Connect with us

Districts

ಬಾಲ್ಯ ವಿವಾಹ ತಡೆಯುವಂತೆ ಜಿಲ್ಲಾಧಿಕಾರಿ ಸೂಚನೆ

Published

on

Share this

ತುಮಕೂರು: ಜಿಲ್ಲೆಯಲ್ಲಿ ಬಾಲ್ಯವಿವಾಹಗಳು ನಡೆಯದಂತೆ ತಡೆಯಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ, ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ಸಂರಕ್ಷಣಾ ಅಧಿನಿಯಮ 2005ರಡಿಯ ಮತ್ತು ಸಖಿ ಯೋಜನೆಯ ಅನುಷ್ಠಾನ ಕುರಿತ ಜಿಲ್ಲಾ ಸಮನ್ವಯ ಸಮಿತಿ ಹಾಗೂ ವರದಕ್ಷಿಣೆ ನಿಷೇಧ ಕಾಯ್ದೆಯ ಸಮರ್ಪಕ ಅನುಷ್ಠಾನ, ಸ್ಥೈರ್ಯನಿಧಿ ಯೋಜನೆಯ ಸಮರ್ಪಕ ಅನುಷ್ಠಾನ ಕುರಿತು ಜಿಲ್ಲಾ ಸಮಿತಿ ಮತ್ತು ಜಿಲ್ಲಾ ಮಟ್ಟದ ವಿಧವಾ ಕೋಶ ಮತ್ತು ಶೆಲ್ಟರ್ ಹೋಮ್ಸ್ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮ ಮಟ್ಟದ ಅಧಿಕಾರಿಗಳು ಸೇರಿದಂತೆ ಬೀಟ್ ಪೊಲೀಸರು ಬಾಲ್ಯ ವಿವಾಹ ತಡೆಯವ ಕಾರ್ಯಕ್ಕೆ ಮೊದಲಾದ್ಯತೆ ನೀಡಬೇಕು ಎಂದು ನಿರ್ದೇಶಿಸಿದರು.

ಸಾಮಾಜಿಕ ಪಿಡುಗಾಗಿ ಕಾಡುತ್ತಿರುವ ಹಾಗೂ ಸಮಾಜದಲ್ಲಿ ಅನಿಷ್ಟ ಪದ್ಧತಿಗಳಲ್ಲಿ ಒಂದಾದ ಬಾಲ್ಯವಿವಾಹಗಳನ್ನು ತಡೆಯಲು ಸರ್ಕಾರವು ಎಲ್ಲಾ ಇಲಾಖೆಗಳ ಗ್ರಾಮ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳನ್ನು ಬಾಲ್ಯವಿವಾಹ ನಿಷೇಧ ತಡೆ ಅಧಿಕಾರಿಗಳನ್ನಾಗಿ ನೇಮಕ ಮಾಡಿದೆ. ಹಾಗಾಗಿ ಬಾಲ್ಯವಿವಾಹ ತಡೆಯುವುದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜವಾಬ್ದಾರಿ ಮಾತ್ರವಲ್ಲ. ಎಲ್ಲಾ ಇಲಾಖೆಗಳ ಅಧಿಕಾರಿಗಳು ಇದರ ಜವಾಬ್ದಾರಿ ಹೊತ್ತು ಬಾಲ್ಯವಿವಾಹಕ್ಕೆ ಕಡಿವಾಣ ಹಾಕಬೇಕು. ವಿಶೇಷವಾಗಿ ಶಾಲೆಗಳ ಶಾಲಾ ಮುಖ್ಯೋಪಾಧ್ಯಾಯರು, ಪಿಡಿಒ, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳೀಯ ಪೆÇಲೀಸ್ ಸಬ್ ಇನ್ಸ್ ಪೆಕ್ಟರ್ ಗಳು ಬಾಲ್ಯವಿವಾಹ ತಡೆಗೆ ಶ್ರಮಿಸಬೇಕು. ಬಾಲ್ಯ ವಿವಾಹ ನಡೆದಲ್ಲಿ ಅಲ್ಲಿನ ವ್ಯಾಪ್ತಿಗೆ ಸಂಬಂಧಿಸಿದ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಯೊಂದು ಗ್ರಾಮಗಳಲ್ಲಿ ಬಾಲ್ಯವಿವಾಹ ನಡೆಸದಂತೆ ಅರಿವು ಮೂಡಿಸಿ, ತಾಲೂಕು ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪಿಡಿಒ, ಗ್ರಾಮ ಲೆಕ್ಕಾಧಿಕಾರಿ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಶ್ರಮಿಸಬೇಕೆಂದು ಸೂಚಿಸಿದರು.

