ಬೆಂಗಳೂರು: ಸಮ್ಮಿಶ್ರ ಸರ್ಕಾರದ ಮೈತ್ರಿ ಪಕ್ಷವಾಗಿರುವ ಕಾಂಗ್ರೆಸ್‍ನಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳು ಹೆಚ್ಚಾಗುತ್ತಿದ್ದಂತೆ ಸಿಎಂ ಕುಮಾರಸ್ವಾಮಿ ಅವರು ಸಂಪುಟ ವಿಸ್ತರಣೆ ಈಗ ಬೇಡ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಸಲಹೆ ನೀಡಿದ್ದಾರೆ.
ಕುಮಾರಕೃಪಾದಲ್ಲಿ ರಾಹುಲ್ ಗಾಂಧಿ ಅವರನ್ನು ಸಿಎಂ ಕುಮಾರಸ್ವಾಮಿ ಅವರು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ ಮುಂದಿನ ಲೋಕಸಭಾ ಚುನಾವಣೆವರೆಗೂ ಸಂಪುಟ ವಿಸ್ತರಣೆ ಮಾಡದಿರಲು ಸಲಹೆ ನೀಡಿದ್ದಾರೆ. ಇದಕ್ಕೆ ಪ್ರಮುಖ ಕಾರಣವನ್ನು ರಾಹುಲ್ ಮುಂದಿಟ್ಟಿರುವ ಸಿಎಂ, ಈಗ ಸಂಪುಟ ವಿಸ್ತರಣೆ ಮಾಡಿದರೆ ಅಸಮಾಧಾನ ಹಾಗೂ ಭಿನ್ನಮತ ಸ್ಫೋಟಗೊಳ್ಳುವ ಸಾಧ್ಯತೆ ಹೆಚ್ಚಿದ್ದು ಇದು ಲೋಕಸಭೆ ಚುನಾವಣೆ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ಹೇಳಿದ್ದಾರೆ ಎಂದು ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.
Advertisement
Advertisement
ಸದ್ಯ ಸಂಪುಟ ವಿಸ್ತರಣೆ ಬದಲಾಗಿ ನಿಗಮ ಮಂಡಳಿ ನೇಮಕ ಮಾಡುವ ಪ್ರಸ್ತಾವನ್ನು ಸಿಎಂ ರಾಹುಲ್ ಮುಂದಿಟ್ಟಿದ್ದಾರೆ. ಪ್ರಮುಖ 25 ಮಂಡಳಿಗೆ ಶಾಸಕರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಮೂಲಕ ಅತೃಪ್ತಿಯನ್ನು ಕಡಿಮೆ ಮಾಡಬಹುದು. ತಮ್ಮ ವಾದಕ್ಕೆ ಬಿಜೆಪಿಯ ಆಪರೇಷನ್ ಕಮಲದ ಬಗ್ಗೆಯೂ ಮಾಹಿತಿ ನೀಡಿದ ಸಿಎಂ, ಒಂದೊಮ್ಮೆ ಸಂಪುಟದಲ್ಲಿ ಆಕಾಂಕ್ಷಿಗಳಿಗೆ ಮಂತ್ರಿಗಿರಿ ಸಿಗದೇ ಇದ್ದರೆ ಬಿಜೆಪಿಯನ್ನು ಸಂಪರ್ಕ ಮಾಡುವ ಸಾಧ್ಯತೆಯಿದೆ ಎಂದಿದ್ದಾರೆ.
Advertisement
ಮಾತುಕತೆಯ ವೇಳೆ ಮುಂದಿನ ಉಪಚುನಾವಣೆ ಮತ್ತು ಲೋಕಸಭೆ ಚುನಾವಣೆ ಬಗ್ಗೆಯೂ ಚರ್ಚೆ ನಡೆದಿದ್ದು, ಉಪ ಚುನಾವಣೆ ಕಾರ್ಯತಂತ್ರದ ಬಗ್ಗೆ ರಾಹುಲ್ ಗಾಂಧಿ ಅವರಿಗೆ ಸಿಎಂ ವಿವರಿಸಿದ್ದಾರೆ. ಅಲ್ಲದೇ ಕ್ಷೇತ್ರ ಹಂಚಿಕೆಯಲ್ಲಿ ಆಗಿರುವ ಕೊನೆ ಕ್ಷಣದ ಬೆಳವಣಿಗೆ, ಬದಲಾವಣೆ ಬಗ್ಗೆಯೂ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಪ್ರಸ್ತಾಪ ಮಾಡಿದ್ದಾರೆ. ಇದೇ ವೇಳೆ ಮೈತ್ರಿ ಸರ್ಕಾರದ ಸಂಪುಟದಿಂದ ಹೊರ ನಡೆದ ಎನ್ ಮಹೇಶ್ ರಾಜೀನಾಮೆ ಪರಿಣಾಮದ ಬಗ್ಗೆಯೂ ಚರ್ಚೆ ನಡೆಸಲಾಗಿದೆ ಎಂಬ ಮಾಹಿತಿ ಲಭಿಸಿದೆ.
Advertisement
ಇಂದು ಬೆಂಗಳೂರಿಗೆ ಆಗಮಿಸಿದ್ದ ಎಐಸಿಸಿ ಅಧ್ಯಕ್ಷರಾದ @RahulGandhi ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಚರ್ಚೆ ನಡೆಸಿದೆನು. pic.twitter.com/vlI74qZf4S
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 13, 2018
ಸದ್ಯ ಎಚ್‍ಡಿಕೆ ಅವರ ಸಲಹೆಯನ್ನು ಪಡೆದಿರುವ ರಾಹುಲ್ ಗಾಂಧಿ ಅವರು, ತಮ್ಮ ಪಕ್ಷದ ರಾಜ್ಯ ನಾಯಕರ ಜೊತೆ ಚರ್ಚೆ ನಡೆಸಿ ಅಂತಿಮ ನಿರ್ಧಾರವನ್ನು ತಿಳಿಸುತ್ತೇನೆ ಎಂದಿದ್ದಾರೆ ಎಂದು ತಿಳಿದುಬಂದಿದೆ.
ಇತ್ತ ಕಾಂಗ್ರೆಸ್ ಪಕ್ಷದ ಪ್ರಮುಖ ಶಾಸಕರು, ಮುಖಂಡರು ಸಚಿವ ಸಂಪುಟದ ವಿಸ್ತರಣೆ ಈಗಾಗಲೇ ಬಹಿರಂಗ ಹೇಳಿಕೆ ನೀಡಿದ್ದಾರೆ. ಅಲ್ಲದೇ ಕೆಲ ಮುಖಂಡರು ಪಕ್ಷದ ಸಭೆಯ ವೇಳೆಯೂ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಬಂಡಾಯ ನಾಯಕರ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿತ್ತು. ಈ ವೇಳೆ ಉಪ ಚುನಾವಣೆ ಬಳಿಕ ಸಂಪುಟ ವಿಸ್ತರಣೆ ಮಾಡದಿದ್ದರೆ ತಮ್ಮ ದಾರಿ ತಾವು ನೋಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ ಎನ್ನುವ ಮಾಹಿತಿ ಪಕ್ಷದ ಮೂಲಗಳಿಂದ ಸಿಕ್ಕಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv