ಬಳ್ಳಾರಿ: ಕಾರು ಅಪಘಾತದಿಂದ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಂಪ್ಲಿ ತಾಲೂಕಿನ ರಾಮಸಾಗರ ಗ್ರಾಮದಲ್ಲಿ ನಡೆದಿದೆ.
ಮಂಗಳವಾರ ಬೆಳಗಿನ ಜಾವ ಗ್ರಾಮದ ಕಣವಿಮಾರೆಮ್ಮ ದೇವಸ್ಥಾನ ಬಳಿಯ ಮುಖ್ಯ ರಸ್ತೆಯಲ್ಲಿ ವಾಯುವಿಹಾರಕ್ಕೆ ತೆರಳಿದ್ದ ಸಂದರ್ಭದಲ್ಲಿ ಅಪರಿಚಿತ ಕಾರೊಂದು ಜಿ.ಚಂದ್ರಗೌಡ(65) ಅವರ ಮೇಲೆ ಹರಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಜಿ.ಚಂದ್ರಗೌಡ ಅವರ ಅಪಘಾತದ ಹಿಂದೆ ನಾನಾ ಅನುಮಾನಗಳು ಹುಟ್ಟಿಕೊಂಡಿದ್ದು, ಉದ್ದೇಶರ್ಪೂವಕವಾಗಿ ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಇದು ಅಪಘಾತವಲ್ಲ ಹಳೆ ವೈಷಮ್ಯದಿಂದ ಕೊಲೆ ಮಾಡಿದ್ದಾರೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಈ ಕುರಿತು ಕಂಪ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
2003ರಲ್ಲಿ ಹೊಸಪೇಟೆಯಲ್ಲಿ ಅಂದಿನ ತಾಲೂಕು ಪಂಚಾಯಿತಿ ಅಧ್ಯಕ್ಷ ಎಂ.ಸೂರ್ಯನಾರಾಯಣ ಅವರನ್ನು ಧ್ವಜಾರೋಹಣ ಸಂದರ್ಭದಲ್ಲಿ ಜಿ.ಚಂದ್ರಗೌಡ ಗುಂಡು ಹಾರಿಸಿ ಕೊಲೆ ಮಾಡಿದ್ದ ಆರೋಪ ಕೇಳಿ ಬಂದಿತ್ತು. ಹತ್ಯೆಗೈದಿದ್ದ ಚಂದ್ರಗೌಡ ಮೇಲೆ ಪ್ರಕರಣ ದಾಖಲಾಗಿತ್ತು. ನಂತರ 2018ರಲ್ಲಿ ಪ್ರಕರಣ ಸುಖಾಂತ್ಯ ಕಂಡಿತ್ತು. ಆದರೆ ಈಗ ರಾಮಸಾಗರ ಗ್ರಾಮದ ಹೊಸಪೇಟೆ ರಸ್ತೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವುದು ನಾನಾ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಸೇಡು ತೀರಿಸಿಕೊಳ್ಳಲು ಕೊಲೆ ಮಾಡಲಾಗಿದೆ ಎಂಬ ಅನುಮಾನವನ್ನು ಅವರ ಕುಟುಂಬಸ್ಥರು ವ್ಯಕ್ತಪಡಿಸಿದ್ದಾರೆ.