ರಾಯ್‍ಪುರ: ಮನೆಗೆ ಕರೆಸಿ ಪ್ರಿಯಕರನ ಕುಟುಂಬಸ್ಥರು ಯುವತಿಯ ಮೇಲೆ ಬೆಂಕಿ ಹಚ್ಚಿದ ಘಟನೆ ಛತ್ತಿಸ್‍ಗಢದ ರಾಯ್‍ಪುರದಲ್ಲಿ ನಡೆದಿದೆ.
ಈ ಘಟನೆಯಲ್ಲಿ ಯುವತಿಯ ದೇಹ ಶೇ. 80ರಷ್ಟು ಸುಟ್ಟು ಹೋಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಡಿಸೆಂಬರ್ 18ರಂದು ಈ ಘಟನೆ ನಡೆದಿದ್ದು, ಯುವತಿ ಆಸ್ಪತ್ರೆಗೆ ದಾಖಲಾಗಿರುವುದನ್ನು ನೋಡಿ ಶನಿವಾರ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ತಿಳಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಪ್ರಿಯಕರನ ಕುಟುಂಬಸ್ಥರು ಹಾಗೂ ಆತನ ಸಂಬಂಧಿಕರ ವಿರುದ್ಧ ಯುವತಿಯ ಸಹೋದರ ದೂರು ದಾಖಲಿಸಿದ್ದಾರೆ.
ಡಿಸೆಂಬರ್ 18ರಂದು ಪ್ರಿಯಕರ ನನ್ನ ಸಹೋದರಿಯ ಜೊತೆ ಮಾತನಾಡಲು ಮನೆಗೆ ಕರೆದುಕೊಂಡು ಹೋಗಿದ್ದನು. ನನ್ನ ಸಹೋದರಿ ಆತನ ಮನೆಗೆ ತಲುಪಿದಳು. ಪ್ರಿಯಕರ ಮನೆಯಲ್ಲಿ ಇಲ್ಲದ ಸಮಯದಲ್ಲಿ ಆತನ ಕುಟುಂಬಸ್ಥರು ಯುವತಿ ಮೇಲೆ ಹಲ್ಲೆ ಮಾಡಿದ್ದಾರೆ. ಬಳಿಕ ಆಕೆಯ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಈ ಘಟನೆಯಲ್ಲಿ ಯುವತಿಯ ದೇಹ ಶೇ. 80ರಷ್ಟು ಸುಟ್ಟು ಹೋಗಿದ್ದು, ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಶನಿವಾರ ಯುವತಿಯನ್ನು ರಾಯ್‍ಪುರ ಮೂಲದ ಆಸ್ಪತ್ರೆಗೆ ದಾಖಲಿಸಿದರು. ಈ ವೇಳೆ ಆಸ್ಪತ್ರೆ ಸಿಬ್ಬಂದಿ ಮಹಿಳೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರು. ಸದ್ಯ ಪೊಲೀಸರು ಯುವಕನ ಕುಟುಂಬಸ್ಥರ ವಿರುದ್ಧ ಐಪಿಸಿ ಸೆಕ್ಷನ್ 307(ಕೊಲೆ ಯತ್ನ) ಹಾಗೂ 34 ಅಡಿಯಲ್ಲಿ ದೂರು ದಾಖಲಿಸಿಕೊಂಡಿದ್ದಾರೆ.
ಸದ್ಯ ಪೊಲೀಸರು ಆರೋಪಿಗಳನ್ನು ಬಂಧಿಸಲು ಪ್ರಯತ್ನಿಸುತ್ತಿದ್ದಾರೆ.