ಬಾಲ್ಯ ವಿವಾಹ ಮಾಡುವುದರಿಂದ ಹೆಣ್ಣು ಮಗುವಿನ ಆರೋಗ್ಯ ಹಾಗೂ ಮಾನಸಿಕ ಸ್ಥಿತಿಯ ಮೇಲೆ ತೀವ್ರವಾದ ಪರಿಣಾಮ ಉಂಟಾಗುತ್ತದೆ. ಇದನ್ನು ತಪ್ಪಿಸಬೇಕಾದರೆ ಬಾಲ್ಯ ವಿವಾಹ ನಡೆಯುವ ಮುನ್ನವೇ ಕ್ರಮ ಕೈಗೊಂಡು ಅದನ್ನು ತಡೆಯುವುದು ಅತ್ಯವಶ್ಯಕ. ಬಾಲ್ಯವಿವಾಹವನ್ನು ಪೋತ್ಸಾಹಿಸುವ ಅಥವಾ ಒತ್ತಾಯಪೂರ್ವಕವಾಗಿ ಮದುವೆ ನಡೆಸುವ ಪೋಷಕರ ಮೇಲೆ ಹಾಗೂ ಒಂದು ವೇಳೆ ಹುಡುಗ ಪ್ರಾಪ್ತ ವಯಸ್ಸಿನವನಾಗಿದ್ದರೆ ಅವನ ಮೇಲೂ ಸಹ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಬಾಲ್ಯ ವಿವಾಹ ತಡೆ, ಕೌಟುಂಬಿಕ ದೌರ್ಜನ್ಯ, ವರದಕ್ಷಿಣೆ ನಿಷೇಧ ಹಾಗೂ ಮಹಿಳಾ ಅಭಿವೃದ್ಧಿ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಜೊತೆಗೆ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗಿ ಕಂಡು ಬರುವ ಸಮುದಾಯಗಳಿಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದು ತಿಳಿಸಿದರು. ಬಾಲ್ಯ ವಿವಾಹ ನಿಷೇಧ, ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ ಸೇರಿದಂತೆ ಇತರೆ ಕಾಯ್ದೆಯಡಿ ದಾಖಲಾಗಿ ಬಾಕಿ ಉಳಿದಿರುವ ಪ್ರಕರಣಗಳನ್ನು ಸಕಾಲಕ್ಕೆ ಇತ್ಯರ್ಥಗೊಳಿಸಬೇಕು ಎಂದು ಸೂಚಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಎಸ್.ನಟರಾಜು ಮಾತನಾಡಿ, 2021-22ನೇ ಸಾಲಿನ ಜೂನ್ ಅಂತ್ಯಕ್ಕೆ ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ 31 ಬಾಲ್ಯ ವಿವಾಹ ಪ್ರಕರಣ ದಾಖಲಾಗಿದ್ದು, ಅವುಗಳಲ್ಲಿ 28 ಬಾಲ್ಯವಿವಾಹಗಳನ್ನು ತಡೆಹಿಡಿಯಲಾಗಿದೆ. ಮೂರು ಬಾಲ್ಯವಿವಾಹ ನಡೆದಿದ್ದು, ಈ ಬಗ್ಗೆ ಎಫ್ ಐಆರ್ ದಾಖಲಾಗಿದೆ ಎಂದರು.

ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆಯಡಿ 20 ಪ್ರಕರಣಗಳು ದಾಖಲಾಗಿದ್ದು, ಎರಡು ಪ್ರಕರಣಗಳು ಇತ್ಯರ್ಥಗೊಂಡಿವೆ. ಉಳಿದಂತೆ ಸಂರಕ್ಷಣಾಧಿಕಾರಿಗಳ ಹಂತದಲ್ಲಿ 16, ನ್ಯಾಯಾಲಯದ ಹಂತದಲ್ಲಿ 2 ಪ್ರಕರಣಗಳಿವೆ. ಸಾಂತ್ವಾನ ಯೋಜನೆಯಡಿ ಕೌಟುಂಬಿಕ ಕಲಹದಲ್ಲಿ 142 ಪ್ರಕರಣಗಳು ದಾಖಲಾಗಿದ್ದು, 82 ಪ್ರಕರಣಗಳು ಇತ್ಯರ್ಥಗೊಂಡು 60 ಪ್ರಕರಣಗಳು ಬಾಕಿ ಇವೆ. ವರದಕ್ಷಿಣೆ ನಿಷೇಧ ಕಾಯ್ದೆಯಡಿ 23 ಪ್ರಕರಣಗಳು ದಾಖಲಾಗಿದ್ದು, 7 ಪ್ರಕರಣಗಳು ವಿಲೇವಾರಿಯಾಗಿದೆ ಹಾಗೂ 16 ಬಾಕಿ ಉಳಿದಿವೆ ಎಂದು ತಿಳಿಸಿದರು.

ಸಭೆಯಲ್ಲಿ ಸ್ವಯಂ ಸಂಸ್ಥೆಗಳ ಮುಖ್ಯಸ್ಥರು, ಪ್ರತಿನಿಧಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು. ಇದನ್ನೂ ಓದಿ:ಭಟ್ಕಳದಲ್ಲಿ ಚೌಥನಿ ನದಿ ಭರ್ತಿ – ಹಲವು ಮನೆಗಳು ಜಲಾವೃತ

Click to comment

Leave a Reply

Your email address will not be published. Required fields are marked *

Advertisement