ಬಿಪೊರ್‌ಜೊಯ್‌ ಸೈಕ್ಲೋನ್‌ ಎಫೆಕ್ಟ್‌; ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ

Public TV
1 Min Read
biporjoy cyclone

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಬಿಪೊರ್‌ಜೊಯ್‌ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತ ಚಂಡಮಾರುತವಾಗಿ ಬದಲಾಗಿತ್ತು. ಕರ್ನಾಟಕದ ದಕ್ಷಿಣ ಒಳನಾಡು, ಕೇರಳ, ಲಕ್ಷದೀಪ ಸಮೂಹಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಉತ್ತರ ಒಳನಾಡು, ತಮಿಳುನಾಡು, ಆಂಧ್ರಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಲಿದೆ. ಮಣಿಪುರ, ಮಿಜೋರಾಂ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ರಾಜಸ್ಥಾನ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

RAIN 3

ಚಂಡಮಾರುತದ ಎಫೆಕ್ಟ್‌ ರಾಜ್ಯದ 9 ಜಿಲ್ಲೆಗಳಿಗೆ ತಟ್ಟಲಿದೆ. ಮುಂದಿನ 3 ದಿನಗಳ ಕಾಲ ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಮಳೆಯಾಗುವ ಸಾಧ್ಯತೆ ಇದ್ದು, ಗಾಳಿಯ ವೇಗವು ಘಂಟೆಗೆ 30-40 ಕಿಮೀ ತಲುಪಬಹುದು ಎಂದು ಎಚ್ಚರಿಸಿದೆ.

ಗರಿಷ್ಠ ಉಷ್ಣಾಂಶವು ರಾಜ್ಯದಾದ್ಯಂತ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಇಂದು ಮತ್ತು ನಾಳೆ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40 ಕಿಮೀನಿಂದ 55 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಈ ಹಿನ್ನಲೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲೂ ಮಳೆ ಮುನ್ಸೂಚನೆ ನೀಡಲಾಗಿದೆ. ಇಂದು ಮತ್ತು ನಾಳೆ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

Share This Article