ಚಾಮರಾಜನಗರ: ಎಲ್ಲೆಡೆ ಭೀತಿ ಹುಟ್ಟಿಸಿರುವ ಕೊರೊನಾ ವೈರಸ್ ಬಿಸಿ ನ್ಯಾಯಾಲಯ ಕಲಾಪಗಳಿಗೂ ತಟ್ಟಿದೆ. ಗಡಿ ಜಿಲ್ಲೆ ಚಾಮರಾಜನಗರದ ನ್ಯಾಯಾಲಯಗಳಲ್ಲಿ ಜನರು ಗುಂಪುಗೂಡುವುದನ್ನು ನಿರ್ಬಂಧಿಸಲಾಗಿದೆ. ಹೀಗಾಗಿ ವಿಚಾರಣೆಗೆ ಕಕ್ಷಿದಾರರ ಹಾಜರಾತಿ ಕಡ್ಡಾಯವಲ್ಲ ಎಂದು ಕೋರ್ಟ್ ಸೂಚನೆ ನೀಡಿದೆ.
ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ವಕೀಲರ ಸಂಘ, ತೀರಾ ಅವಶ್ಯಕತೆ ಇದ್ದಲ್ಲಿ ಮಾತ್ರ ಕಕ್ಷಿದಾರರು ಕೋರ್ಟಿಗೆ ಹಾಜರಾಗಲು ಅವಕಾಶ ನೀಡಲಾಗಿದ್ದು, ಮಾರ್ಚ್ 21ರವರೆಗೆ ಕಕ್ಷಿದಾರರು ನ್ಯಾಯಾಲಯಕ್ಕೆ ಹಾಜರಾಗುವುದಕ್ಕೆ ವಿನಾಯ್ತಿ ನೀಡಲಾಗುತ್ತಿದೆ. ಹೈಕೋರ್ಟ್ ನಿರ್ದೇಶನದ ಮೇರೆಗೆ ಹಾಗೂ ನೆರೆಯ ಕೇರಳ ರಾಜ್ಯದ ಕಕ್ಷಿದಾರರು ಸಹ ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಕೊರೊನಾ ಹರಡುವ ಸಾಧ್ಯತೆಗಳಿದೆ ಎಂದು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.
ಈಗಾಗಲೇ ರಾಜ್ಯಕ್ಕೆ ಕಾಲಿಟ್ಟಿರುವ ಕೊರೊನಾ ವೈರಸ್ 11 ಮಂದಿಗೆ ತಗುಲಿದ್ದು, ಈಗಾಗಲೇ ಕಲಬುರಗಿಯಲ್ಲಿ ಓರ್ವ ವೃದ್ಧರನ್ನು ಬಲಿ ಪಡೆದಿದೆ. ಇತ್ತ ನೆರೆ ರಾಜ್ಯ ಮಹಾರಾಷ್ಟ್ರದಲ್ಲೂ ಕೊರೊನಾ ರಣಕೇಕೆ ಹಾಕುತ್ತಿದ್ದು, 39 ಮಂದಿಗೆ ಸೋಂಕು ತಟ್ಟಿರುವುದು ದೃಢಪಟ್ಟಿದೆ. ಕೇರಳದಲ್ಲಿ 24 ಕೊರೊನಾ ಸೋಂಕಿತ ಪ್ರಕರಣಗಳು ದಾಖಲಾಗಿವೆ. ಈವರೆಗೆ ವಿಶ್ವದಾದ್ಯಂತ ಬರೋಬ್ಬರಿ 7,171 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಸುಮಾರು 1,82,605 ಮಂದಿಗೆ ಕೊರೊನಾ ತಗುಲಿದೆ ಎಂದು ವರದಿಯಾಗಿದೆ.