Connect with us

Bellary

ಒಂದು ವರ್ಷದಲ್ಲಾಗುವ ಅಭಿವೃದ್ಧಿ 100 ದಿನಗಳಲ್ಲಿ ಮಾಡಿದ್ದಾರೆ ಬಿಎಸ್‍ವೈ: ಸೋಮಶೇಖರ ರೆಡ್ಡಿ

Published

on

– ನಮ್ಮ ಸರ್ಕಾರದಿಂದ ಅಭಿವೃದ್ಧಿಪರ್ವ ರಾಜ್ಯದಲ್ಲಿ ಆರಂಭ

ಬಳ್ಳಾರಿ: ರಾಜ್ಯದಲ್ಲಿ ನಮ್ಮ ಸರ್ಕಾರ ಬಂದ ನಂತರ ಅಭಿವೃದ್ಧಿ ಪರ್ವವೇ ಆರಂಭವಾಗಿದೆ. ಒಂದು ವರ್ಷದಲ್ಲಿ ಮಾಡುವ ಅಭಿವೃದ್ಧಿ ಕಾರ್ಯಗಳನ್ನು ಕೇವಲ 100 ದಿನಗಳಲ್ಲಿ ನಮ್ಮ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಮಾಡಿದ್ದಾರೆ ಎಂದು ಬಳ್ಳಾರಿ ನಗರ ಶಾಸಕ ಜಿ. ಸೋಮಶೇಖರ ರೆಡ್ಡಿ ಅವರು ಹೇಳಿದ್ದಾರೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಬೃಹತ್ ಛಾಯಾಚಿತ್ರ ಪ್ರದರ್ಶನ ಆಯೋಜಿಸಲಾಗಿದೆ. ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಪ್ರವಾಹ ಸಂದರ್ಭದಲ್ಲಿ ಸರ್ಕಾರ ಕೈಗೊಂಡ ಕಾರ್ಯಗಳ ಬೃಹತ್ ಛಾಯಾಚಿತ್ರ ಪ್ರದರ್ಶನಕ್ಕೆ ಸೋಮಶೇಖರ ರೆಡ್ಡಿ ಅವರು ಚಾಲನೆ ನೀಡಿದರು.

ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಭಿವೃದ್ಧಿಯೇ ಆಡಳಿತದ ಮಂತ್ರ ಎನ್ನುವ ಧೇಯದಡಿ ನಮ್ಮ ಸರ್ಕಾರ ಕಾರ್ಯಪ್ರವೃತ್ತವಾಗಿದೆ. ಬಳ್ಳಾರಿ ನಗರಕ್ಕೆ ನೂರಾರು ಕೋಟಿ ರೂ. ಅನುದಾನವನ್ನು ಸರ್ಕಾರ ಒದಗಿಸಿಕೊಟ್ಟಿದೆ. ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಈ ಛಾಯಾಚಿತ್ರ ಪ್ರದರ್ಶನವೇ ಸಾಕ್ಷಿ ಎಂದರು. ಈ ಛಾಯಾಚಿತ್ರ ಪ್ರದರ್ಶನವನ್ನು ಬಳ್ಳಾರಿಯ ರೈಲ್ವೆ ನಿಲ್ದಾಣದಲ್ಲಿಯೂ ಮಾಡುವಂತೆ ವಾರ್ತಾ ಇಲಾಖೆಯ ಅಧಿಕಾರಿಗಳಿಗೆ ಇದೇ ಸಂದರ್ಭದಲ್ಲಿ ಸೂಚನೆ ನೀಡಿದರು.

ಶ್ರೀರಾಮುಲು ಅವರಿಗೆ ಡಿಸಿಎಂ ಸ್ಥಾನ ನೀಡುವ ವಿಚಾರ ಈ ಭಾಗದ ಜನರ ಬೇಡಿಕೆಯಾಗಿದೆ. ವಾಲ್ಮೀಕಿ ಸಮುದಾಯದ ಪ್ರಬಲ ನಾಯಕ ಶ್ರೀರಾಮುಲು ಅವರಾಗಿದ್ದು, ಡಿಸಿಎಂ ವಿಷಯದಲ್ಲಿ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ ಎಂದು ವಿವರಿಸಿದರು. ಹಾಗೆಯೇ ಅಭಿವೃದ್ಧಿ ವಿಚಾರದಲ್ಲಿ ಬಳ್ಳಾರಿ ಹಿಂದೆ ಬಿದ್ದಿಲ್ಲ ಎಂದು ಸ್ಪಷ್ಟಪಡಿಸಿದರು.

Click to comment

Leave a Reply

Your email address will not be published. Required fields are marked *