ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಗಳ ಸಹಯೋಗದಲ್ಲಿ ಸುಸಜ್ಜಿತ ಶಾಲಾ ಕಟ್ಟಡಗಳು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಅಂಗನವಾಡಿ ಕಟ್ಟಡಗಳ ನಿರ್ಮಾಣದ ಮಹತ್ವಾಕಾಂಕ್ಷಿ ಯೋಜನೆಯನ್ನು ಲೋಕೋಪಯೋಗಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗಿದ್ದು, ಈ ಯೋಜನೆಗಳು ಪೂರ್ಣಗೊಳ್ಳುವ ಹಂತದಲ್ಲಿವೆ ಎಂದು ಸಚಿವ ಸಿ.ಸಿ.ಪಾಟೀಲ್ ತಿಳಿಸಿದ್ದಾರೆ.
Advertisement
ಇಂದು ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು, ವಿದ್ಯಾರ್ಥಿಗಳಿಗೆ ಹೆಚ್ಚಿನ ಸೌಲಭ್ಯ ಮತ್ತು ಸುರಕ್ಷತೆ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಲೋಕೋಪಯೋಗಿ ಇಲಾಖೆಯು ಈ ಕಟ್ಟಡಗಳನ್ನು ನಿರ್ಮಿಸುವ ಜವಾಬ್ಧಾರಿ ವಹಿಸಿಕೊಂಡಿದೆ. ಶಿಕ್ಷಣ ಇಲಾಖೆಯ ಸಹಯೋಗದಲ್ಲಿ 756 ಕೋಟಿ ರೂ. ವೆಚ್ಚದಲ್ಲಿ ರಾಜ್ಯಾದ್ಯಂತ 3,423 ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕಟ್ಟಡಗಳನ್ನು ನಿರ್ಮಿಸುವ ಗುರಿ ಹೊಂದಿದ್ದು, ಈ ಪೈಕಿ ಈಗಾಗಲೇ 2,684 ಕಟ್ಟಡಗಳ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದೆ. ಉಳಿದ ಕಾಮಗಾರಿಗಳು ಮುಕ್ತಾಯದ ಹಂತದಲ್ಲಿವೆ. ಈ ಯೋಜನೆಯನ್ನು ನಬಾರ್ಡ್‌ನ ಆರ್‌ಐಡಿಎಫ್-25 ಅನ್ವಯ ಜಾರಿಗೊಳಿಸಲಾಗುತ್ತಿದೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ರೆಸಿಡೆನ್ಷಿಯಲ್ ಶಾಲೆಗಳಿಗೆ ನಾಳೆ ಪ್ರತ್ಯೇಕ ಮಾರ್ಗಸೂಚಿ: ಸಚಿವ ಬಿ.ಸಿ.ನಾಗೇಶ್
Advertisement
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ 137 ಕೋಟಿ ರೂ. ವೆಚ್ಚದಲ್ಲಿ ಒಟ್ಟು 842 ಸುಸಜ್ಜಿತ ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸುವ ಕಾಮಗಾರಿಗಳನ್ನು ಲೋಕೋಪಯೋಗಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗಿದ್ದು, ಈ ಪೈಕಿ 525 ಕೇಂದ್ರಗಳ ನಿರ್ಮಾಣ ಕಾಮಗಾರಿಗಳನ್ನು ಈಗಾಗಲೇ ಪೂರ್ಣಗೊಳಿಸಲಾಗಿದೆ. ಉಳಿದವುಗಳನ್ನು ಮುಂದಿನ ಫೆಬ್ರವರಿ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
Advertisement
Advertisement
ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ಗ್ರಾಮೀಣ ಭಾಗಗಳಲ್ಲಿ ಹೆಚ್ಚಿನ ಮಕ್ಕಳನ್ನು ಶಾಲೆಗಳತ್ತ ಆಕರ್ಷಿಸಿ ಹೊಸ ಶೈಕ್ಷಣಿಕ ಕ್ರಾಂತಿಗೆ ಅವಕಾಶವಾಗುವ ನಿಟ್ಟಿನಲ್ಲಿ ಈ ಯೋಜನೆಯು ತುಂಬಾ ಸಹಕಾರಿಯಾಗಲಿದೆ ಎಂದು ಸಚಿವರು ಆಶಾವಾದ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಇಂತಹ ಕೆಟ್ಟ, ದುರಾಡಳಿತ, ಭ್ರಷ್ಟಾಚಾರದ ಸರ್ಕಾರವನ್ನು ಇದುವರೆಗೂ ನಾನು ನೋಡಿರಲಿಲ್ಲ: ಸಿದ್ದರಾಮಯ್ಯ