ಬೆಂಗಳೂರು: ಕಾವೇರಿ ನದಿ ನಿರ್ವಹಣಾ ಮಂಡಳಿ ರಚನೆ ಹಿನ್ನೆಲೆಯಲ್ಲಿ ಸಿಎಂ ಕುಮಾರಸ್ವಾಮಿ ಇಂದು ಪ್ರತಿಪಕ್ಷ ನಾಯಕರ ಸಭೆ ಕರೆದಿದ್ದಾರೆ.
ರಾಜ್ಯದ ಎಲ್ಲಾ ಸಂಸದರು, ರಾಜ್ಯಸಭಾ ಸದಸ್ಯರು ವಿಧಾನಮಂಡಲದ ಉಭಯಸದನಗಳ ವಿಪಕ್ಷ ನಾಯಕರು ಹಾಗೂ ಕಾವೇರಿ ಕೊಳ್ಳದ ಜನಪ್ರತಿನಿಧಿಗಳ ಸಭೆ ಕರೆಯಲಾಗಿದೆ. ಬೆಳಗ್ಗೆ 11.30ಕ್ಕೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆಯಲಿದೆ.
Advertisement
ಕೇಂದ್ರದಿಂದ ನೀರು ನಿರ್ವಹಣಾ ಮಂಡಳಿ ರಚನೆ ಹಿನ್ನೆಲೆಯಲ್ಲಿ ರಾಜ್ಯದ ಮುಂದಿನ ನಡೆ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ನ್ಯಾಯಾಧೀಕರಣಕ್ಕೆ ಮೇಲ್ಮನವಿ ಸಲ್ಲಿಸಬೇಕೇ ಅಥವಾ ಯಾವ ರೀತಿಯ ಕಾನೂನು ಹೋರಾಟ ನಡೆಸಬೇಕು ಎಂಬುದರ ಕುರಿತು ಇಂದಿನ ಸಭೆಯಲ್ಲಿ ಚರ್ಚೆ ನಡೆಯಲಿದೆ.
Advertisement
ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಫೆಬ್ರವರಿ 16 ರಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿತ್ತು. ನೀರು ಹಂಚಿಕೆಗೆ ಸಮಿತಿ ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು. ಸುಪ್ರೀಂ ಸೂಚನೆ ಹಿನ್ನೆಲೆ ಅಂತರಾಜ್ಯ ನದಿ ನೀರು ವಿವಾದ 1956 ರ ಕಾಯ್ದೆ ಅನ್ವಯ ಕರಡು ತಯಾರಿಸಿದ್ದ ಕೇಂದ್ರ ಸರ್ಕಾರ ಮೇ ಮೊದಲ ವಾರದಲ್ಲಿ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿತ್ತು. ಈ ವೇಳೆ ಕೆಲ ಮಾರ್ಪಾಡುಗಳೊಂದಿಗೆ ಒಪ್ಪಿಗೆ ಸೂಚಿಸಿದ್ದ ಸುಪ್ರೀಂ ಕೋರ್ಟ್ ಸಮಿತಿ ಅನುಷ್ಠಾನಕ್ಕೆ ತರುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು.