– ‘ಲೋಕತಂತ್ರ ಬಚಾವೋ, ಅರಾಜಕತಾ ಹಠಾವೋ’ ಅಭಿಯಾನದಡಿ ಬೃಹತ್ ಪಾದಯಾತ್ರೆ
ಕಲಬುರಗಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನ.25ರಂದು ಕಲಬುರಗಿಗೆ ಆಗಮಿಸಲಿದ್ದು, ನಗರದ ನಗರೇಶ್ವರ ಶಾಲೆಯಿಂದ ಜಗತ್ ವೃತ್ತದವರೆಗೆ ನಡೆಯಲಿರುವ ಬೃಹತ್ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ ಎಂದು ಮಾಜಿ ಸಚಿವ ರಾಜೂಗೌಡ ತಿಳಿಸಿದರು.
ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪರವಾಗಿ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಬಿಜೆಪಿ ವತಿಯಿಂದ ದೇಶಾದ್ಯಂತ ‘ಲೋಕತಂತ್ರ ಬಚಾವೋ, ಅರಾಜಕತಾ ಹಠಾವೋ’ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಇದರ ಭಾಗವಾಗಿ ನ.25ರಂದು ಕಲಬುರಗಿಯಲ್ಲಿ ಬೃಹತ್ ಪಾದಯಾತ್ರೆ ಆಯೋಜಿಸಲಾಗಿದೆ ಎಂದರು.
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪ್ರಪ್ರಥಮ ಬಾರಿಗೆ ಕಲಬುರಗಿಗೆ ಆಗಮಿಸುತ್ತಿದ್ದು, ಅವರೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ದೇಶದ 13 ಪ್ರಮುಖ ಸ್ಥಳಗಳಲ್ಲಿ ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ ಎಂಬ ಸಂದೇಶದೊಂದಿಗೆ ಪಾದಯಾತ್ರೆಗಳನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕದಲ್ಲಿ ಈ ಅಭಿಯಾನಕ್ಕೆ ಕಲಬುರಗಿಯನ್ನು ಆಯ್ಕೆ ಮಾಡಿರುವುದು ವಿಶೇಷವಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಜಿಲ್ಲೆ ಕಲಬುರಗಿಯಲ್ಲಿ ಪಾದಯಾತ್ರೆ ನಡೆಸುವ ಮೂಲಕ ಬಿಜೆಪಿ ತನ್ನ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದೆ ಎಂದು ತಿಳಿಸಿದರು.
