ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟದಲ್ಲಿ (Malemahadeshwara Hills) ಇಂದು ಸಚಿವ ಸಂಪುಟ ಸಭೆ (Cabinet Meeting) ನಡೆಯಲಿದೆ. ಮಲೆಮಹದೇಶ್ವರದಲ್ಲಿ ಇದೇ ಮೊದಲ ಬಾರಿಗೆ ನಡೆಯಲಿರುವ ಸಚಿವ ಸಂಪುಟ ಸಭೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಸಭೆ ನಡೆಸಲು ವಜ್ರಮಲೆ ವಸತಿ ಗೃಹದ ಎದುರಿನ ಆವರಣದಲ್ಲಿ ಜರ್ಮನ್ ಟೆಂಟ್ ಅಳವಡಿಸಲಾಗಿದೆ. ಇದರಿಂದ ಬಿಸಿಲು, ಮಳೆ ಬಂದರೂ ಸಭೆಗೆ ಯಾವುದೇ ಅಡ್ಡಿಯಾಗುವುದಿಲ್ಲ.
ಸಚಿವ ಸಂಪುಟ ಸಭೆಯಲ್ಲಿ ಮೈಸೂರು ವಿಭಾಗದ ಎಂಟು ಜಿಲ್ಲೆಗಳ ವಿವಿಧ ಯೋಜನೆಗಳ ಬಗ್ಗೆ ಚರ್ಚೆಯಾಗಲಿದ್ದು, ಅನುಮೋದನೆ ಸಾಧ್ಯತೆಯಿದೆ. ಇನ್ನೂ ಚಾಮರಾಜನಗರ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಕಾಶ್ಮೀರಕ್ಕೆ ತೆರಳಿದ್ದ 180 ಕನ್ನಡಿಗರು ಸೇಫ್ – ಸ್ವಂತ ಹಣದಲ್ಲೇ ಎಲ್ಲರನ್ನು ಕರೆತರುತ್ತಿರೋ ಸಂತೋಷ್ ಲಾಡ್
ಗಿರಿಜನರಿಗೆ ವಸತಿ, ಹಾಡಿಗಳಿಗೆ ವಿದ್ಯುತ್, ಪ್ರವಾಸೋದ್ಯಮ, ಕೆರೆ ನೀರು ತುಂಬಿಸುವ ಯೋಜನೆ ಸೇರಿದಂತೆ ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ಸಿಗುವ ಸಾಧ್ಯತೆ ಇದೆ.
ಈಗಾಗಲೇ ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವ ಹೆಚ್.ಸಿ ಮಹದೇವಪ್ಪ, ಕೆ ವೆಂಕಟೇಶ್ , ಲಕ್ಷ್ಮಿ ಹೆಬ್ಬಾಳ್ಕರ್ ಬೆಟ್ಟದಲ್ಲಿ ವಾಸ್ತವ್ಯ ಹೂಡಿದ್ದಾರೆ. ಬೆಳಗ್ಗೆ 11:30 ಕ್ಕೆ ಹೆಲಿಕಾಪ್ಟರ್ ಮೂಲಕ ಮಹದೇಶ್ವರ ಬೆಟ್ಟಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಬಳಿಕ ಮಹದೇಶ್ವರರ ಇತಿಹಾಸ ಸಾರುವ ಮ್ಯೂಸಿಯಂ, 376 ಕೊಠಡಿಗಳ ವಸತಿ ಗೃಹ, 1 ಮೆಗಾ ವ್ಯಾಟ್ ಸೋಲಾರ್ ಪ್ಲಾಂಟ್ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಲಿದೆ.
ಮಧ್ಯಾಹ್ನ 12:00 ಗಂಟೆಗೆ ಸಚಿವ ಸಂಪುಟ ಸಭೆ ಆರಂಭಗೊಳ್ಳಲಿದ್ದು, ಬಳಿಕ ಪತ್ರಿಕಾಗೋಷ್ಠಿ ನಡೆಯಲಿದೆ. ಸಂಜೆ 4:00 ಗಂಟೆಗೆ ಸಿಎಂ ಅಧ್ಯಕ್ಷತೆಯಲ್ಲಿ ಮಲೆಮಹದೇಶ್ವರ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಸಭೆ ನಡೆಯಲಿದೆ. ಬಳಿಕ ಮಹದೇಶ್ವರ ಬೆಟ್ಟದಲ್ಲಿ ಸಿಎಂ ವಾಸ್ತವ್ಯ ಹೂಡಲಿದ್ದಾರೆ. ಇದನ್ನೂ ಓದಿ: ಕಾಶ್ಮೀರದಲ್ಲಿ ನರಮೇಧ – ಬೆಂಗಳೂರಿಗೆ ಆಗಮಿಸಿದ ಮೃತದೇಹ, ಕುಟುಂಬಸ್ಥರಿಗೆ ಹಸ್ತಾಂತರ