ಬೆಂಗಳೂರು: ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ ಶಿಸ್ತು ಉಲ್ಲಂಘಿಸಿದ ಹಿನ್ನೆಲೆಯಲ್ಲಿ, ಬಿಜೆಪಿ ರಾಜ್ಯ ಘಟಕದ ವಕ್ತಾರ ಹಾಗೂ ಮೈಸೂರಿನ (Mysuru) ಎಂ.ಜಿ. ಮಹೇಶ್(M.G. Mahesh) ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಅವಧಿಗೆ ಉಚ್ಚಾಟಿಸಲಾಗಿದೆ.
ಜೂನ್ 19, 2026 ರಂದು ಸಂಜೆ ನಡೆದ ಪಕ್ಷದ ಪ್ರಮುಖರ ಸಭೆಯಲ್ಲಿ ಎಂ.ಜಿ. ಮಹೇಶ್ ಅವರು ಹಿರಿಯ ನಾಯಕರ ವಿರುದ್ಧ ಕೀಳುಮಟ್ಟದ ಆರೋಪಗಳನ್ನು ಮಾಡುವ ಮೂಲಕ ಪಕ್ಷದ ಶಿಸ್ತು ಉಲ್ಲಂಘಿಸಿದ್ದರು.
ಈ ವರ್ತನೆಗೆ ಸಂಬಂಧಿಸಿದಂತೆ ರಾಜ್ಯ ಶಿಸ್ತು ಸಮಿತಿಯು ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿ ಉತ್ತರ ಕೇಳಿತ್ತು. ನೋಟಿಸ್‌ಗೆ ಎಂ.ಜಿ. ಮಹೇಶ್ ಅವರು ನೀಡಿದ ಸ್ಪಷ್ಟೀಕರಣವು ತೃಪ್ತಿಕರವಾಗಿಲ್ಲದ ಕಾರಣ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ.
ಎಂ.ಜಿ. ಮಹೇಶ್ ಅವರು ನೀಡಿದ ಸ್ಪಷ್ಟೀಕರಣವು ತೃಪ್ತಿಕರವಾಗಿಲ್ಲದ ಕಾರಣ, ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ, ಮುಂದಿನ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ರಾಜ್ಯ ಬಿಜೆಪಿಯ ಶಿಸ್ತು ಸಮಿತಿಯ ಅಧ್ಯಕ್ಷ ಲಿಂಗರಾಜು ಪಾಟೀಲ್ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ. ಈ ಆದೇಶವು ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಪಕ್ಷದ ಶಿಸ್ತು ಕಾಪಾಡುವ ನಿಟ್ಟಿನಲ್ಲಿ ಹೈಕಮಾಂಡ್ ಈ ನಿರ್ಧಾರ ಕೈಗೊಂಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
