Saturday, 14th December 2019

ಕಾಂಗ್ರೆಸ್ಸಿನವರಿಗೆ ಜೆಡಿಎಸ್‍ನವ್ರು ಚಾಕು ಹಾಕಿದ್ರು: ಕೆ.ಎಸ್.ಈಶ್ವರಪ್ಪ ವ್ಯಂಗ್ಯ

ಮಂಡ್ಯ: ಕಾಂಗ್ರೆಸ್‍ನವರಿಗೆ ಜೆಡಿಎಸ್‍ನವರು ಚಾಕು ಹಾಕಿದರು ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, 2018ರ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳನ್ನು ಕಡೆಗಣಿಸಿದರು. ಆದರೆ ಎರಡೂ ಪಕ್ಷಗಳು ಅಪವಿತ್ರ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದರು. ಆದರೆ ಅವರಲ್ಲಿ ಹೊಂದಾಣಿಕೆ ಸಮಸ್ಯೆ ಉಂಟಾಗಿ ಪರಸ್ಪರ ಚಾಕು ಹಾಕಿಕೊಂಡರು. ಪರಿಣಾಮ ಬಿಜೆಪಿಯು ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲವು ಸಾಧಿಸಿತು. ಇದು ವಿಧಾನಸಭಾ ಉಪ ಚುನಾವಣೆಯಲ್ಲಿಯೂ ಮರುಕಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದ 15 ವಿಧಾನಸಾಭ ಕ್ಷೇತ್ರಗಳಿಗೆ ಉಪ ಚುನಾವಣೆಯನ್ನು ಚುನಾವಣಾ ಆಯೋಗ ಘೋಷಿಸಿದೆ. ಎಲ್ಲ ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಗೆಲ್ಲುತ್ತಾರೆ. ಅನರ್ಹ ಶಾಸಕರ ಭವಿಷ್ಯ ಸುಪ್ರೀಂಕೋರ್ಟ್ ತೀರ್ಮಾನಿಸುತ್ತದೆ. ರಾಜಕಾರಣಿಗಳು ಹೇಳಲು ಸಾಧ್ಯವಿಲ್ಲ. ಆದರೆ ಅನರ್ಹ ಶಾಸಕರಿಗೆ ಸುಪ್ರೀಂಕೋರ್ಟ್ ನಲ್ಲಿ ಗೆಲುವು ಸಿಗುವ ವಿಶ್ವಾಸವಿದೆ ಎಂದರು.

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ತೀರ್ಪು ತಪ್ಪು ಎಂಬುದು ಜನರ ಅಭಿಪ್ರಾಯವಾಗಿದೆ. ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಅಭ್ಯರ್ಥಿಯನ್ನು ಪಕ್ಷದ ನಾಯಕರ ಜೊತೆಗೆ ಚರ್ಚೆ ಮಾಡಿ, ಫೈನಲ್ ಮಾಡುತ್ತೇವೆ. ಈ ನಿಟ್ಟಿನಲ್ಲಿ ಈಗಾಗಲೇ ಚರ್ಚೆ ನಡೆದಿದ್ದು, ಆದಷ್ಟು ಬೇಗ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದರು.

ಬಿಜೆಪಿ ಮೇಲೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಮೃಧು ಧೋರಣೆ ತೋರುತ್ತಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಚಿವರು, ಕುಮಾರಸ್ವಾಮಿ ಯಾವ ಸಂದರ್ಭದಲ್ಲಿ ಯಾರ ಪರ ಇರುತ್ತಾರೆ ಅಂತ ಅವರಿಗೆ ಗೊತ್ತಿಲ್ಲ. ಅವರು ಮೈತ್ರಿ ಪಕ್ಷ ಕಾಂಗ್ರೆಸ್‍ಗೆ ಚಾಕು ಹಾಕಿದವರು. ಒಂದು ವೇಳೆ ಬಿಜೆಪಿ ಜೊತೆಗೆ ಬಂದರೆ ಬಾರಪ್ಪಾ ಅಂತ ಕರೆದುಕೊಳ್ಳುತ್ತೇವೆ ಅಷ್ಟೇ ಎಂದು ವ್ಯಂಗ್ಯವಾಡಿದರು.

Leave a Reply

Your email address will not be published. Required fields are marked *