ಬೆಂಗಳೂರು: ನಿಗೂಢವಾಗಿ ನಾಪತ್ತೆಯಾಗಿರುವ ಟೆಕ್ಕಿ ಅಜಿತಾಬ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಚೆನ್ನೈನ ಸಿಬಿಐ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ.
ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ನಿಗೂಢವಾಗಿ ನಾಪತ್ತೆಯಾಗಿದ್ದ ಟೆಕ್ಕಿ ಅಜಿತಾಬ್ ಪ್ರಕರಣ ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಸತತ 11 ತಿಂಗಳ ಕಾಲ ಅಜಿತಾಬ್ ಗಾಗಿ ಹುಡಕಾಟ ನಡೆಸಿದ್ದರು. ಅಲ್ಲದೇ ಪ್ರಕರಣವನ್ನು ಭೇದಿಸಲು ವಿಶೇಷ ತನಿಖಾ ತಂಡವನ್ನೂ ಸಹ ರಚನೆ ಮಾಡಲಾಗಿತ್ತು. ಆದರೂ ಸಹ ಅಜಿತಾಬ್ ಬಗ್ಗೆ ಸಣ್ಣ ಸುಳಿವು ಬೆಂಗಳೂರು ಪೊಲೀಸರಿಗೆ ಸಿಕ್ಕಿರಲಿಲ್ಲ.
Advertisement
Advertisement
ಇದರಿಂದ ನೊಂದ ಅಜಿತಾಬ್ ಪೋಷಕರು ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರ ಗೃಹಮಂತ್ರಿ ರಾಜನಾಥ್ ಸಿಂಗ್ ಅವರಿಗೂ ಪತ್ರ ಬರೆದಿದ್ದರು. ಹೀಗಾಗಿ ಕೋರ್ಟ್ ಆದೇಶದನ್ವಯ ಚೆನ್ನೈ ಸಿಬಿಐ ಬ್ರಾಂಚ್ ನಲ್ಲಿ ಅಜಿತಾಭ್ ನಾಪತ್ತೆ ಪ್ರಕರಣ ದಾಖಲಾಗಿದೆ.
Advertisement
ಏನಿದು ಪ್ರಕರಣ?
ಬೆಳ್ಳಂದೂರಿನ ಬ್ರಿಟೀಷ್ ಟೆಲಿಕಾಂ ನಲ್ಲಿ ಐದು ವರ್ಷದಿಂದ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಅಜಿತಾಬ್ ತನ್ನ ಸಿಯಾಜ್ ಕಾರನ್ನು ಮಾರಾಟ ಸಂಬಂಧ ಓಎಲ್ ಎಕ್ಸ್ ನಲ್ಲಿ ಮಾಹಿತಿ ಹಾಕಿದ್ದರು. ಓಎಲ್ ಎಕ್ಸ್ ನಲ್ಲಿ ಪ್ರಕಟಿಸಿದ ಬಳಿಕ ಕುಮಾರ್ ಅಜಿತಾಬ್ ಕರೆ ಬಂದಾಗಲೆಲ್ಲ ಕಾರು ಸಮೇತ ಹೊರ ಹೋಗಿ ಬರುತ್ತಿದ್ದರು. ಹೀಗೆ ಕಳೆದ ವರ್ಷ ಡಿಸೆಂಬರ್ 18 ರಂದು ಅವರ ಮೊಬೈಲ್ ಗೆ ಕರೆ ಬಂದಿತ್ತು. ಎಂದಿನಂತೆಯೇ ಅಜಿತಾಬ್, ಕೆಎ 03 ಎನ್‍ಎ 1751 ನಂಬರಿನ ತನ್ನ ಸಿಯಾಜ್ ಕಾರಿನಲ್ಲಿ ಹೊರ ಹೋಗಿದ್ದರು. ಹೊರ ಹೋದವರು ಇದೂವರೆಗೂ ಎಲ್ಲಿದ್ದಾರೆ ಎನ್ನುವುದು ತಿಳಿದು ಬಂದಿಲ್ಲ.
Advertisement
ಒಎಲ್ ಎಕ್ಸ್ ಜಾಹೀರಾತು ನೋಡಿ ಅಜಿತಾಬ್ ಅವರನ್ನು ದುಷ್ಕರ್ಮಿಗಳು ಅಪಹರಿಸಿದ್ದಾರೆ ಎಂದು ಕುಟುಂಬದವರು ಸಂಶಯ ವ್ಯಕ್ತಪಡಿಸಿದ್ದರು. ಆಗ ಪೊಲೀಸರು ಈ ಪ್ರಕರಣವನ್ನು ಸವಾಲಾಗಿ ತೆಗೆದುಕೊಂಡು ಡ್ರೋಣ್ ಕ್ಯಾಮೆರಾ ಬಳಸಿ ಕಾರ್ಯಾಚರಣೆ ನಡೆಸಿದ್ದರು. ಕೊನೆಯ ಬಾರಿ ಅಜಿತಾಬ್ ಮೊಬೈಲ್ ಸಿಗ್ನಲ್ ಆಫ್ ಆದ ಸ್ಥಳವಾದ ವರ್ತೂರು ಸಮೀಪದ ಗುಂಜೂರು ಸಮೀಪ ಪೊಲೀಸರು ಹುಡುಕಾಟ ಪ್ರಾರಂಭಿಸಿದ್ದರು. 8 ತಂಡಗಳನ್ನು ರಚಿಸಿಕೊಂಡಿದ್ದು ಒಂದು ತಂಡ ಗುಂಜೂರು ಸುತ್ತಮುತ್ತಲಿನ ಪ್ರದೇಶಗಳು, ವರ್ತೂರು ಕೆರೆ, ಕೈಕೊಂಡ್ರಹಳ್ಳಿ ಕೆರೆ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಡ್ರೋಣ್ ಕ್ಯಾಮೆರಾ ಬಳಸಿ ಹುಡುಕಾಟ ನಡೆಸಿದ್ದರು. ಇನ್ನು 7 ತಂಡಗಳು ಬೇರೆ ರೀತಿಯಲ್ಲಿ ಹುಡುಕಾಟ ನಡೆಸಿದ್ದರು.
ವೈಟ್ ಫಿಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಜಿತಾಬ್ ನಾಪತ್ತೆಯಾಗಿದ್ದು, ಅವರ ಪತ್ತೆಗಾಗಿ ವಿಶೇಷ ತನಿಖಾ ತಂಡ ರಚನೆ ಮಾಡಲಾಗಿತ್ತು. ನಂತರ ಪೋಷಕರ ಒತ್ತಡ ಹೆಚ್ಚಾಗುತ್ತಿದ್ದಂತೆ ಈ ಕೇಸನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿತ್ತು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv