ಬೆಂಗಳೂರು: ಉರ್ದು ಅಕಾಡೆಮಿಯ (Urdu Academy) ಚಟುವಟಿಕೆಗಳಿಗೆ ಹೆಚ್ಚಿನ ಅನುದಾನ ಒದಗಿಸುವ ಜತೆಗೆ, ಅಲ್ಪಸಂಖ್ಯಾತ ಧರ್ಮಗಳ (Minority Religious Communities) ಸಮಸ್ಯೆಗಳನ್ನು ಆಲಿಸಿ ಪರಿಹರಿಸಲು ಮುಂದಿನ ವಾರ ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ಸಿಎಂ ಡಿ.ಕೆ ಶಿವಕುಮಾರ್ (D.K. Shivakumar) ಅವರು ಹೇಳಿದರು.
ಕರ್ನಾಟಕ ಉರ್ದು ಅಕಾಡೆಮಿಯಿಂದ ಬೆಂಗಳೂರಿನ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ಸೋಮವಾರ ಆಯೋಜಿಸಿದ್ದ ವಾರ್ಷಿಕ ಪ್ರಶಸ್ತಿ ಪ್ರದಾನ, ಪುಸ್ತಕ ಬಿಡುಗಡೆ ಹಾಗೂ ‘ಜಷ್ನ್-ಎ-ಉರ್ದು’ ಕಾರ್ಯಕ್ರಮ ಉದ್ಘಾಟಿಸಿ, ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ಈ ವೇಳೆ, ಕ್ರೈಸ್ತ, ಮುಸ್ಲಿಂ, ಜೈನ, ಬೌದ್ದ ಸೇರಿದಂತೆ ವಿವಿಧ ಅಲ್ಪಸಂಖ್ಯಾತ ಸಮುದಾಯಗಳ ನಾಯಕರು ಹಾಗೂ ಶಾಸಕರೊಂದಿಗೆ ಸಮಾಲೋಚನೆ ನಡೆಸಲಾಗುವುದು. ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಶಾಸಕರ ಅಭಿಪ್ರಾಯ ಹಾಗೂ ಸಮಸ್ಯೆಗಳನ್ನೂ ಆಲಿಸಲಾಗುವುದು ಎಂದರು. ಇದನ್ನೂ ಓದಿ: ರಾಜ್ಯ ಮಟ್ಟದ 161ನೇ ಏಕಗವಾಕ್ಷಿ ಅನುಮೋದನಾ ಸಮಿತಿಯಿಂದ 147 ಯೋಜನೆಗಳಿಗೆ ಒಪ್ಪಿಗೆ
ಚುನಾವಣಾ ಸಂದರ್ಭದಲ್ಲಿ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳು, ವಿವಿಧ ಸಂದರ್ಭಗಳಲ್ಲಿ ಸಮುದಾಯಗಳಿಗೆ ಕೊಟ್ಟಿರುವ ಮಾತುಗಳನ್ನು ಈಡೇರಿಸುವುದು ನಮ್ಮ ಜವಾಬ್ದಾರಿ. ಯಾರ ಮನಸ್ಸಿಗೂ ನೋವಾಗದಂತೆ, ಎಲ್ಲರ ಭಾವನೆಗಳಿಗೆ ಗೌರವ ನೀಡಿ ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶದಿಂದ ಸಭೆಗಳನ್ನು ನಡೆಸಲಾಗುತ್ತಿದೆ. ಸಂವಿಧಾನದ ಅಡಿಯಲ್ಲಿ ಸಿಗಬೇಕಾದ ಗೌರವ ಮತ್ತು ಹಕ್ಕುಗಳನ್ನು ಕಾಪಾಡುತ್ತೇವೆ.
ಉರ್ದು ಅಕಾಡೆಮಿಗೆ ಹೆಚ್ಚಿನ ಅನುದಾನ ನೀಡುವ ಸಂಬಂಧ ಸಚಿವರೊಂದಿಗೆ ಚರ್ಚಿಸಲಾಗಿದೆ. ಅಕಾಡೆಮಿಗೆ ಏನೇನು ಅಗತ್ಯವಿದೆಯೋ ಅವುಗಳನ್ನು ಪರಿಶೀಲಿಸಿ ನೆರವು ನೀಡುವ ಕೆಲಸ ಮಾಡಲಾಗುವುದು. ಉರ್ದು ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಸರ್ಕಾರ ಬೆಂಬಲವಾಗಿ ನಿಲ್ಲಲಿದೆ ಎಂದು ತಿಳಿಸಿದರು.
