Thursday, 12th December 2019

ಸಿದ್ದರಾಮಯ್ಯ, ಸ್ಪೀಕರ್ ಷಡ್ಯಂತ್ರಕ್ಕೆ ಸುಪ್ರೀಂ ತಕ್ಕ ತೀರ್ಪು ಕೊಟ್ಟಿದೆ: ಸಿಎಂ ಬಿಎಸ್‍ವೈ

ಬೆಂಗಳೂರು: ಸ್ಪೀಕರ್ ರಮೇಶ್ ಕುಮಾರ್ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಜೊತೆ ಸೇರಿ ಷಡ್ಯಂತ್ರ ಮಾಡಿದ್ದರು. ಅದಕ್ಕೆ ಸುಪ್ರೀಂ ತಕ್ಕ ತೀರ್ಪು ಕೊಟ್ಟಿದೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಪ್ರತಿಕ್ರಿಯಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಬಿಎಸ್‍ವೈ, ಸುಪ್ರೀಂ ಕೋರ್ಟ್‍ನ ಆದೇಶಕ್ಕಾಗಿ ಇಡೀ ದೇಶ ಕಾತುರದಿಂದ ಕಾಯುತ್ತಿತ್ತು. ನಮ್ಮ ಹಿಂದಿನ ಸ್ಪೀಕರ್ ರಮೇಶ್ ಕುಮಾರ್, ಸಿದ್ದರಾಮಯ್ಯ ಜೊತೆ ಸೇರಿಕೊಂಡು ಷಡ್ಯಂತ್ರ ಮಾಡಿದ್ದರು. ಅದಕ್ಕೆ ಸುಪ್ರೀಂ ಕೋರ್ಟ್ ತಕ್ಕ ತೀರ್ಪು ಕೊಟ್ಟಿದೆ. 17 ಶಾಸಕರು ಸ್ಪರ್ಧೆ ಮಾಡುವುದಕ್ಕೆ ಯಾವುದೇ ಅಡ್ಡಿಯಿಲ್ಲ ಎಂಬ ತೀರ್ಪನ್ನು ನಾನು ಸ್ವಾಗತಿಸುತ್ತೇನೆ. 17ಕ್ಕೆ 17 ಸೀಟ್ ಗೆಲ್ಲಲು ಪ್ರಯತ್ನಿಸುತ್ತೇವೆ. ನಾಳೆಯಿಂದ ನಮ್ಮ ಮುಖಂಡರುಗಳು ಹಾಗೂ ಸಚಿವರು 17 ಕ್ಷೇತ್ರ ಗೆಲ್ಲುವುದಕ್ಕೆ ಎಲ್ಲಾ ರೀತಿಯ ಪ್ರಯತ್ನ ಮಾಡುತ್ತೇವೆ ಎಂದರು.

ಇಂದು ಸಂಜೆ ಕೋರ್ ಕಮಿಟಿ ಸಭೆ ಇದೆ. ಟಿಕೆಟ್ ಯಾರಿಗೆ ನೀಡಬೇಕು ಎಂಬುದನ್ನು ಚರ್ಚೆ ಮಾಡುತ್ತೇವೆ. ಟಿಕೆಟ್ ನೀಡುವುದರ ಬಗ್ಗೆ ರಾಷ್ಟ್ರೀಯ ನಾಯಕರ ಜೊತೆಗೂ ಚರ್ಚೆ ನಡೆಸಿ ತೀರ್ಮಾನಿಸುತ್ತೇವೆ. ಇಂದು ಸಂಜೆ ಅನರ್ಹ ಶಾಸಕರು ವಾಪಸ್ ಬೆಂಗಳೂರಿಗೆ ಬರುತ್ತಾರೆ. ಅವರ ಜೊತೆಗೂ ನಾವು ಸಮಾಲೋಚನೆ ಮಾಡುತ್ತೇವೆ ಎಂದು ಸಿಎಂ ಹೇಳಿದರು.

ಸುಪ್ರೀಂ ಕೋರ್ಟಿನಿಂದ ಇಂದು ತೀರ್ಪು ಹೊರಬಿದ್ದಿದ್ದು, 17 ಮಂದಿ ಅನರ್ಹ ಶಾಸಕರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಸ್ಪೀಕರ್ ರಮೇಶ್ ಕುಮಾರ್ ಅನರ್ಹ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಚಿ ವಿಚಾರಣೆ ನಡೆಸಿದ್ದ ನ್ಯಾ. ಎನ್.ವಿ. ರಮಣ, ನ್ಯಾ. ಸಂಜೀವ್ ಖನ್ನಾ, ನ್ಯಾ. ಕೃಷ್ಣ ಮುರಾರಿ ನೇತೃತ್ವದ ಪೀಠ ಇಂದು ಮಹತ್ವದ ಆದೇಶ ಪ್ರಕಟಿಸಿದ್ದು, ಅನರ್ಹರು ಉಪಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂದು ತೀರ್ಪಿತ್ತಿದೆ.

17 ಮಂದಿ ಶಾಸಕರನ್ನು ಅನರ್ಹ ಮಾಡಿದ ಸ್ಪೀಕರ್ ನಿರ್ಧಾರ ಸರಿ. ಆದರೆ ವಿಧಾನಸಭೆ ಮುಗಿಯುವವರೆಗೆ ಅನರ್ಹ ಮಾಡಿದ ಸ್ಪೀಕರ್ ನಿರ್ಧಾರ ಸರಿಯಲ್ಲ. ಹೀಗಾಗಿ ಅನರ್ಹ ಶಾಸಕರು ಚುನಾವಣೆಗೆ ಸ್ಪರ್ಧಿಸಬಹುದು ಎಂದು ತೀರ್ಪು ನೀಡಿದೆ.

ಅಥಣಿ, ಕಾಗವಾಡ, ಗೋಕಾಕ್, ಯಲ್ಲಾಪುರ, ಹಿರೇಕೆರೂರು, ರಾಣಿಬೆನ್ನೂರು, ವಿಜಯನಗರ, ಚಿಕ್ಕಬಳ್ಳಾಪುರ, ಕೆಆರ್ ಪುರ, ಯಶವಂತಪುರ, ಮಹಾಲಕ್ಷ್ಮೀ ಲೇಔಟ್, ಶಿವಾಜಿನಗರ, ಹೊಸಕೋಟೆ, ಕೆಆರ್ ಪೇಟೆ, ಹುಣಸೂರು ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ತೆರವಾದ ಕ್ಷೇತ್ರಗಳಿಗೆ 6 ತಿಂಗಳ ಒಳಗಡೆ ಚುನಾವಣೆ ನಡೆಸಬೇಕಾಗುತ್ತದೆ.

Leave a Reply

Your email address will not be published. Required fields are marked *