ಚಿದಂಬರಂಗಿಲ್ಲ ರಿಲೀಫ್ - ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಕಾರ - Public TV
Connect with us

Latest

ಚಿದಂಬರಂಗಿಲ್ಲ ರಿಲೀಫ್ – ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಕಾರ

Published

on

ನವದೆಹಲಿ: ಐಎನ್‍ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರಿಗೆ ಬಂಧನ ಭೀತಿ ಎದುರಾಗಿದ್ದು, ದೆಹಲಿ ನ್ಯಾಯಾಲಯ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಸುಪ್ರೀಂ ಕೋರ್ಟ್ ಸಹ ಬಂಧನದಿಂದ ರಕ್ಷಣೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ತಿಳಿಸಿದೆ. ಈ ಮೂಲಕ ಚಿದಂಬರಂ ಅವರಿಗೆ ಭಾರೀ ಹಿನ್ನಡೆಯಾದಂತಾಗಿದೆ.

ಬಂಧನದಿಂದ ರಕ್ಷಣೆ ಕೋರಿ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರಿಗೆ ಕಳುಹಿಸುತ್ತೇವೆ ಅವರೇ ಆದೇಶ ಪ್ರಕಟಿಸುತ್ತಾರೆ ಎಂದು ನ್ಯಾಯಮೂರ್ತಿ ಎನ್.ವಿ.ರಮಣ್, ಎಂ.ಶಾಂತನಗೌಡರ್ ಹಾಗೂ ಅಜಯ್ ರಸ್ಟೋಗಿ ಅವರಿದ್ದ ಪೀಠ ತಿಳಿಸಿದೆ.

ಸಿಬಿಐ ಅಧಿಕಾರಿಗಳು ಮಂಗಳವಾರ ಮಧ್ಯ ರಾತ್ರಿಯೇ ನೋಟಿಸ್ ನೀಡಿದ್ದು, ಇದೀಗ ಜಾರಿ ನಿರ್ದೇಶನಾಲಯ ಲುಕೌಟ್ ನೋಟಿಸ್ ಜಾರಿ ಮಾಡಿದೆ. ಮಾತ್ರವಲ್ಲದೆ ಸಿಬಿಐ ಅಧಿಕಾರಿಗಳು ಸಹ ಚಿದಂಬರಂ ಅವರ ಮನೆಗೆ ಮೂರು ಬಾರಿ ಭೇಟಿ ನೀಡಿದ್ದಾರೆ. ಆದರೆ ಚಿದಂಬರಂ ಅವರು ಮನೆಯಲ್ಲಿರಲಿಲ್ಲ, ಎಲ್ಲಿ ಹೋಗಿದ್ದಾರೆ ಎಂಬುದು ತಿಳಿದಿಲ್ಲ. ಮಂಗಳವಾರ ಹೈ ಕೋರ್ಟ್ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದ ನಂತರ ಚಿಂದಂಬರಂ ಅವರು ಕಾಣೆಯಾಗಿದ್ದಾರೆ. ಹೀಗಾಗಿ ಇಡಿ ಹಾಗೂ ಸಿಬಿಐ ಅಧಿಕಾರಿಗಳು ಚಿದಂಬರಂ ಅವರ ಮನೆಗೆ ಮೇಲಿಂದ ಮೇಲೆ ಭೇಟಿ ನೀಡುತ್ತಿದ್ದಾರೆ.

ಸಿಬಿಐ ಹಾಗೂ ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದರ ಕುರಿತು ಚಿದಂಬರಂ ಪರ ವಕೀಲ ಆಕ್ರೋಶ ವ್ಯಕ್ತಪಡಿಸಿದ್ದು, ಕಾನೂನಿನ ಯಾವ ನಿಬಂಧನೆ ಅಡಿಯಲ್ಲಿ ನನ್ನ ಕಕ್ಷಿದಾರರಿಗೆ ನೋಟಿಸ್ ನೀಡಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ.

ಐಎನ್‍ಎಕ್ಸ್ ಮೀಡಿಯಾ ಮತ್ತು ಏರ್ಸೆಲ್ ಮ್ಯಾಕ್ಸಿಸ್ ಪ್ರಕರಣದಲ್ಲಿ ಚಿದಂಬರಂ ಅವರ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕೃತಗೊಳಿಸಿದ ಬೆನ್ನಲ್ಲೇ ಸಿಬಿಐ ಅಧಿಕಾರಿಗಳು ಬಂಧನಕ್ಕಾಗಿ ಅವರ ನಿವಾಸಕ್ಕೆ ತೆರಳಿದ್ದರು. ಈ ವೇಳೆ ಅವರು ಮನೆಯಲ್ಲಿ ಇಲ್ಲದ ಕಾರಣ 2 ಗಂಟೆಯ ಒಳಗಡೆ ವಿಚಾರಣೆಗೆ ಹಾಜರಾಗಿ ಎಂದು ಸಿಬಿಐ ಅಧಿಕಾರಿಗಳು ಬಾಗಿಲಿಗೆ ನೋಟಿಸ್ ಅಂಟಿಸಿದ್ದಾರೆ.

