ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ (Western Ghats) ಪ್ರದೇಶದಲ್ಲಿ ಹಾಗೂ ಗಡಿ ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಬೆಳಗಾವಿ(Belagavi) ಜಿಲ್ಲೆಯ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕುಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ.
ಮಳೆಯ (Heavy Rain) ಆರ್ಭಟಕ್ಕೆ ದೂದಗಂಗಾ(Doodhganga) ಮತ್ತು ವೇದಗಂಗಾ ನದಿಗಳು(Vedganga River) ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ತೀರದ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ನದಿಗಳಲ್ಲಿ ನೀರಿನ ಮಟ್ಟ ದಿಢೀರ್ ಏರಿಕೆಯಾದ ಹಿನ್ನೆಲೆಯಲ್ಲಿ ನಿಪ್ಪಾಣಿ ತಾಲೂಕಿನ ಪ್ರಮುಖ ನಾಲ್ಕು ಕೆಳ ಹಂತದ ಸಂಪರ್ಕ ಸೇತುವೆಗಳು ಸಂಪೂರ್ಣವಾಗಿ ನೀರಿನಲ್ಲಿ ಮುಳುಗಡೆಯಾಗಿವೆ.
ದೂದಗಂಗಾ ನದಿ ಉಕ್ಕಿ ಹರಿಯುತ್ತಿರುವುದರಿಂದ ಕಾರದಗಾ-ಬೋಜ್ ಗ್ರಾಮಗಳನ್ನು ಸಂಪರ್ಕಿಸುವ ಪ್ರಮುಖ ಸೇತುವೆ ಜಲಾವೃತಗೊಂಡಿದೆ. ವೇದಗಂಗಾ ನದಿ ಅಪಾಯದ ಮಟ್ಟದಲ್ಲಿ ಹರಿಯತ್ತಿದ್ದು ಬಾರವಾಡ-ಕನ್ನೂರ ಹಾಗೂ ಬೋಜವಾಡಿ-ಗಜವರವಾಡಿ ಗ್ರಾಮಗಳ ನಡುವಿನ ಸಂಪರ್ಕ ಸೇತುವೆಗಳು ಮುಳುಗಡೆಯಾಗಿವೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಧಾರಾಕಾರ ಮಳೆ: ಉರುಳಿ ಬಿದ್ದ ಬೃಹತ್ ಹುಣಸೆ ಮರ, 4 ಮನೆಗಳಿಗೆ ಹಾನಿ

ಮಹಾರಾಷ್ಟ್ರದ ವ್ಯಾಪ್ತಿಯಲ್ಲಿ ಬರುವ ರಾಜಾಪುರ-ಜುಗಳ ಸೇತುವೆಯೂ ಕೂಡ ನೀರಿನಲ್ಲಿ ಜಲಾವೃತಗೊಂಡಿದೆ. ಸೇತುವೆಗಳು ಮುಳುಗಡೆಯಾಗಿರುವುದರಿಂದ ಈ ಭಾಗದ ಗ್ರಾಮಗಳ ನಡುವಿನ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸಾರ್ವಜನಿಕರು ಪರ್ಯಾಯ ಮಾರ್ಗಗಳನ್ನು ಬಳಸುವಂತಾಗಿದೆ. ಇದನ್ನೂ ಓದಿ: ಆರು ತಿಂಗಳ ಬಳಿಕ ಕೆಆರ್‌ಎಸ್ ಡ್ಯಾಂಗೆ 1,000 ಕ್ಯೂಸೆಕ್ ನೀರು ಒಳಹರಿವು
ಉಪನದಿಗಳಾದ ವೇದಗಂಗಾ ಮತ್ತು ದೂದಗಂಗಾ ನದಿಗಳ ಆರ್ಭಟದ ಜೊತೆಗೆ ಇತ್ತ ಪ್ರಮುಖ ಕೃಷ್ಣಾ ನದಿಯ ನೀರಿನ ಮಟ್ಟದಲ್ಲೂ ಭಾರಿ ಏರಿಕೆ ಕಂಡುಬಂದಿದೆ. ನದಿಗಳು ಉಕ್ಕಿ ಹರಿಯುತ್ತಿರುವುದರಿಂದ ಸಾರ್ವಜನಿಕರು ಹಾಗೂ ಪ್ರವಾಸಿಗರು ಯಾರೂ ಕೂಡ ಯಾವುದೇ ಕಾರಣಕ್ಕೂ ನದಿಗೆ ಇಳಿಯಬಾರದು ಎಂದು ತಾಲೂಕು ಆಡಳಿತ ಮತ್ತು ಪೊಲೀಸರು ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಸಂದೇಶ ನೀಡಿದ್ದಾರೆ.
