ಬೆಂಗಳೂರು: ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ ಸರ ಕದಿಯುತ್ತಿದ್ದ ಮೂವರು ಆರೋಪಿಗಳನ್ನು ಶಿವಾಜಿನಗರ ಪೊಲೀಸರು ಬಂಧಿಸಿದ್ದಾರೆ.
ಇಬ್ರಾಹಿಂ ಅಲಿಯಾಸ್ ಕಲು, ಫಾಯಾಜ್ ಸೇರಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ ಸುಮಾರು 300 ಗ್ರಾಂ ಚಿನ್ನ ಹಾಗೂ 8 ಸರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ನಗರದೆಲ್ಲೆಡೆ ಒಂಟಿಯಾಗಿ ಓಡಾಡುತ್ತಿದ್ದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಬೈಕ್‍ನಲ್ಲಿ ಬಂದು ಸರವನ್ನು ಕಿತ್ತುಕೊಂಡು ಪರಾರಿಯಾಗುತ್ತಿದ್ದರು. ಈ ಸಂಬಂಧ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದೂರಿನಂತೆ ಪೊಲೀಸರು ಆರೋಪಿಗಳ ಪತ್ತೆಗೆ ಬಲೆಬೀಸಿದ್ದು, ಇದೀಗ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸರಗಳ್ಳರು ಓಡಾಡೋ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಇದರ ಆಧಾರದ ಮೇಲೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಕಳ್ಳತನ ಮಾಡಲು ಬಳಸುತ್ತಿದ್ದ ಬೈಕ್ ಅನ್ನು ಕೂಡ ವಶಪಡಿಸಿಕೊಳ್ಳಲಾಗಿದೆ.