ಚಿಕ್ಕೋಡಿ: ಆರೋಗ್ಯ ಮಾಹಿತಿ ಕಲೆ ಹಾಕಲು ಹೋಗಿದ್ದ ಆಶಾ ಕಾರ್ಯಕರ್ತೆಯರ ಮೇಲೆ ಮತ್ತೆ ಹಲ್ಲೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಆರೋಗ್ಯ ಮಾಹಿತಿ ಕಲೆ ಹಾಕಲು ಹೋಗಿದ್ದ ಆಶಾ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿದೆ.
ಪಟ್ಟಣದಲ್ಲಿ ನಾಲ್ಕು ಕೊರೊನಾ ಪಾಸಿಟಿವ್ ಪ್ರಕರಣ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮನೆ ಮನೆ ಆರೋಗ್ಯ ಸರ್ವೆ ಕಾರ್ಯಕ್ಕೆ ಮುಂದಾಗಿದೆ. ಇದೇ ಕೆಲಸ ನಿಮಿತ್ತವಾಗಿ ಪಟ್ಟಣದಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿ ವಾರ್ಡ್ ಗಳಿಗೆ ತೆರಳಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಆದರೆ ವಾರ್ಡ್ ನಂಬರ್ 3 ಹಾಗೂ 6ರಲ್ಲಿ ಮಾಹಿತಿ ಕಲೆ ಹಾಕಲು ಹೋದಾಗ ಕಿಡಿಗೇಡಿಗಳು ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ.
Advertisement
Advertisement
ಹಲ್ಲೆ ನಡೆಯುತ್ತಿದ್ದಂತೆ ಆಶಾ ಕಾರ್ಯಕರ್ತೆಯರು ಕುಡಚಿ ಪೊಲೀಸ್ ಠಾಣೆ ಮುಂದೆ ಜಮಾವಣೆಗೊಂಡು ತಮಗೆ ರಕ್ಷಣೆ ನೀಡುವಂತೆ ಕೇಳಿಕೊಂಡಿದ್ದಾರೆ. ಸ್ಥಳಕ್ಕೆ ರಾಯಬಾಗ ತಹಶೀಲ್ದಾರ್ ಹಾಗೂ ಡಿವೈಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇತ್ತೀಚೆಗಷ್ಟೇ ಬೆಂಗಳೂರಿನ ಸಾಧಿಕ್ ನಗರದಲ್ಲಿ ಮಾಹಿತಿ ಕಲೆಹಾಕಲು ಹೋದ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಮಾಡಲಾಗಿತ್ತು.
Advertisement
Advertisement
ಈ ಬಗ್ಗೆ ಚಿಕ್ಕೋಡಿಯಲ್ಲಿ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್, ಆಶಾ ಕಾರ್ಯಕರ್ತೆಯರಿಗೆ ಸಹಕಾರ ಕೊಡುವ ಕೆಲಸ ಪ್ರತಿಯೊಬ್ಬ ನಾಗರಿಕರು ಮಾಡಬೇಕು. ಕುಡಚಿ ಪಟ್ಟಣದಲ್ಲಿ ಮಾಹಿತಿ ಕೇಳಿದ್ದಕ್ಕೆ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆದಿರುವುದು ಗಮನಕ್ಕೆ ಬಂದಿದೆ. ಆರೋಗ್ಯ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಸರ್ಕಾರದ ನಿರ್ದೇಶನ ಮೇರೆಗೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರಿಗೆ ತೊಂದರೆ ಕೊಟ್ಟರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ ಎಂದರು.