ನೋಟಿಸಿನಲ್ಲಿ 2 ಗಂಟೆಯ ಒಳಗಡೆ ವಿಚಾರಣೆಗೆ ಹಾಜರಾಗಬೇಕೆಂದು ತಿಳಿಸಿದ್ದನ್ನು ಪ್ರಶ್ನೆ ಮಾಡಿರುವ ಚಿದಂಬರಂ ಪರ ವಕೀಲ ಅರ್ಶದೀಪ್ ಸಿಂಗ್ ಖುರಾನ, ನನ್ನ ಕಕ್ಷಿದಾರರು 2 ಗಂಟೆಯ ಒಳಗಡೆ ವಿಚಾರಣೆ ಹಾಜರಾಗಬೇಕೆಂದು ನೋಟಿಸಿನಲ್ಲಿ ಉಲ್ಲೇಖಿಸಿದ್ದೀರಿ. 2 ಗಂಟೆಯ ಒಳಗಡೆ ವಿಚಾರಣೆಗೆ ಹಾಜರಾಗಬೇಕೆಂದು ಕಾನೂನಿನ ಯಾವ ನಿಬಂಧನೆ ಅಡಿ ಇದೆ ಎಂದು ಪ್ರಶ್ನೆ ಮಾಡಿದ್ದರು.

ಏನಿದು ಪ್ರಕರಣ?
ಚಿದಂಬರಂ ಅವರು 2007ರಲ್ಲಿ ಕೇಂದ್ರ ಹಣಕಾಸು ಸಚಿವರಾಗಿದ್ದಾಗ ಐಎನ್‍ಎಕ್ಸ್ ಮೀಡಿಯಾ ಸಂಸ್ಥೆಗೆ ವಿದೇಶ ಬಂಡವಾಳ ಹೂಡಿಕೆ ಪ್ರೋತ್ಸಾಹಕಾ ಮಂಡಳಿ (ಎಫ್‍ಐಪಿಬಿ)ಯ ಅನುಮೋದನೆ ಸಿಕ್ಕಿತ್ತು. ಈ ಮೂಲಕ ಐಎನ್‍ಎಕ್ಸ್ ಮೀಡಿಯಾ ಸಂಸ್ಥೆಗೆ 305 ಕೋಟಿ ರೂ. ಮೊತ್ತದಷ್ಟು ವಿದೇಶಿ ಬಂಡವಾಳ ಹೂಡಿಕೆ ಲಭ್ಯವಾಗಿತ್ತು. ಆದರೆ ಪುತ್ರ ಕಾರ್ತಿ ಚಿದಂಬರಂ ಶಿಫಾರಸಿನ ಮೇಲೆ ಈ ಅನುಮೋದನೆಯನ್ನು ಚಿದಂಬರಂ ದೊರಕಿಸಿಕೊಟ್ಟಿದ್ದರು ಎಂಬ ಆರೋಪ ಕೇಳಿ ಬಂದಿತ್ತು.

ಈ ಪ್ರಕರಣ ಬಯಲಿಗೆ ಬರುತ್ತಿದ್ದಂತೆ ಕಂದಾಯ ಸಚಿವಾಲಯ ವಿಚಾರಣೆಗೆ ಆದೇಶಿಸಿತ್ತು. ಈ ಸಂದರ್ಭದಲ್ಲಿ ಪಿ ಚಿದಂಬರಂ ಅವರ ಮಗ ಕಾರ್ತಿ ಚಿದಂಬರಂ ಅವರು ಮಧ್ಯಸ್ಥಿಕೆ ವಹಿಸಿ, ತಂದೆಯ ಪ್ರಭಾವವನ್ನು ಬಳಸಿಕೊಂಡು ವಿಚಾರಣೆಯನ್ನು ತಪ್ಪಿಸಲು ತಮ್ಮ ಕಂಪನಿಯ ಮೂಲಕ 10 ಕೋಟಿ ರೂಪಾಯಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ಸಿಬಿಐ, 2017ರಲ್ಲಿ ಐಎನ್‍ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಚಿದಂಬರಂ ಮತ್ತಿತರರ ವಿರುದ್ಧ ಎಫ್‍ಐಆರ್ ದಾಖಲಿಸಿತ್ತು.

Click to comment

Leave a Reply

Your email address will not be published. Required fields are marked *