ಬೆಂಗಳೂರು: ಜಯನಗರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಕೈಜೋಡಿಸಿದ ಆರೋಪದ ಹಿನ್ನೆಲೆಯಲ್ಲಿ ಭೈರಸಂದ್ರದ ಪಾಲಿಕೆ ಸದಸ್ಯ ಎನ್ ನಾಗರಾಜು ಅವರಿಗೆ ಬಿಜೆಪಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ಬಿಜೆಪಿ ಪಕ್ಷದಿಂದ ಭೈರಸಂದ್ರ ವಾರ್ಡ್ ನ ಕಾರ್ಪೊರೇಟರ್ ಆಗಿ ಆಯ್ಕೆಯಾಗಿ ಜಯನಗರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಪರವಾಗಿ ಪ್ರಚಾರ ಮಾಡದೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದೀರಿ. ಇದು ಪಕ್ಷಕ್ಕೆ ದ್ರೋಹ ಬಗೆಯುವ ಕೆಲಸವಾಗಿದ್ದು, ಪಕ್ಷ ವಿರೋಧಿ ಚಟುವಟಿಕೆಯಾಗಿರುತ್ತದೆ ಎಂದು ನೋಟಿಸ್ ನಲ್ಲಿ ತಿಳಿಸಿದ್ದಾರೆ.
Advertisement
ಈ ಬಗ್ಗೆ 7 ದಿನಗಳ ಒಳಗೆ ಸಮರ್ಪಕವಾದ ಉತ್ತರವನ್ನು ನೀಡಬೇಕು. ಇಲ್ಲವಾದಲ್ಲಿ ಸೂಕ್ತ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಬೆಂಗಳೂರು ಬಿಜೆಪಿ ನಗರಾಧ್ಯಕ್ಷ ಪಿ.ಎನ್. ಸದಾಶಿವ ಶೋಕಾಸು ನೋಟಿಸಿನಲ್ಲಿ ಎಚ್ಚರಿಕೆ ನೀಡಿದ್ದಾರೆ.
Advertisement
ಬಿಜೆಪಿ ಮಾಜಿ ಶಾಸಕ ಬಿ ಎನ್ ವಿಜಯಕುಮಾರ್ ನಿಧನದಿಂದ ತೆರೆವಾದ ಜಯನಗರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ರಾಮಲಿಂಗ ರೆಡ್ಡಿ ಅವರ ಪುತ್ರಿ ಸೌಮ್ಯ ರೆಡ್ಡಿ ಅವರು 2889 ಮತಗಳ ಅಂತರದಿಂದ ವಿಜಯ್ ಕುಮಾರ್ ಸಹೋದರ ಪ್ರಹ್ಲಾದ್ ಬಾಬು ಅವರನ್ನು ಸೋಲಿಸಿದ್ದರು.
Advertisement
ಬಿಜೆಪಿ ಭದ್ರ ಕೋಟೆಯಾಗಿದ್ದ ಜಯನಗರದಲ್ಲಿ ಹಿರಿಯ ಬಿಜೆಪಿ ನಾಯಕರುಗಳಾದ ಕೇಂದ್ರ ಸಚಿವ ಅನಂತ್ ಕುಮಾರ್, ಮಾಜಿ ಉಪ ಮುಖ್ಯಮಂತ್ರಿ ಆರ್ ಅಶೋಕ್ ಸೇರಿದಂತೆ ಹಲವು ನಾಯಕರುಗಳು ಬಿರುಸಿನ ಪ್ರಚಾರ ನಡೆಸಿದ್ದರು. ಸೋಲಿನ ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯ ನಾಯಕರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿತ್ತು.ಇದನ್ನೂ ಓದಿ:ಜಯನಗರ ಸೋಲಿನ ಬಳಿಕ ಅನಂತ್‍ಕುಮಾರ್ ಗೆ ‘ಶಾ’ ಫುಲ್ ಕ್ಲಾಸ್!