ಬೆಂಗಳೂರು: ಮಹಾಮಳೆಗೆ ರಾಜ್ಯ ರಾಜಧಾನಿಯ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಇಂದು ಮಳೆ ಹಾನಿ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಬೆಳಗ್ಗೆ 9.30ಕ್ಕೆ ಗೃಹ ಕಚೇರಿ ಕೃಷ್ಣಾದಿಂದ ಹೊರಡಲಿರುವ ಸಿಎಂ ಬೊಮ್ಮಾಯಿ, ಮಧ್ಯಾಹ್ನದವರೆಗೂ ಇಲ್ಲಿನ ಜೆ.ಸಿ.ನಗರ, ಶಂಕರಮಠ, ಲಗ್ಗೆರೆ, ನಾಗವಾರ, ಎಚ್.ಬಿ.ಆರ್.ಲೇಔಟ್, ಹೆಬ್ಬಾಳ ಮುಂತಾದ ಕಡೆ ಮಳೆ ಹಾನಿ ಪ್ರದೇಶಗಳಿಗೆ ಭೇಟಿ, ಪರಿಶೀಲನೆ ನಡೆಸಲಿದ್ದಾರೆ. ಸಂತ್ರಸ್ತರ ಸಮಸ್ಯೆಗೆ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಿದ್ದಾರೆ. ಇದನ್ನೂ ಓದಿ: ಅಸ್ಸಾಂನಲ್ಲಿ ಭೀಕರ ಪ್ರವಾಹ – 9 ಮಂದಿ ಸಾವು, ಸಂಕಷ್ಟದಲ್ಲಿ ಲಕ್ಷಾಂತರ ಜನ
ಜೊತೆಗೆ ಅಪೂರ್ಣ ಕಾಮಗಾರಿಗಳನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಿದ್ದಾರೆ. ಪ್ರಮುಖ ಸಚಿವರು ಮುಖ್ಯಮಂತ್ರಿಗಳೊಂದಿಗೆ ನಗರ ಪ್ರದಕ್ಷಿಣೆ ಮಾಡಲಿದ್ದಾರೆ. ಮಧ್ಯಾಹ್ನದ ಬಳಿಕ ಸಿಎಂ ಸುದ್ದಿಗೋಷ್ಠಿ ನಡೆಸಿ, ಮಳೆ ಹಾನಿ ಹಾಗೂ ಪರಿಹಾರ ಕ್ರಮಗಳ ಕುರಿತು ಮಾಹಿತಿ ನೀಡಲಿದ್ದಾರೆ.