ಪ್ರಚಾರಕ್ಕೆ ಮಕ್ಕಳನ್ನು ಬಳಸುವಂತಿಲ್ಲ – ಚುನಾವಣಾ ಆಯೋಗಕ್ಕೆ ಮಕ್ಕಳ ಆಯೋಗದಿಂದ ಪತ್ರ

Public TV
1 Min Read
Election Commission

ಬೆಂಗಳೂರು: ಬೇಸಿಗೆ ರಜೆ ಎಂದು ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನು ಬಳಸುವಂತಿಲ್ಲ, ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ ಎಂದು ಚುನಾವಣಾ ಆಯೋಗಕ್ಕೆ ಮಕ್ಕಳ ಆಯೋಗ ಪತ್ರ ಬರೆದಿದೆ.

ಚುನಾವಣಾ ಸಂದರ್ಭದಲ್ಲಿ ಮಕ್ಕಳನ್ನು ಪ್ರಚಾರಕ್ಕೆ ಬಳಸಿಕೊಳ್ಳುವ ಸಾಧ್ಯತೆ ಇದೆ. ಅಲ್ಲದೆ ಈಗ ಮಕ್ಕಳಿಗೆ ಬೇಸಿಗೆ ರಜೆಯೂ ಇದೆ. ಆದರಿಂದ ಮಕ್ಕಳನ್ನು ಪ್ರಚಾರಕ್ಕೆ ಬಳಸುತ್ತಿರೋದು ಕಂಡುಬಂದರೆ ದೂರು ದಾಖಲಿಸಿಕೊಳ್ಳಲಾಗುತ್ತದೆ. ಈ ರೀತಿ ಮಕ್ಕಳ ಬಳಕೆ ಕಂಡು ಬಂದರೆ ಮಕ್ಕಳ ಆಯೋಗದ ಗಮನಕ್ಕೆ ತಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಎಲ್ಲ ಪಕ್ಷದವರು ಚುನಾವಣಾ ಪ್ರಚಾರಕ್ಕೆ ಮಕ್ಕಳ ಬಳಕೆ ಮಾಡುತ್ತಿರುವ ಹಿನ್ನಲೆ ಆಯೋಗಕ್ಕೆ ಪತ್ರ ಬರೆಯಲಾಗಿದೆ.

makkala ayogha copy

ಪತ್ರದಲ್ಲಿ ಏನಿದೆ?
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಗಳ ಕಾಯ್ದೆ 2005ರ ಸೆಕ್ಷನ್ 13ರ ಅನ್ವಯ ದೂರುಗಳನ್ನು ವಿಚಾರಣೆಗೊಳಪಡಿಸುವ ಮತ್ತು ಸೆಕ್ಷನ್ 14ರ ಅಡಿಯಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿವಿಲ್ ನ್ಯಾಯಾಲಯದಂತೆ ಕಾರ್ಯನಿರ್ವಹಿಸುವ ಅಧಿಕಾರವನ್ನು ಹೊಂದಿರುತ್ತದೆ. ಮಕ್ಕಳ ಹಕ್ಕುಗಳ ಉಲ್ಲಂಘನೆಯಾದ ಪ್ರಕರಣಗಳನ್ನು ಆಯೋಗವು ಸ್ವ-ಪ್ರೇರಣೆಯಿಂದ (ಸುಮೊಟೋ) ದೂರು ದಾಖಲಿಸಿ ಕ್ರಮಗಳನ್ನು ಕೈಗೊಳ್ಳುವ ಅಧಿಕಾರವನ್ನು ಹೊಂದಿರುತ್ತದೆ.

ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಕ್ಕಳಿಗೆ ಬೇಸಿಗೆಯ ನಿಮಿತ್ತ ಶಾಲೆಗಳಿಗೆ ರಜೆ ಘೋಷಿಸಿರುವುದರಿಂದ ಈ ಮಕ್ಕಳನ್ನು ವಿವಿಧ ಪಕ್ಷಗಳು ತಮ್ಮ ಚುನಾವಣಾ ಪ್ರಚಾರಕ್ಕಾಗಿ ಬಳಸಿಕೊಳ್ಳುವ ಸಾಧ್ಯತೆ ಇರುತ್ತದೆ. ಮಕ್ಕಳನ್ನು ಈ ರೀತಿಯ ಚುನಾವಣಾ ಪ್ರಚಾರದಲ್ಲಿ ದುಡಿಸಿಕೊಳ್ಳುವುದು ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿದಂತಾಗುತ್ತದೆ.

ಈ ಬಗ್ಗೆ ತಾವುಗಳು ವೈಯಕ್ತಿಕ ಗಮನ ಹರಿಸಿ, ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ/ ಚುನಾವಣಾ ಅಧಿಕಾರಿಗಳಿಗೆ ಯಾವುದೇ ರೀತಿಯಲ್ಲಿ ಮಕ್ಕಳಿಂದ ದುಡಿಮೆಯನ್ನು ಮಾಡಿಸುವಂತಿಲ್ಲ ಹಾಗೂ ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ಮಕ್ಕಳ ಹಿತದೃಷ್ಟಿಯಿಂದ ಸೂಕ್ತ ನಿರ್ದೇಶನ ನೀಡುವಂತೆ ಈ ಮೂಲಕ ತಮ್ಮನ್ನು ಕೋರುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *