Connect with us

Belgaum

ರಾಜು ಕಾಗೆ ಕಾಂಗ್ರೆಸ್ ಸೇರ್ಪಡೆ – ಚಿಕ್ಕೋಡಿಯಲ್ಲಿ ಕೈ ಅಸಮಾಧಾನ ಸ್ಫೋಟ

Published

on

ಚಿಕ್ಕೋಡಿ: ಬಿಜೆಪಿ ನಾಯಕ ರಾಜು ಕಾಗೆ ಕಾಂಗ್ರೆಸ್ ಸೇರ್ಪಡೆ ವಿಚಾರ ತಿಳಿಯುತ್ತಿದ್ದಂತೆ ಚಿಕ್ಕೋಡಿಯ ಕಾಂಗ್ರೆಸ್‍ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.

ಇಂದು ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದ ರಾಜು ಕಾಗೆ, ನನಗೆ ಬಿಜೆಪಿಯಲ್ಲಿ ಸಾಕಷ್ಟು ಅವಮಾನಗಳಾಗಿವೆ. ನನಗೆ ಹೇಳದೆ ನನ್ನ ಕ್ಷೇತ್ರದಲ್ಲಿ ಅನರ್ಹ ಶಾಸಕರಿಗೆ ಟಿಕೆಟ್ ನೀಡುತ್ತಿರುವುದು ನೋವಾಗಿದೆ. ಆದ್ದರಿಂದ ನಾನು ಬುಧವಾರ ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದೇನೆ ಮತ್ತು 18 ರಂದು ಕಾಗವಾಡ ಕ್ಷೇತ್ರದಿಂದ ಕೈ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ ಎಂದು ಹೇಳಿದ್ದರು.

ರಾಜು ಕಾಗೆ ಕಾಂಗ್ರೆಸ್ ಸೇರ್ಪಡೆಯಾಗುವ ಮುಹೂರ್ತ ಫಿಕ್ಸ್ ಆದ ಬೆನ್ನಲ್ಲೇ ಚಿಕ್ಕೋಡಿ ಕಾಂಗ್ರೆಸ್ಸಿನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಕಾಗವಾಡ ಮತಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಪ್ರಕಾಶ ಹುಕ್ಕೇರಿ ಟಿಕೆಟ್ ಕೈ ತಪ್ಪಿತು ಎನ್ನುವ ಅಸಮಾಧಾನದಿಂದ ಅವರು ಹಾಗೂ ಅವರ ಪುತ್ರ ಶಾಸಕ ಗಣೇಶ ಹುಕ್ಕೇರಿ ಇಂದು ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿರಲಿಲ್ಲ.

ರಾಜು ಕಾಗೆ ಕಾಂಗ್ರೆಸ್ ಸೇರ್ಪಡೆ ವಿಚಾರ ನನಗೆ ಗೊತ್ತೇ ಇಲ್ಲ ಎಂದು ಚಿಕ್ಕೋಡಿ ಕಾಂಗ್ರೆಸ್ ಅಧ್ಯಕ್ಷರು ಹೇಳಿದರೆ ಮಾಜಿ ಸಚಿವ ವೀರಕುಮಾರ ಪಾಟೀಲ್ ಉಪಚುನಾವಣೆಯಲ್ಲಿ ಮೂಲ ಕಾಂಗ್ರೆಸ್ಸಿಗರಿಗೆ ಟಿಕೆಟ್ ನೀಡುವುದು ಒಳ್ಳೆಯದು ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರದ ಆರ್ಥಿಕ ಹಾಗೂ ಜನ ವಿರೋಧಿ ನೀತಿಗಳನ್ನು ಖಂಡಿಸಿ ಚಿಕ್ಕೋಡಿ ಪಟ್ಟಣದಲ್ಲಿ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಘಟಕದ ವತಿಯಿಂದ ಪ್ರತಿಭಟನೆ ಮಾಡಲಾಯಿತು. ಸರ್ಕಾರಿ ಪ್ರವಾಸಿ ಮಂದಿರದಲ್ಲಿ ರಾಜಕೀಯ ಸಭೆ ನಿಷೇಧವಿದ್ದರೂ ಚಿಕ್ಕೋಡಿ ಪ್ರವಾಸಿ ಮಂದಿರದಲ್ಲೇ ಕೈ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಬಳಿಕ ತಹಶೀಲ್ದಾರ್ ಕಚೇರಿಗೆ ತೆರಳಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

Click to comment

Leave a Reply

Your email address will not be published. Required fields are marked *