ಬೆಂಗಳೂರು: ಹೆಚ್‍ಎಎಲ್ ವಿಮಾನ ನಿಲ್ದಾಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಡಿಸಿಎಂ ಜಿ.ಪರಮೇಶ್ವರ್ ಬೆಂಬಲಿಗರು ನಡುವೆ ಗಲಾಟೆ ನಡೆದಿದೆ.
ಪಕ್ಷೇತರ ಶಾಸಕ ಹೆಚ್.ನಾಗೇಶ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಸಮ್ಮಿಶ್ರ ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ವಾಪಸ್ ಪಡೆದುಕೊಂಡರು. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ಮುಂಬೈನತ್ತ ಹೊರಡಲು ಹೆಚ್‍ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಈ ವೇಳೆ ಸ್ಥಳದಲ್ಲಿದ್ದ ಪರಮೇಶ್ವರ್ ಬೆಂಬಲಿಗರು ನಾಗೇಶ್ ಅವರನ್ನು ಕರೆದುಕೊಂಡು ಹೋಗಲು ಪ್ರಯತ್ನಿಸಿದ್ದಾರೆ.
Advertisement
Advertisement
ಇತ್ತ ನಾಗೇಶ್ ಅವರಿಗಾಗಿ ವಿಶೇಷ ವಿಮಾನ ಸಿದ್ಧಪಡಿಸಿಕೊಂಡಿದ್ದ ಯಡಿತಯೂರಪ್ಪನವರ ಆಪ್ತ ಸಂತೋಷ್ ನಿಂತಿದ್ದರು. ಪರಮೇಶ್ವರ್ ಬೆಂಬಲಿಗರು ನಾಗೇಶ್ ಅವರನ್ನು ಕರೆದುಕೊಂಡು ಹೋಗಲು ಮುಂದಾಗುತ್ತಿದ್ದ ವೇಳೆ ಯಡಿಯೂರಪ್ಪ ಬೆಂಬಲಿಗರು ಅಡ್ಡಿಪಡಿಸಿದ್ದಾರೆ. ಈ ವೇಳೆ ಇಬ್ಬರು ನಾಯಕರ ಆಪ್ತರ ನಡುವೆ ಗಲಾಟೆ ನಡೆದಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಹೆಚ್‍ಎಎಲ್ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಪೊಲೀಸರು ಆಗಮಿಸುತ್ತಿದ್ದಂತೆ ಹೆಚ್.ನಾಗೇಶ್ ವಿಶೇಷ ವಿಮಾನದಲ್ಲಿ ಮುಂಬೈನತ್ತ ಹಾರಿದರು.
Advertisement
ಪೊಲೀಸರ ಮೂಲಕ ಎಚ್‍ಎಎಲ್‍ನಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಯಾವ ಶಾಸಕರನ್ನೂ ವಿಶೇಷ ವಿಮಾನ ಹತ್ತಲು ಬಿಡದಂತೆ ಸೂಚಿಸಿದ್ದಾರೆ. ಇದರಿಂದ ಸಿಟ್ಟಿಗೆದ್ದ ಬಿ.ಎಸ್.ಯಡಿಯೂರಪ್ಪ, ಶಾಸಕರನ್ನು ತಡೆಯಲು ನೀವ್ಯಾರು ಎಂದು ದಭಾಯಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ದೂರವಾಣಿ ಮೂಲಕ ಎಚ್‍ಎಎಲ್‍ನ ಹಿರಿಯ ಪೊಲೀಸ್ ಅಧಿಕಾರಿಗೆ ತರಾಟೆ ತೆಗೆದುಕೊಂಡಿದ್ದಾರೆ.
Advertisement
ಮುಳುಬಾಗಿಲಿನಿಂದ ಪಕ್ಷೇತರ ಶಾಸಕರಾಗಿ ಆಯ್ಕೆಯಾಗಿದ್ದ ನಾಗೇಶ್ ಅವರಿಗೆ ಬಳಿಕ ಸಚಿವ ಸ್ಥಾನ ನೀಡಲಾಗಿತ್ತು. ಆದರೆ ಇದೀಗ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಅತೃಪ್ತರ ಗುಂಪು ಸೇರಲು ಮುಂದಾಗಿದ್ದಾರೆ.