ಅಲ್ಪಸಂಖ್ಯಾತ ಧರ್ಮಗಳ ಧ್ವನಿಯಾಗಿ ಸರ್ಕಾರವಿದೆ
ಕೆಲವರಿಗೆ ಅಲ್ಪಸಂಖ್ಯಾತ ಸಮುದಾಯಗಳ ಬಗ್ಗೆ ನಂಬಿಕೆ ಇಲ್ಲದಿರಬಹುದು. ಬೇರೆಯವರಿಗೆ ನಂಬಿಕೆ ಇಲ್ಲ ಎಂಬ ಕಾರಣಕ್ಕೆ ಇಲಾಖೆ ಸ್ಥಗಿತಗೊಳಿಸಲು ಸಾಧ್ಯವಿಲ್ಲ. ಅಲ್ಪಸಂಖ್ಯಾತರ ಹಿತಾಸಕ್ತಿಯನ್ನು ಕಾಪಾಡಲು ಮತ್ತು ಅವರ ಪರವಾಗಿ ಧ್ವನಿಯಾಗಲು ನಮ್ಮ ಸರ್ಕಾರವಿದೆ. ಯಾವುದೇ ಸಮುದಾಯಕ್ಕೆ ಅನ್ಯಾಯವಾಗದಂತೆ ರಕ್ಷಣೆ ನೀಡುವ ಕೆಲಸ ಮಾಡುತ್ತೇವೆ.
ನಮ್ಮ ಸರ್ಕಾರ ಸಂವಿಧಾನದ ಚೌಕಟ್ಟಿನಲ್ಲಿಯೇ ಆಡಳಿತ ನಡೆಸಲಿದೆ. ರಾಹುಲ್ ಗಾಂಧಿ ಸೇರಿದಂತೆ ನಾವೆಲ್ಲರೂ ಸಂವಿಧಾನವನ್ನು ಕೈಯಲ್ಲಿ ಹಿಡಿದುಕೊಂಡೇ ಪ್ರಮಾಣವಚನ ಸ್ವೀಕರಿಸಿದ್ದೇವೆ. ಸಂವಿಧಾನವನ್ನು ಉಳಿಸುವುದು, ಎಲ್ಲ ಜಾತಿ, ಧರ್ಮಗಳಿಗೂ ಸಮಾನ ಗೌರವ ಮತ್ತು ರಕ್ಷಣೆ ನೀಡುವ ಮೂಲಕ ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವುದು ಸರ್ಕಾರದ ಬದ್ಧತೆ ಎಂದರು.
ಉರ್ದು ಕೇವಲ ಒಂದು ಸಮುದಾಯಕ್ಕೆ ಸೀಮಿತವಾದ ಭಾಷೆಯಲ್ಲ, ಅದು ಹೃದಯದ ಭಾಷೆ
ಉರ್ದು ಕೇವಲ ಒಂದು ಸಮುದಾಯಕ್ಕೆ ಸೀಮಿತವಾದ ಭಾಷೆಯಲ್ಲ. ಅದು ಹೃದಯದ ಭಾಷೆ. ಸಾಹಿತ್ಯ, ಕಾವ್ಯ ಮತ್ತು ಶಾಯಿರಿ ಮೂಲಕ ಜನರ ಮನಸ್ಸನ್ನು ಮುಟ್ಟುವ ಶಕ್ತಿ ಅದಕ್ಕಿದೆ. ಈ ಭಾಷೆಗೆ ಯಾವುದೇ ಗಡಿಯಿಲ್ಲ. ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿರುವ ಉರ್ದು ಭಾಷೆ ಮತ್ತು ಸಂಸ್ಕೃತಿಯನ್ನು ಎಲ್ಲರೂ ಗೌರವಿಸಬೇಕು.
ಮೈಸೂರು ದಸರಾ ಸಂದರ್ಭದಲ್ಲಿ ಉರ್ದು ಶಾಯಿರಿ ಕಾರ್ಯಕ್ರಮದಲ್ಲಿ ಸುಮಾರು ಒಂದು ಗಂಟೆ ಕಾಲ ಕುಳಿತು ಕಾವ್ಯವನ್ನು ಆಲಿಸಿದ್ದೆ. ಸಾಹಿತ್ಯವು ಮನಸ್ಸಿಗೆ ಮುದ ನೀಡಿತು. ವಿಶೇಷವೆಂದರೆ, ಆ ಕಾರ್ಯಕ್ರಮದಲ್ಲಿ ಮುಸ್ಲಿಮರು ಮಾತ್ರವಲ್ಲದೆ ಜೈನರು, ಬ್ರಾಹ್ಮಣರು, ಕನ್ನಡಿಗರು, ಹಿಂದಿ ಮಾತನಾಡುವವರು ಸೇರಿದಂತೆ ವಿವಿಧ ಧರ್ಮ ಮತ್ತು ಭಾಷೆಗಳ ಜನರು ಭಾಗವಹಿಸಿದ್ದರು. ಎಲ್ಲರೂ ಉರ್ದು ಶಾಯಿರಿಯನ್ನು ಆಸಕ್ತಿಯಿಂದ ಆಲಿಸುತ್ತಿದ್ದರು. ಭಾಷೆ ಜನರನ್ನು ಹೇಗೆ ಬೆಸೆಯಬಲ್ಲದು ಎಂಬುದಕ್ಕೆ ಇದು ಉತ್ತಮ ಉದಾಹರಣೆ ಎಂದರು.
ಯಾವ ಭಾಷೆಯಲ್ಲಿದ್ದರೂ ಜ್ಞಾನಕ್ಕೆ ಗೌರವ ನೀಡಬೇಕು. ಇಂಗ್ಲಿಷ್ ಸೇರಿದಂತೆ ಯಾವುದೇ ಭಾಷೆಯನ್ನು ಅಗೌರವದಿಂದ ಕಾಣಬಾರದು. ಭಾಷೆ ಎನ್ನುವುದು ಸಂವಹನ ಮಾಧ್ಯಮ. ಪ್ರತಿಯೊಬ್ಬರೂ ತಮ್ಮ ಮಾತೃಭಾಷೆಯನ್ನು ಪ್ರೀತಿಸಿ ಗೌರವಿಸಬೇಕು. ತಾಯಿ ಮತ್ತು ತಾಯ್ನುಡಿಯ ಮಹತ್ವವನ್ನು ಅರಿತುಕೊಳ್ಳಬೇಕು ಎಂದು ಹೇಳಿದರು.
ಕತ್ತರಿ ಬೇಡ, ಸೂಜಿಯ ಕೆಲಸ ಮಾಡೋಣ
ನಮ್ಮ ಭಾಷೆಗಳು ಬೇರೆ ಬೇರೆಯಾಗಿರಬಹುದು. ಆದರೆ, ಮನುಷ್ಯರ ಭಾವನೆಗಳು ಒಂದೇ. ಮಾನವೀಯತೆಯೇ ನಮ್ಮ ಜಾತಿ, ಮಾನವೀಯತೆಯೇ ನಮ್ಮ ಧರ್ಮ. ಕಬ್ಬಿಣದಿಂದ ಕತ್ತರಿ ಮತ್ತು ಸೂಜಿ ಎರಡನ್ನೂ ತಯಾರಿಸಬಹುದು. ಕತ್ತರಿಸುವ ಕೆಲಸ ನಮಗೆ ಬೇಡ. ಸೂಜಿಯಂತೆ ಹೊಲೆದು ಒಗ್ಗೂಡಿಸುವ ಕೆಲಸ ಮಾಡೋಣ. ನಮ್ಮ ಸರ್ಕಾರ ಮತ್ತು ಪಕ್ಷ ಸಮಾಜವನ್ನು ಬೆಸೆಯುವ ಕೆಲಸ ಮಾಡುತ್ತವೆ. ಸಮಾಜವನ್ನು ಒಡೆಯುವ ಕೆಲಸ ನಮಗೆ ಬೇಕಿಲ್ಲ ಎಂದು ನುಡಿದರು.
ಉರ್ದು ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗೆ ಸೇವೆ ಸಲ್ಲಿಸಿದ 20 ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡುತ್ತಿರುವುದು ಸಂತಸದ ಸಂಗತಿ. ಪ್ರಶಸ್ತಿ ಸ್ವೀಕರಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಉರ್ದು ಸಾಹಿತ್ಯದ ಬೆಳವಣಿಗೆಗೆ ಅಕಾಡೆಮಿ ನಡೆಸುತ್ತಿರುವ ಕಾರ್ಯಕ್ರಮಗಳು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಆಸ್ತಿ ರಾಜವಂಶಕ್ಕೆ ಸೇರಿದ್ದೋ, ಸರ್ಕಾರಕ್ಕೆ ಸೇರಿದ್ದೋ ಎಂಬುದನ್ನು ಕೋರ್ಟ್ ತೀರ್ಮಾನಿಸಲಿದೆ: ಯದುವೀರ್

