ನವದೆಹಲಿ: ಸಿಎಎ ವಿರೋಧಿಸಿ ಪ್ರತಿಭಟನೆ ಸಂದರ್ಭದಲ್ಲಿ ಹಿಂಸಾಚಾರ ನಡೆದು ಮಂಗಳೂರಿನಲ್ಲಿ ಗೋಲಿಬಾರ್ ಆಗಿತ್ತು. ಗೋಲಿಬಾರ್ ನಲ್ಲಿ ಇಬ್ಬರು ಸಾವನ್ನಪ್ಪಿದ್ದರು. ಹಿಂಸಾಚಾರಕ್ಕೆ ಕಾರಣವಾಗಿದ್ದವರಿಗೆ ರಾಜ್ಯ ಹೈಕೋರ್ಟ್ ಜಾಮೀನು ನೀಡಿತ್ತು. ಆದರೆ ರಾಜ್ಯ ಹೈಕೋರ್ಟ್ ನೀಡಿದ್ದ ಜಾಮೀನಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ತಡೆ ನೀಡಿದೆ.
ಇದರೊಂದಿಗೆ 21 ಆರೋಪಿಗಳಿಗೆ ರಾಜ್ಯ ಹೈಕೋರ್ಟ್ ನೀಡಿದ್ದ ಜಾಮೀನು ರದ್ದು ಗೊಂಡಿದೆ. ಈ ಆರೋಪಿಗಳು ಗಲಭೆಯಲ್ಲಿ ಭಾಗಿಯಾಗಿರುವುದಕ್ಕೆ ಪುರಾವೆ ಇದೆ ಎಂದು ರಾಜ್ಯದ ಪರ ವಾದ ಮಂಡಿಸುವ ವೇಳೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದರು. ಹೀಗೆ ವಾದ ಮಂಡಿಸುತ್ತಿದ್ದಂತೆ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ, ನ್ಯಾ.ಗವಾಯಿ, ನ್ಯಾ.ಸೂರ್ಯಕಾಂತ್ ಅವರು ಹೈ ಕೋರ್ಟ್ ಆದೇಶಕ್ಕೆ ತಡೆ ನೀಡಿ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಿದರು.
Advertisement
Advertisement
ಮಹಮ್ಮದ್ ಅಶಿಕ್, ಮಹಮ್ಮದ್ ಸುಹಾಲ್, ನಾಸಿರುದ್ದೀನ್, ಮಹಮ್ಮದ್ ಶಾಕೀರ್, ಕಲಂದರ್ ಬಾಷಾ, ಮಹಮ್ಮದ್ ಅಜರ್ ಸೇರಿದಂತೆ 21 ಆರೋಪಿಗಳಿಗೆ ಹೈ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು.
Advertisement
ಆರೋಪಿಗಳ ಬಂಧನ ಮಾಡುವಾಗ ಪೊಲೀಸರು ಸರಿಯಾದ ಕ್ರಮ ಕೈಗೊಂಡಿಲ್ಲ. ಆರೋಪಿಗಳು ಗಲಭೆಯಲ್ಲಿ ಭಾಗಿಯಾಗಿರುವುದಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಗಳನ್ನು ನ್ಯಾಯಾಲಯಕ್ಕೆ ಒದಗಿಸದ್ದಕ್ಕೆ ಇರುವ ಅಂಶಗಳನ್ನು ಪರಿಗಣಿಸಿದ ನ್ಯಾಯಾಲಯ ಎಲ್ಲ 21 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು. ಅಲ್ಲದೆ ಸಾಕ್ಷ್ಯ ಎಂದು ಪರಿಗಣಿಸಿರುವ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಆರೋಪಿಗಳು ನೇರವಾಗಿ ಭಾಗಿಯಾಗಿದ್ದಾರೆ ಎನ್ನುವುದಕ್ಕೆ ಸಾಕ್ಷ್ಯ ಇಲ್ಲ ಎಂದು ಹೈ ಕೋರ್ಟ್ ಏಕ ಸದಸ್ಯ ಪೀಠ ಅಭಿಪ್ರಾಯ ಪಟ್ಟು ಜಾಮೀನು ಮಂಜೂರು ಮಾಡಿತ್ತು.
Advertisement
ಮಂಗಳೂರು ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಂಗಳೂರು ಪೊಲೀಸರಿಗೆ ದೊಡ್ಡ ಶಾಕ್ ನೀಡಿತ್ತು. ಮಂಗಳೂರು ಗಲಭೆ ನೆಪದಲ್ಲಿ ಪೊಲೀಸರು ಅಮಾಯಕರ ಮೇಲೆ ಹಲ್ಲೆ ಮಾಡಿದ್ದಾರೆ. ದೈಹಿಕ ಮತ್ತು ಮಾನಸಿಕವಾಗಿ ಹಿಂಸೆ ಕೊಟ್ಟಿದ್ದಾರೆ. ಈ ಹಿಂಸೆ ಅನುಭವಿಸಿದವರು ಪೊಲೀಸರ ವಿರುದ್ಧ ದೂರು ನೀಡಿದರೂ ಎಫ್‍ಐಆರ್ ದಾಖಲು ಮಾಡುತ್ತಿಲ್ಲ ಎಂದು ಆರೋಪಿಸಿ ಹೈಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿಯನ್ನು ಪರಿಗಣಿಸಿದ ನ್ಯಾಯಾಲಯ ಎಫ್‍ಐಆರ್ ದಾಖಲು ಮಾಡಲು ಸಹ ಆದೇಶಿಸಿತ್ತು.