ಚಿಕ್ಕಬಳ್ಳಾಪುರ: ಜಿಲ್ಲೆಯಾದ್ಯಾಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ಎರಡು ದಿನಗಳ ಕಾಲ ರಜೆ ಘೋಷಿಸಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
Advertisement
ಜಿಲ್ಲೆಯ ಎಲ್ಲಾ ಸರ್ಕಾರಿ, ಖಾಸಗಿ, ಅನುದಾನಿತ ಶಾಲೆಗಳು ಸೇರಿದಂತೆ ಪದವಿ ಪೂರ್ವ ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. ಪದವಿ ಕಾಲೇಜುಗಳಿಗೆ ರಜೆ ಘೋಷಣೆ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ. ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ನವೆಂಬರ್ 19 ಹಾಗೂ 20 ರಂದು ರಜೆ ಘೋಷಣೆ ಮಾಡಿರುವುದಾಗಿ ಜಿಲ್ಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಅಧಿಕೃತವಾಗಿ ಆದೇಶದಲ್ಲಿ ತಿಳಿಸಿದ್ದಾರೆ. ಪದವಿ ಪೂರ್ವ ಕಾಲೇಜುಗಳಿಗೂ ಎರಡು ದಿನಗಳ ಕಾಲ ರಜೆ ನೀಡಲಾಗಿದೆ. ಅಂಗನವಾಡಿಗಳಿಗೂ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅಶ್ವತ್ಥಮ್ಮ ಘೋಷಣೆ ಮಾಡಿದ್ದಾರೆ.
Advertisement
Advertisement
ಕಳೆದ ಎರಡು ದಿನಗಳಿಂದ ಸತತ ಮಳೆಯಾಗುತ್ತಿದ್ದು, ಇಂದು ಸಹ ನಿರಂತರವಾಗಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಪರಿಣಾಮ ಶಾಲೆಗೆ ಆಗಮಿಸಿದ್ದ ಮಕ್ಕಳು ಮನೆಗಳಿಗೆ ಹೋಗುವುದಕ್ಕೂ ಪರದಾಡುವಂತಾಗಿದೆ. ಅದರಲ್ಲೂ ಗ್ರಾಮೀಣ ಭಾಗಗಳಲ್ಲಿ ರಸ್ತೆಗಳ ಮೇಲೆ ನೀರು ಹರಿಯುತ್ತಿದ್ದು, ಸಂಚಾರಕ್ಕೆ ಸಮಸ್ಯೆಯಾಗಿ ಪರಿಣಮಿಸಿದೆ. ಇದರಿಂದ ವಿದ್ಯಾರ್ಥಿಗಳು ಬಹಳ ಕಷ್ಟಪಡುವಂತಾಗಿದೆ. ಇನ್ನೂ ಮೂರ್ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಎರಡು ದಿನ ರಜೆ ಘೋಷಿಸಲಾಗಿದೆ. ಭಾನುವಾರ ರಜಾ ದಿನ, ಸೋಮವಾರ ಕನಕ ಜಯಂತಿ ಅಂಗವಾಗಿ ಸರ್ಕಾರಿ ರಜೆ ಇರಲಿದೆ. ಹೀಗಾಗಿ ಒಟ್ಟು 4 ದಿನಗಳ ಕಾಲ ಮಕ್ಕಳಿಗೆ ರಜೆ ಸಿಗಲಿದೆ.
Advertisement