ಬೆಂಗಳೂರು/ಬಳ್ಳಾರಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಡವರು ಹಾಗೂ ರೈತರ ವಿರೋಧಿ ಆಡಳಿತ ನಡೆಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ (B.Y.Vijayendra) ಅವರು ಆರೋಪಿಸಿದರು.
ಬಳ್ಳಾರಿಯಲ್ಲಿ (Ballari) ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಅವರಿಗೆ ರೈತರಿಗಿಂತ ರಿಯಲ್ ಎಸ್ಟೇಟ್‌ಗೆ ಹೆಚ್ಚಿನ ಆದ್ಯತೆ ಇದೆ ಎಂದು ಟೀಕಿಸಿದರು.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನೀರಾವರಿ ಸಚಿವರಾಗಿದ್ದ ಸಂದರ್ಭದಲ್ಲಿ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ದುರಸ್ತಿಗೆ 24 ತಿಂಗಳು ತೆಗೆದುಕೊಂಡ ಪರಿಣಾಮ ರೈತರು ಎರಡನೇ ಬೆಳೆ ಬೆಳೆಯಲು ಸಾಧ್ಯವಾಗದೆ ಅಪಾರ ನಷ್ಟ ಅನುಭವಿಸಿದರು. ಆದರೆ, ಮುಖ್ಯಮಂತ್ರಿ ಆದ 24 ಗಂಟೆಗಳಲ್ಲೇ ಬಿಡದಿ ಟೌನ್‌ಶಿಪ್‌ಗೆ ಸಂಬಂಧಿಸಿದ ಆದೇಶ ಹೊರಡಿಸಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಅಧಿಕಾರಿಗಳಿಗೆ ಹೊಡೆಯೋದು ಬೇಡ, ತಪ್ಪುಮಾಡಿದ್ರೆ ನನಗೆ ಹೊಡೀರಿ, ಹೊಡೆಸಿಕೊಳ್ಳೋಕೆ ರೆಡಿ ಇದ್ದೀನಿ: ಡಿಕೆಶಿ
ಬಿಡದಿ ಟೌನ್‌ಶಿಪ್ ಯೋಜನೆಯಿಂದ ಫಲವತ್ತಾದ ಕೃಷಿ ಭೂಮಿಯನ್ನು ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರು ಮತ್ತು ಮಹಿಳೆಯರು ಪೊರಕೆ ಹಿಡಿದು ಪ್ರತಿಭಟಿಸುವ ಸ್ಥಿತಿ ನಿರ್ಮಾಣವಾಗಿರುವುದಕ್ಕೆ ರೈತ ವಿರೋಧಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಹೇಳಿದರು.

ಮುಖ್ಯಮಂತ್ರಿಗಳು ರೈತರೊಂದಿಗೆ ಚೆಲ್ಲಾಟ ಆಡದೇ, ರೈತರ ಪರವಾದ ನಿರ್ಧಾರಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದ ಅವರು, ಬಿಡದಿ ಟೌನ್‌ಶಿಪ್ ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತರು ಹಾಗೂ ವಿವಿಧ ಸಂಘಟನೆಗಳ ಮುಖಂಡರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಒತ್ತಾಯಿಸಿದರು. ರೈತರ ಮೇಲಿನ ಸರ್ಕಾರದ ದಬ್ಬಾಳಿಕೆಯನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಜುಲೈ 17ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಶಾಸಕರು, ಸಂಸದರು, ಮಾಜಿ ಶಾಸಕರು ಹಾಗೂ ಮಾಜಿ ಸಂಸದರು ಬೆಳಗ್ಗೆಯಿಂದ ಸಂಜೆವರೆಗೆ ಧರಣಿ ನಡೆಸಲಿದ್ದು, ರೈತರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯುವುದು ಹಾಗೂ ಬಿಡದಿ ಟೌನ್‌ಶಿಪ್ ಯೋಜನೆಯನ್ನು ಕೈಬಿಡುವಂತೆ ಒತ್ತಾಯಿಸಲಾಗುವುದು ಎಂದು ವಿಜಯೇಂದ್ರ ತಿಳಿಸಿದರು. ಇದನ್ನೂ ಓದಿ: ಬಿಡದಿ ಟೌನ್‌ಶಿಪ್ ಯೋಜನೆಗೆ 2 ತಿಂಗಳು ತಾತ್ಕಾಲಿಕ ಬ್ರೇಕ್ – ಸಮಿತಿ ರಚಿಸುತ್ತೇನೆ ಎಂದ ಸಿಎಂ
ಬರಗಾಲ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲ
ಬರಗಾಲದ ಕುರಿತು ಮುಖ್ಯಮಂತ್ರಿ ಅವರು ಪ್ರಧಾನಮಂತ್ರಿಗೆ ಪತ್ರ ಬರೆದು ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ಇದೆ ಹಾಗೂ ಕೇಂದ್ರ ಸರ್ಕಾರ ಅಧಿಕಾರಿಗಳ ತಂಡವನ್ನು ರಾಜ್ಯಕ್ಕೆ ಕಳುಹಿಸಬೇಕು ಎಂದು ಮನವಿ ಮಾಡಿದ್ದಾರೆ. ಇಂತಹ ಗಂಭೀರ ಪರಿಸ್ಥಿತಿಯಲ್ಲಿಯೂ ಮುಖ್ಯಮಂತ್ರಿ ಹಾಗೂ ಸಚಿವರು ಜಿಲ್ಲೆಗಳ ಪ್ರವಾಸ ಕೈಗೊಳ್ಳದಿರುವುದು ಆಶ್ಚರ್ಯಕರವಾಗಿದೆ ಎಂದು ವಿಜಯೇಂದ್ರ ಹೇಳಿದರು.
