Bengaluru City

ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಬ್ರಿಟಿಷ್ ಹೈಕಮಿಷನರ್

Published

on

Share this

ಬೆಂಗಳೂರು: ಭಾರತದ ಬ್ರಿಟಿಷ್ ಹೈಕಮಿಷನರ್ ಅಲೆಕ್ಸ್ ಎಲ್ಲಿಸ್ ಅವರು ಮುಖ್ಯಮಂತ್ರಿ ಬಸವರಾಜ್ ಎಸ್. ಬೊಮ್ಮಾಯಿ ಅವರನ್ನು ಭೇಟಿಯಾಗಿ ವಿವಿಧ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರ ಬಲಪಡಿಸುವ ಕುರಿತು ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯದ ಹೂಡಿಕೆದಾರ ಸ್ನೇಹಿ ವಾತಾವರಣದ ಸದುಪಯೋಗ ಪಡೆಯುವಂತೆ ಮುಖ್ಯಮಂತ್ರಿಗಳು ಬ್ರಿಟಿಷ್ ಹೈಕಮಿಷನರ್ ಅವರಿಗೆ ಸಲಹೆ ನೀಡಿದರು.

ಕರ್ನಾಟಕ ಅತ್ಯಂತ ಪ್ರಗತಿ ಪರ ರಾಜ್ಯವಾಗಿದ್ದು, ಹೂಡಿಕೆಗೆ ಅತ್ಯುತ್ತಮ ಪೂರಕ ವಾತಾವರಣ ಹೊಂದಿದೆ. ಕೈಗಾರಿಕೋದ್ಯಮಗಳ ಸ್ಥಾಪನೆಗೆ ತ್ವರಿತ ಅನುಮೋದನೆ ನೀಡುವ ವ್ಯವಸ್ಥೆ ಜಾರಿಯಲ್ಲಿದೆ. ತಂತ್ರಜ್ಞಾನ, ಶಿಕ್ಷಣದಲ್ಲಿ ಮುನ್ನಡೆ ಸಾಧಿಸಿರುವ ರಾಜ್ಯವಾಗಿದ್ದು, ಅತ್ಯುತ್ತಮ ಕುಶಲ ಮಾನವ ಸಂಪನ್ಮೂಲವನ್ನೂ ಹೊಂದಿದೆ. ಯು.ಕೆ. ಮೂಲದ ಹಲವು ಪ್ರತಿಷ್ಠಿತ ಕಂಪನಿಗಳಿಗೆ ನೆಲೆಯಾಗಿದ್ದು, ಯು.ಕೆ. ಮೂಲದ ಕಂಪನಿಗಳು ಗಣನೀಯವಾಗಿ ಹೂಡಿಕೆ ಮಾಡಿವೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಆರೋಗ್ಯ, ಸಂಸ್ಕೃತಿ, ಭಾಷಾ ವಿಷಯಗಳು ಹೀಗೆ ವಿವಿಧ ಕ್ಷೇತ್ರಗಳಿಗೆ ಪ್ರತ್ಯೇಕ ವಿಶ್ವವಿದ್ಯಾಲಯಗಳನ್ನು ಹೊಂದಿರುವ ಕರ್ನಾಟಕದಲ್ಲಿ ಅತಿ ಹೆಚ್ಚು ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ವಿವಿಧ ಬಹುರಾಷ್ಟ್ರೀಯ ಕಂಪನಿಗಳ 80ಕ್ಕೂ ಹೆಚ್ಚು ಹೈ-ಟೆಕ್ ಸಂಶೋಧನಾ ಸಂಸ್ಥೆಗಳು ಇಲ್ಲಿ ಕಾರ್ಯನಿರ್ವಹಿಸುತ್ತಿವೆ. ಪೂರ್ವದ ಸಿಲಿಕಾನ್ ವ್ಯಾಲಿ ಎಂದೇ ಖ್ಯಾತವಾಗಿರುವ ಬೆಂಗಳೂರು ನಗರ ದೇಶ, ವಿದೇಶಗಳ ಜನರಿಗೆ ನೆಲೆಯಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮಸಾಲೆ ದೋಸೆ ಸವಿದು ಬೊಂಬಾಟ್ ಗುರು ಅಂದ್ರು ಭಾರತದ ಬ್ರಿಟಿಷ್ ಹೈ ಕಮಿಷನರ್!

ಇದರೊಂದಿಗೆ ಆರೋಗ್ಯ, ಶಿಕ್ಷಣ ಮತ್ತು ಹವಾಮಾನ ಬದಲಾವಣೆಗೆ ಸಂಬಂಧಿಸಿದಂತೆ ಪರಸ್ಪರ ಸಹಯೋಗದೊಂದಿಗೆ ಕಾರ್ಯನಿರ್ವಹಿಸುವ ಕುರಿತು ಚರ್ಚೆ ನಡೆಸಲಾಯಿತು. ಬೆಂಗಳೂರು ಸಂಚಾರ ನಿರ್ವಹಣೆಯ ಕುರಿತಂತೆ ಯು.ಕೆ. ಸಹಯೋಗದ ಕುರಿತು ಸಹ ಸಭೆಯಲ್ಲಿ ಚರ್ಚಿಸಲಾಯಿತು. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸುವ ಸಂದರ್ಭದಲ್ಲಿ ಪಠ್ಯಕ್ರಮ ರೂಪಿಸುವ ನಿಟ್ಟಿನಲ್ಲಿಯೂ ಯು.ಕೆ. ಸಹಯೋಗ ಪಡೆಯಲು ಇರುವ ಅವಕಾಶಗಳ ಕುರಿತು ಚರ್ಚಿಸಲಾಯಿತು.

ಕರ್ನಾಟಕ ಯು.ಕೆ.ಯೊಂದಿಗೆ ಹೂಡಿಕೆ ಒಪ್ಪಂದಗಳ ಜೊತೆಗೆ ಶಿಕ್ಷಣ, ಆರೋಗ್ಯ ಮತ್ತು ಹವಾಮಾನ ಬದಲಾವಣೆ ಮೊದಲಾದ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರ ನೀಡುವ ಕುರಿತು ಉಭಯ ನಾಯಕರು ಸಹಮತಿ ವ್ಯಕ್ತಪಡಿಸಿದರು. ಬೆಂಗಳೂರಿನ ಬ್ರಿಟಿಷ್ ಡೆಪ್ಯುಟಿ ಹೈ ಕಮಿಷನರ್ ಜೆರೆಮಿ ಬೆಡ್ ಫೋರ್ಡ್, ಸಚಿವರಾದ ಆರ್. ಅಶೋಕ್, ಡಾ. ಸಿ.ಎನ್. ಅಶ್ವತ್ಥನಾರಾಯಣ, ಮುಖ್ಯಮಂತ್ರಿಗಳ ಕಾರ್ಯದರ್ಶಿ ವಿ. ಪೊನ್ನುರಾಜ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

Advertisement
Advertisement
Public TV We would like to show you notifications for the latest news and updates.
Dismiss
Allow Notifications