-ಅಮಿತ್ ಶಾ, ಮೋದಿ ಜೋಡಿ ವಿರುದ್ಧ ಅಸಮಾಧಾನ!
ನವದೆಹಲಿ: ಬಿಜೆಪಿ ಪಕ್ಷದ ಹಿರಿಯ ಮುಖಂಡ ಹಾಗೂ ಎರಡು ಬಾರಿ ರಾಜ್ಯಸಭಾ ಸದಸ್ಯರಾಗಿದ್ದ ಚಂದನ್ ಮಿತ್ರ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ತೃಣಮೂಲ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಾರೆ ಎನ್ನಲಾಗಿದೆ.
ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ಮುಂದಾಳತ್ವದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ ವಾರ್ಷಿಕ ಬೃಹತ್ ಸಮಾವೇಶವನ್ನು ಶನಿವಾರ ಆಯೋಜನೆ ಮಾಡಿದ್ದು, ಈ ವೇಳೆ ಹಲವು ಹೊಸ ನಾಯಕರು ಪಕ್ಷವನ್ನು ಸೇರ್ಪಡೆಯಾಗಲಿದ್ದಾರೆ ಎಂದು ವರದಿಯಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಜೋಡಿಯ ಕುರಿತು ಅಸಮಾಧಾನ ಹೊಂದಿರುವ ಚಂದನ್ ಮಿತ್ರ, ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ತಮ್ಮ ರಾಜೀನಾಮೆ ಪತ್ರದೊಂದಿಗೆ ಬಿಜೆಪಿ ಕೆಲ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿ ಪತ್ರವನ್ನು ಬರೆದಿದ್ದಾರೆ. ಆದರೆ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತರಾ ಎಂಬುವುದರ ಬಗ್ಗೆ ಈವರೆಗೂ ಚಂದನ್ ಮಿತ್ರ ಹಾಗೂ ತೃಣಮೂಲ ಕಾಂಗ್ರೆಸ್ ಯಾವುದೇ ಸ್ಪಷ್ಟನೆ ನೀಡಿಲ್ಲ.
ಚಂದನ್ ಮಿತ್ರ ಪತ್ರಕರ್ತರಾಗಿ ವೃತ್ತಿಜೀವನ ಆರಂಭಿಸಿದ್ದ ಅವರು ಸದ್ಯ ಪತ್ರಿಕೆಯೊಂದರ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ತೃಣಮೂಲ ಕಾಂಗ್ರೆಸ್ ವಾರ್ಷಿಕ ಸಮಾರಂಭದ ವೇಳೆ ಹಲವು ನಾಯಕರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ. ಒಂದೊಮ್ಮೆ ಚಂದನ್ ಮಿತ್ರ ಅವರು ತೃಣಮೂಲ ಕಾಂಗ್ರೆಸ್‍ಗೆ ಸೇರ್ಪಡೆಯಾದರೆ, 2019 ರ ಲೋಕಾಸಭೆ ಚುನಾವಣೆಗೆ ಸಿದ್ಧತೆಯಲ್ಲಿರುವ ಬಿಜೆಪಿ ಪಕ್ಷಕ್ಕೆ ಭಾರೀ ಹಿನ್ನೆಡೆಯಾಗಲಿದೆ ಎನ್ನಲಾಗಿದೆ. ಅಂದಹಾಗೇ ಚಂದನ್ ಮಿತ್ರ ಅವರು ಬಿಜೆಪಿಗೆ ರಾಜೀನಾಮೆ ನೀಡಲು ಪಕ್ಷದಲ್ಲಿ ಅವರನ್ನು ನಿರ್ಲಕ್ಷ್ಯ ಮಾಡಿರುವುದೇ ಕಾರಣ ಎನ್ನಲಾಗಿದೆ. 2016 ರಲ್ಲಿ ಮಿತ್ರ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಹೂಗ್ಲಿ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಂಡಿದ್ದರು.