ನವದೆಹಲಿ: ಬಿಲ್ಕಿಸ್ ಬಾನು ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳನ್ನು ಬಿಡುಗಡೆ ಮಾಡಿರುವ ಗುಜರಾತ್ ಸರ್ಕಾರದ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದೆ.
ಪ್ರಕರಣಕ್ಕೆ ಸಂಬಂಧಿಸಿ 11 ಅಪರಾಧಿಗಳನ್ನು ಗುಜರಾತ್ ಸರ್ಕಾರ ಬಿಡುಗಡೆ ಮಾಡಿತ್ತು. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪಾಲಿಟ್‌ಬ್ಯುರೊ ಸದಸ್ಯೆ ಸುಭಾಷಿಣಿ ಅಲಿ, ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಮತ್ತು ಇತರ ಅರ್ಜಿದಾರರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಇದನ್ನೂ ಓದಿ: ಎಸಿಬಿ ರದ್ದು – ಹೈ ಆದೇಶಕ್ಕೆ ತಡೆ ಕೋರಿ ಸುಪ್ರೀಂನಲ್ಲಿ ಅರ್ಜಿ
ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಪೀಠದ ಮುಂದೆ ಹಿರಿಯ ವಕೀಲರಾದ ಕಪಿಲ್ ಸಿಬಲ್, ಅಭಿಷೇಕ್ ಸಿಂಘ್ವಿ ಮತ್ತು ಅಪರ್ಣಾ ಭಟ್ ಅವರು ಮೇಲ್ಮನವಿ ಅರ್ಜಿ ಪ್ರಸ್ತಾಪ ಮಾಡಿದರು. ಈ ವೇಳೆ, ಪ್ರಕರಣ ಪರಿಶೀಲಿಸುವುದಾಗಿ ಪೀಠವು ತಿಳಿಸಿದೆ.
ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಎಲ್ಲಾ ಹನ್ನೊಂದು ಅಪರಾಧಿಗಳನ್ನು ಗುಜರಾತ್ ಸರ್ಕಾರವು ಆಗಸ್ಟ್ 15 ರಂದು ಬಿಡುಗಡೆ ಮಾಡಿದೆ. ಬೃಹತ್ ಪ್ರತಿಭಟನೆಯ ನಡುವೆಯೂ ಬಿಡುಗಡೆ ಮಾಡಲಾಯಿತು. ಅವರಿಗೆ ಹಾರ ಹಾಕಿ ಸಿಹಿ ಹಂಚಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿವೆ. ಇದನ್ನೂ ಓದಿ: ಭಯೋತ್ಪಾದಕ ಚಟುವಟಿಕೆ ಆತಂಕ – ಹೊರಗಿನಿಂದ ಬರುವ ಮಸೀದಿ, ಮದರಸಾ ಧರ್ಮಗುರುಗಳಿಗೆ ಅಸ್ಸಾಂನಲ್ಲಿ ಹೊಸ ನಿಯಮ
ಜನವರಿ 21, 2008 ರಂದು ಮುಂಬೈನ ವಿಶೇಷ ಕೇಂದ್ರೀಯ ತನಿಖಾ ದಳ (ಸಿಬಿಐ) ನ್ಯಾಯಾಲಯವು, ಬಿಲ್ಕಿಸ್ ಬಾನು ಅತ್ಯಾಚಾರ ಮತ್ತು ಅವರ ಕುಟುಂಬದ ಏಳು ಸದಸ್ಯರ ಸಾಮೂಹಿಕ ಹತ್ಯೆಯ ಆರೋಪದ ಮೇಲೆ ಹನ್ನೊಂದು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ನಂತರ ಅವರ ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಎತ್ತಿ ಹಿಡಿದಿತ್ತು.