತೆಯಲ್ಲಿದ್ದ ಗುಂಡಿ ತಪ್ಪಿಸಲು ಹೋಗಿ ಬೈಕ್ ರಸ್ತೆ ಬದಿಯ ಹಳ್ಳಕ್ಕೆ ಬಿದ್ದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಆನೇಕಲ್‌ನ (Anekal) ವಣಕನಹಳ್ಳಿ ಬಳಿ ನಡೆದಿದೆ. ಅಪಘಾತದಲ್ಲಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಆತನ ಸ್ಥಿತಿ ಗಂಭೀರವಾಗಿದೆ.
ಅಸ್ಸಾಂ ಮೂಲದ ಅನ್ವರ್ ಮೃತ ಯುವಕ. ಹಿಂಬದಿ ಸವಾರ ಪುತುಲ್ ಗಂಭೀರವಾಗಿ ಗಾಯಗೊಂಡಿದ್ದಾನೆ. ಇಬ್ಬರೂ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ತಮಿಳುನಾಡಿನಿಂದ ಆನೇಕಲ್ ಮಾರ್ಗವಾಗಿ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿದ್ದ ಗುಂಡಿಯನ್ನು ತಪ್ಪಿಸಲು ಬೈಕ್ ಸವಾರ ಮುಂದಾದಾಗ ವಾಹನದ ನಿಯಂತ್ರಣ ತಪ್ಪಿ ಬೈಕ್ ಸಮೇತ ರಸ್ತೆ ಬದಿಯ ಹಳ್ಳಕ್ಕೆ ಬಿದ್ದಿದ್ದಾರೆ. ಇದನ್ನೂ ಓದಿ: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ
ಪುತುಲ್‌ನನ್ನು ಚಿಕಿತ್ಸೆಗಾಗಿ ಆನೇಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಳೆದ ಆರು ತಿಂಗಳಿನಿಂದ ರಸ್ತೆಯಲ್ಲಿ ಗುಂಡಿ ಬಿದ್ದಿದೆ. ಈ ಬಗ್ಗೆ ಸಾರ್ವಜನಿಕರು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ದೂರು ಕೊಟ್ಟಿದ್ದರು. ಇದುವರೆಗೂ ಯಾವುದೇ ರೀತಿಯ ಗುಂಡಿ ಸಮಸ್ಯೆಯನ್ನು ಬಗೆಹರಿಸಿಲ್ಲ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಗುಂಡಿಗೆ ಬಿದ್ದು ದ್ವಿಚಕ್ರ ವಾಹನ ಸ್ಕಿಡ್ – ಮಗಳನ್ನು ಕಾಲೇಜಿಗೆ ಕರೆದೊಯ್ಯುತ್ತಿದ್ದ ತಾಯಿ ಸಾವು
