ಚಿಕ್ಕಮಗಳೂರು: ಉದ್ಯಮಿ, ಕೆಫೆ ಕಾಫಿ ಡೇ ಮಾಲೀಕ ಉದ್ಯಮಿ ಸಿದ್ಧಾರ್ಥ್ ಅವರು ನಿಗೂಢವಾಗಿ ಕಾಣೆಯಾದ ಬೆನ್ನಲ್ಲೇ ಅವರ ಎಬಿಸಿ ಕಾಫಿ ಕ್ಯೂರಿಂಗ್ ಕಂಪನಿಯನ್ನು ಬಂದ್ ಮಾಡಲಾಗಿದೆ.
ಪ್ರತಿ ದಿನದಂತೆ ಸಿಬ್ಬಂದಿ ಇಂದು ಕೂಡ ಕೆಲಸಕ್ಕೆ ಹಾಜರಾಗಿದ್ದಾರೆ. ಆದರೆ ಸಿದ್ಧಾರ್ಥ್ ಅವರು ನಾಪತ್ತೆಯಾದ ಹಿನ್ನೆಲೆಯಲ್ಲಿ ಇದೀಗ ಕಂಪನಿಯನ್ನು ಬಂದ್ ಮಾಡಲಾಗಿದೆ. ಸಿದ್ಧಾರ್ಥ್ ಅವರು ಎಬಿಸಿ ಸೇರಿದಂತೆ ಹಲವು ಕಂಪನಿಯ ಮಾಲೀಕರಾಗಿದ್ದು, ಆ ಕಂಪನಿಯಲ್ಲಿ ಇದೇ ಪರಿಸ್ಥಿತಿ ಇದೆ ಎಂದು ಹೇಳಲಾಗುತ್ತಿದೆ. ಸಿದ್ಧಾರ್ಥ್ ನಾಪತ್ತೆಯಾಗಿದ್ದ ಕಾರಣ ಕಾರ್ಮಿಕರು, ಸಿಬ್ಬಂದಿ ಆತಂಕಗೊಂಡಿದ್ದಾರೆ.
Advertisement
Advertisement
ಸಿದ್ದಾರ್ಥ್ ನಾಪತ್ತೆ: ವ್ಯವಹಾರ ನಿಮಿತ್ತ ಸಿದ್ಧಾರ್ಥ್ ಅವರು ತಮ್ಮ ಕಾರಿನಲ್ಲಿ ಚಿಕ್ಕಮಗಳೂರಿಗೆ ತೆರಳಿದ್ದರು. ಅಲ್ಲಿಂದ ಮಂಗಳೂರಿಗೆ ಹೋಗಿದ್ದರು. ಕೇರಳಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿಯ ಜಪ್ಪಿನಮೊಗರು ಎಂಬಲ್ಲಿ ನೇತ್ರಾವತಿ ಸೇತುವೆ ಇದ್ದು, ಇಲ್ಲಿಗೆ ತಲುಪುತ್ತಿದ್ದಂತೆ ಕಾರನ್ನು ನಿಲ್ಲಿಸಲು ಚಾಲಕನಿಗೆ ಹೇಳಿದ್ದಾರೆ. ಬಳಿಕ ಕಾರಿನಿಂದ ಇಳಿದು ಅವರು ಫೋನ್‍ನಲ್ಲಿ ಮಾತನಾಡುತ್ತಾ ಹೋಗಿದ್ದಾರೆ. ಆದರೆ ಅರ್ಧ ಗಂಟೆಯಾದರೂ ಸಿದ್ಧಾರ್ಥ್ ಅವರು ವಾಪಸ್ ಬರದೇ ಇದ್ದುದನ್ನು ಕಂಡು ಗಾಬರಿಯಾದ ಚಾಲಕ ಅವರಿಗೆ ಫೋನ್ ಮಾಡಿದ್ದಾನೆ. ಈ ವೇಳೆ ಅವರ ಫೋನ್ ಸ್ವಿಚ್ಡ್ ಆಫ್ ಆಗಿದ್ದು ಗಮನಕ್ಕೆ ಬಂದಿದೆ.
Advertisement
ಕಾರು ಚಾಲಕ ತಕ್ಷಣ ಈ ವಿಚಾರವನ್ನು ಸಿದ್ಧಾರ್ಥ್ ಮನೆಯವರಿಗೆ ತಿಳಿಸಿದ್ದಾರೆ. ಸಿದ್ಧಾರ್ಥ್ ಅವರು ಕಾರಿನಿಂದ ಇಳಿದ ಜಪ್ಪಿನ ಮೊಗರು ಪ್ರದೇಶ ನೇತ್ರಾವತಿ ನದಿ ತಟದಲ್ಲೇ ಇರುವುದು ಕುಟುಂಬಸ್ಥರ ಆತಂಕಕ್ಕೆ ಕಾರಣವಾಗಿದೆ. ಕಾರು ಚಾಲಕನಿಂದ ಮಾಹಿತಿ ಪಡೆದ ಸ್ಥಳೀಯ ಪೊಲೀಸರು ಸಿದ್ಧಾರ್ಥ್ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ.