ತಮಿಳುನಾಡಿಗೆ 9.19 ಟಿಎಂಸಿ ನೀರು ಬಿಡಿ – ಕರ್ನಾಟಕಕ್ಕೆ ಸಿಡಬ್ಲ್ಯೂಸಿ ಆದೇಶ

Public TV
3 Min Read
CAUVERY

ನವದೆಹಲಿ: ತಮಿಳುನಾಡಿಗೆ 9.19 ಟಿಎಂಸಿ ನೀರು ಬಿಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಸಿ) ಆದೇಶ ನೀಡಿದೆ.

ಇಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಿತು. ಕಾವೇರಿ ಕೊಳ್ಳದ ಕರ್ನಾಟಕ, ತಮಿಳುನಾಡು, ಕೇರಳ, ಪುದುಚೇರಿ ಮತ್ತು ಕೇಂದ್ರ ಸರ್ಕಾರದ ಪ್ರತಿನಿಧಿಗಳು ಭಾಗಿಯಾಗಿದ್ದರು. ಸಭೆಯ ಬಳಿಕ ಜೂನ್ ತಿಂಗಳಲ್ಲಿ ಬಿಡಬೇಕಾಗಿರುವ 9.19 ಟಿಎಂಸಿ ನೀರನ್ನು ಬಿಡುಗಡೆ ಮಾಡುವಂತೆ ಸಿಡಬ್ಲ್ಯೂಸಿ ಸೂಚಿಸಿದೆ.

cauvery krs

ಸಭೆಯ ಬಳಿಕ ಪ್ರಾಧಿಕಾರದ ಅಧ್ಯಕ್ಷ ಮಸೂದ್ ಹುಸೇನ್ ಪ್ರತಿಕ್ರಿಯಿಸಿ, ಜೂನ್ ತಿಂಗಳಲ್ಲಿ ಬಿಡಬೇಕಾದ ನೀರನ್ನು ಹರಿಸಲು ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ. ಜೂನ್ ತಿಂಗಳ ಅಂತ್ಯದ ಒಳಗಡೆ 10 ದಿನಕ್ಕೊಮ್ಮೆ 3 ಟಿಎಂಸಿಯಂತೆ ನೀರು ಹರಿಸಬೇಕು. ಮಾನ್ಸೂನ್ ಮಳೆ ತಡವಾದರೆ ಮುಂದೆ ಬಿಡಬೇಕಾದ ನೀರಿನ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ತಿಳಿಸಿದರು.

ಪುದುಚೇರಿ ಹಾಗು ತಮಿಳುನಾಡಿನ ಕೋಟಾ ಮೊದಲಿನಂತೆ ಉಳಿಯಲಿದೆ. ಕರ್ನಾಟಕ 9.19 ಟಿಎಂಸಿ ನೀರನ್ನು ಜೂನ್ ಅಂತ್ಯದೊಳಗೆ ಹರಿಸಲಿದೆ. ಕರ್ನಾಟಕದಲ್ಲಿ ಮುಂಗಾರು ಎಂದಿನಂತೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಕರ್ನಾಟಕ ಕೂಡ ಈ ವಿಷಯವನ್ನು ತಗಾದೆಯಿಲ್ಲದೇ ಒಪ್ಪಿಕೊಂಡಿದೆ ಎಂದು ಮಸೂದ್ ತಿಳಿಸಿದರು.

vlcsnap 2018 07 19 07h08m41s174

ಯಾವ ತಿಂಗಳಿನಲ್ಲಿ ತಮಿಳುನಾಡಿಗೆ ಎಷ್ಟು ಟಿಎಂಸಿ ನೀರು?
ನ್ಯಾ. ಎನ್.ಪಿ.ಸಿಂಗ್, ನ್ಯಾ. ಸುಧೀರ್ ನಾರಿಯನ್, ನ್ಯಾ. ಎನ್.ಎಸ್. ರಾವ್ ಅವರನ್ನು ಒಳಗೊಂಡ ಕಾವೇರಿ ನ್ಯಾಯಾಧಿಕರಣ 2007ರ ಫೆಬ್ರವರಿ 2ರಂದು ಅಂತಿಮ ಐತೀರ್ಪ ನೀಡಿತ್ತು. ಈ ತೀರ್ಪು ಪ್ರಕಾರ ಜೂನ್ ನಲ್ಲಿ 10, ಜುಲೈ 34, ಅಗಸ್ಟ್ 50, ಸೆಪ್ಟೆಂಬರ್ 40, ಅಕ್ಟೋಬರ್ 22, ನವೆಂಬರ್ 15, ಡಿಸೆಂಬರ್ 8, ಜನವರಿ 3, ಫೆಬ್ರವರಿ 2.5, ಮಾರ್ಚ್ 2.5, ಏಪ್ರಿಲ್ 2.5, ಮೇ 2.5 ಟಿಎಂಸಿ ಸೇರಿ ಒಟ್ಟು 192 ಟಿಎಂಸಿ ನೀರನ್ನು ಕರ್ನಾಟಕ ಪ್ರತಿವರ್ಷ ತಮಿಳುನಾಡಿಗೆ ಹರಿಸಬೇಕಿತ್ತು. ಈ ಐತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ವಿಶೇಷ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾ. ಎಎಂ ಖಾನ್ವೀಲ್ಕರ್ ಮತ್ತು ಅಮಿತಾವ್ ರಾಯ್ ಅವರನ್ನು ಒಳಗೊಂಡ ತ್ರಿಸದಸ್ಯ ಪೀಠ 2018 ಫೆಬ್ರವರಿ 16 ರಂದು ಐತೀರ್ಪನ್ನು ಸ್ವಲ್ಪ ಬದಲಾಯಿಸಿ 177.75 ಟಿಎಂಸಿ ನೀರನ್ನು ಕರ್ನಾಟಕ ಪ್ರತಿವರ್ಷ ತಮಿಳುನಾಡಿಗೆ ಬಿಡಬೇಕೆಂದು ಆದೇಶಿಸಿತ್ತು. ಅಷ್ಟೇ ಅಲ್ಲದೇ ಯಾವ ತಿಂಗಳಿನಲ್ಲಿ ಎಷ್ಟು ನೀರು ಬಿಡಬೇಕು ಎನ್ನುವುದನ್ನು ಕೇಂದ್ರ ನೇಮಿಸುವ ಸಂಸ್ಥೆ ನಿರ್ಧರಿಸಬೇಕು ಎಂದು ಹೇಳಿತ್ತು.

AMMA CAUVERY 22

ಕ್ಯೂಸೆಕ್ ಮತ್ತು ಟಿಎಂಸಿ ಎಂದರೆ ಎಷ್ಟು?
ಕ್ಯೂಸೆಕ್ ಎಂಬುದು Cubic feet per Second. ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯೂಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯೂಸೆಕ್ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ. 10 ಸಾವಿರ ಕ್ಯೂಸೆಕ್ ನೀರು 24 ಗಂಟೆ ನಿರಂತರ ಹರಿದರೆ 0.864 ಟಿಎಂಸಿ ಅಡಿ ಆಗುತ್ತದೆ. 35.87 ಅಡಿ ಅಳದಷ್ಟು ನೀರನ್ನು ಒಂದು ಚದರ ಮೈಲಿ ಪ್ರದೇಶದಲ್ಲಿ ಸಂಗ್ರಹಿಸಿದರೆ ಒಂದು ಟಿಎಂಸಿ ಅಡಿ ಆಗುತ್ತದೆ.

AMMA CAUVERY 23

ತಮಿಳುನಾಡಿಗೆ ಕರ್ನಾಟಕದಿಂದ ನೀರು ಹರಿದಿದೆ ಎಂದು ಪತ್ತೆ ಮಾಡೋದು ಹೇಗೆ?
ತಮಿಳುನಾಡಿನ ಭಾಗದಲ್ಲಿರುವ ಬಿಳಿಗುಂಡ್ಲುವಿನಲ್ಲಿ ಎಷ್ಟು ಪ್ರಮಾಣದ ನೀರು ಹರಿದಿದೆ ಎಂದು ಪತ್ತೆ ಮಾಡಲು ಕೇಂದ್ರ ಜಲ ಆಯೋಗದ ಅಧಿಕಾರಿಗಳು ವರ್ಷವಿಡಿ ನೀರಿನ ಲೆಕ್ಕಾಚಾರ ಹಾಕುತ್ತಾರೆ. ಪ್ರತಿದಿನ ಬೆಳಗ್ಗೆ 8ರಿಂದ 10ರವರೆಗೆ ಎರಡು ಗಂಟೆಗಳ ಕಾಲ 160 ಮೀಟರ್ ಪ್ರದೇಶದ 15 ನಿರ್ದಿಷ್ಟ ಸ್ಥಳಗಳಲ್ಲಿ ಈ ಪರೀಕ್ಷೆ ನಡೆಯುತ್ತದೆ. 7 ಮಂದಿ ಸಿಬ್ಬಂದಿ ದೋಣಿ ಮೂಲಕ ಒಂದು ದಂಡೆಯಿಂದ ಮತ್ತೂಂದು ದಂಡೆಗೆ ಸಾಗಿ ತಮ್ಮ ಜೊತೆ ಇರುವ ಉಪಕರಣವನ್ನು ನೀರಿಗೆ ಬಿಡುತ್ತಾರೆ. ಈ ಮೂಲಕ ಪ್ರತಿ ಸೆಕೆಂಡ್‍ಗೆ ಎಷ್ಟು ನೀರು ಕರ್ನಾಟಕದಿಂದ ತಮಿಳುನಾಡಿಗೆ ಹೋಗುತ್ತಿದೆ ಎಂಬುದನ್ನು ಪತ್ತೆ ಮಾಡುತ್ತಾರೆ. ಈ ಸಿಬ್ಬಂದಿಯನ್ನು ಕರ್ನಾಟಕ, ತಮಿಳುನಾಡಿನ ಅಧಿಕಾರಿಗಳು ನೇರವಾಗಿ ಸಂಪರ್ಕಿಸುವಂತಿಲ್ಲ. ರಾಜ್ಯ ಸರ್ಕಾರಗಳು ಅಥವಾ ನ್ಯಾಯಾಲಯಗಳು ಕೇಳಿದರೆ ಮಾತ್ರ ಮಾಹಿತಿಯನ್ನು ನೀಡಲಾಗುತ್ತದೆ.

Share This Article
Leave a Comment

Leave a Reply

Your email address will not be published. Required fields are marked *