ಚಿಕ್ಕಬಳ್ಳಾಪುರ: ಉಪಚುನಾವಣೆ ಘೋಷಣೆಯಾದ ಬೆನ್ನಲ್ಲೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷದಿಂದ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಾಯಿತು.
ಚಿಕ್ಕಬಳ್ಳಾಪುರ ನಗರ ಹೊರವಲಯದ ಹಾರೋಬಂಡೆ ಬಳಿಯ ಶ್ರೀ ಸಾಯಿಬಾಬಾ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಮುಖಂಡರು ಚುನಾವಣಾ ಅಖಾಡಕ್ಕೆ ಧುಮುಕಿದ್ದಾರೆ. ಅನರ್ಹ ಶಾಸಕ ಡಾ ಕೆ ಸುಧಾಕರ್ ವಿರುದ್ಧ ಮಾಜಿ ಸಚಿವರಾದ ಶಿವಶಂಕರರೆಡ್ಡಿ ಚುನಾವಣಾ ಪ್ರಚಾರಕ್ಕೆ ಇಳಿದಿದ್ದು ಉಪಚುನಾವಣಾ ಕಣ ಇಂದಿನಿಂದ ರಂಗೇರಿದೆ.
Advertisement
Advertisement
ಸಾಯಿಬಾಬಾ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಕೆ ನಂತರ ಮಾತನಾಡಿದ ಮಾಜಿ ಸಚಿವ ಹಾಗೂ ಹಾಲಿ ಗೌರಿಬಿದನೂರು ಕ್ಷೇತ್ರದ ಕಾಂಗ್ರೆಸ್ ಪಕ್ಷದ ಶಾಸಕ ಶಿವಶಂಕರರೆಡ್ಡಿ, ಪಕ್ಷ ದ್ರೋಹ ಮಾಡಿದ ಅನರ್ಹ ಶಾಸಕ ಸುಧಾಕರ್ ಕಾಂಗ್ರೆಸ್ ಪಕ್ಷಕ್ಕೆ ದೋಖಾ ಮಾಡಿ ಈಗ ಬೇರೆ ಪಕ್ಷಕ್ಕೆ ಹೋಗಿದ್ದಾರೆ. ಈ ಚುನಾವಣೆ ಸುಧಾಕರ್ ಹಾಗೂ ಇತರರ ನಡುವಿನ ಚುನಾವಣೆಯಲ್ಲ. ನ್ಯಾಯ, ಅನ್ಯಾಯ, ಧರ್ಮ, ಅಧರ್ಮದ ನಡುವಿನ ಚುನಾವಣೆ ಇದಾಗಿದ್ದು, ಈ ಚುನಾವಣೆಯಲ್ಲಿ ಸ್ವಾಭಿಮಾನಿ ಮತದಾರರಿಗೆ ಮೋಸ ಮಾಡಿದ ಸುಧಾಕರ್ ಗೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
Advertisement
Advertisement
ಇದೇ ವೇಳೆ ಮಾತನಾಡಿದ ಮಾಜಿ ಸಚಿವ ಹಾಗೂ ಶಿಡ್ಲಘಟ್ಟ ಕ್ಷೇತ್ರದ ಹಾಲಿ ಕಾಂಗ್ರೆಸ್ ಶಾಸಕ ವಿ ಮುನಿಯಪ್ಪ, ಕಾಂಗ್ರೆಸ್ ಪಕ್ಷ ಹಾಗೂ ಅಭ್ಯರ್ಥಿಯನ್ನು ಗೆಲ್ಲಿಸುವುದೇ ನಮ್ಮ ಗುರಿ. ಕಾಂಗ್ರೆಸ್ ಪಕ್ಷ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತಿದ್ದು, ಐದಾರು ಮಂದಿ ಆಕಾಂಕ್ಷಿಗಳಿದ್ದರೂ ಯಾರಿಗೇ ಟಿಕೆಟ್ ಕೊಟ್ಟರೂ ಎಲ್ಲರೂ ಒಮ್ಮತದಿಂದ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.