– ಪಕ್ಷದ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ನೀಡಲು ನಿರ್ಧಾರ
ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಅವರಿಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಬೆಂಬಲಿಗರ ಆಕ್ರೋಶ ತಾರಕ್ಕೇರಿದೆ. ಈ ಹಿನ್ನೆಲೆ ನಾಳೆ (ಬುಧವಾರ) ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ (Bagepalli Assembly constituency) ಬಂದ್‌ಗೆ ಕರೆ ನೀಡಿರುವ ಬೆಂಬಲಿಗರು, ಪಕ್ಷದ ವಿವಿಧ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ಸಲ್ಲಿಸುವುದಾಗಿ ಘೋಷಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆಯಲ್ಲಿ ಬಾಗೇಪಲ್ಲಿ ಶಾಸಕ ಎಸ್.ಎನ್ ಸುಬ್ಬಾರೆಡ್ಡಿಗೆ (SN Subbareddy) ಅವಕಾಶ ಸಿಗದ ಹಿನ್ನೆಲೆಯಲ್ಲಿ ಬೆಂಬಲಿಗರು ಬಾಗೇಪಲ್ಲಿಯ ಶಾಸಕ ಗೃಹ ಕಚೇರಿಯಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಬಾಗೇಪಲ್ಲಿ, ಗುಡಿಬಂಡೆ ಹಾಗೂ ಚೇಳೂರು ತಾಲೂಕುಗಳನ್ನು ಒಳಗೊಂಡಂತೆ ನಾಳೆ ಸಂಪೂರ್ಣ ಬಂದ್ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ.

ಇದೇ ವೇಳೆ ಕಾಂಗ್ರೆಸ್ ಪಕ್ಷದ (Congress Party) ವಿವಿಧ ಘಟಕಗಳ ಪದಾಧಿಕಾರಿಗಳು ತಮ್ಮ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ಸಲ್ಲಿಸುವುದಾಗಿ ಘೋಷಿಸಿದ್ದಾರೆ. ಸಭೆಯಲ್ಲಿ ಮಾತನಾಡಿದ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನರೇಂದ್ರ, ʻಆಪರೇಷನ್ ಕಮಲʼದ ವೇಳೆ ಬಿಜೆಪಿ ಸಚಿವ ಸ್ಥಾನ ನೀಡುವ ಆಫರ್ ಮಾಡಿತ್ತು. ಆದರೂ ಸುಬ್ಬಾರೆಡ್ಡಿ ಕಾಂಗ್ರೆಸ್ ತೊರೆಯಲಿಲ್ಲ. ಈಗ ಕಾಂಗ್ರೆಸ್ ಸಚಿವ ಸ್ಥಾನ ನೀಡುವುದಾಗಿ ಹೇಳಿ ಅವಕಾಶ ನೀಡದೇ ಅವಮಾನ ಮಾಡಿದೆ. ಇದರಿಂದ ಕಾರ್ಯಕರ್ತರು ಹಾಗೂ ಬೆಂಬಲಿಗರಿಗೆ ತೀವ್ರ ನೋವಾಗಿದೆ. ಅದಕ್ಕಾಗಿ ನಾವು ಸಾಮೂಹಿಕ ರಾಜೀನಾಮೆ ನೀಡಲು ತೀರ್ಮಾನಿಸಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
