ದಾವಣಗೆರೆ: ಬಿಜೆಪಿಯವರು ಸುಳ್ಳಿನ ಸರದಾರರು, ಅದರಲ್ಲೂ ರಾಜ್ಯಾಧ್ಯಕ್ಷ ಯಡಿಯೂರಪ್ಪ ಸುಳ್ಳಿನ ಸರದಾರ ಎಂದು ಮಾಜಿ ಸಚಿವ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ ಕಿಡಿಕಾರಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಬಿಟ್ಟು 13 ಮಂದಿ ಶಾಸಕರು ಬಿಜೆಪಿಗೆ ಹೋಗುತ್ತಾರೆ ಎನ್ನುವುದು ಶುದ್ಧ ಸುಳ್ಳು. ಯಾರೂ ಕೂಡ ಕಾಂಗ್ರೆಸ್ ಬಿಟ್ಟು ಹೋಗುವುದಿಲ್ಲ. ಅಷ್ಟೇ ಅಲ್ಲದೇ ನಾನು ಸಹ ಬಿಜೆಪಿ ಸೇರುತ್ತಾರೆ ಎನ್ನುವ ಹೇಳಿಕೆ ನೀಡುತ್ತಿದ್ದಾರೆ. ನಾನು ಯಾವುದೇ ಕಾರಣಕ್ಕೂ ಬಿಜೆಪಿ ಸೇರುವುದಿಲ್ಲ. ಬಿಜೆಪಿಯವರು ಸುಳ್ಳಿನ ಸರದಾರರು, ಅದರಲ್ಲೂ ಯಡಿಯೂರಪ್ಪ ಸುಳ್ಳಿನ ಸರದಾರ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.
ಬೆಳಗಾವಿ ಗೊಂದಲವನ್ನು ಕೂಡಲೇ ಸರಿಪಡಿಸಲಾಗುತ್ತದೆ. ಬಿಬಿಎಂಪಿ ಮೇಯರ್ ಸ್ಥಾನಕ್ಕೆ ಎರಡು ಬಣಗಳ ಬಗ್ಗೆ ಮಾತನಾಡಿ, ಬಿಬಿಎಂಪಿ ಮೇಯರ್ ಸ್ಥಾನಕ್ಕೆ ಪಟ್ಟು ಹಿಡಿದಿದ್ದು ನಿಜ. ಒಮ್ಮೆಯಾದರೂ ನಮ್ಮ ವೀರಶೈವರು ಮೇಯರ್ ಆಗಲಿ ಎನ್ನುವುದು ನಮ್ಮ ಆಸೆಯಾಗಿತ್ತು. ಆದರೆ ಮೇಯರ್ ಪಟ್ಟ ಕೊಡಲು ಮೀನಾಮೇಷ ಎಣಿಸುತ್ತಿದ್ದಾರೆ. ಮುಂದೆ ಏನಾಗುತ್ತೆ ಎಂಬುದನ್ನು ಕಾದು ನೋಡುತ್ತೇನೆ. ಈ ವಿಚಾರದಲ್ಲಿ ನಮ್ಮಲ್ಲಿ ಯಾವುದೇ ಬಣವಿಲ್ಲ ಎಂದು ಸ್ಪಷ್ಟಪಡಿಸಿದರು.
ಈ ವೇಳೆ ಸಚಿವ ಸ್ಥಾನದ ಆಸೆಯನ್ನು ಹೊರ ಹಾಕಿದ ಅವರು, ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ. ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಮಂತ್ರಿಗಿರಿ ಕೊಟ್ಟರೆ ಕೆಲಸ ಮಾಡುತ್ತೇನೆ. ಇಲ್ಲವಾದರೇ ಶಾಸಕನಾಗಿಯೇ ಕೆಲಸವನ್ನು ಮುಂದುವರಿಸಿಕೊಂಡು ಹೋಗುತ್ತೇನೆ ಎಂದು ತಿಳಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv