ಗಂಭೀರವಾಗಿ ಪರಿಶೀಲಿಸುವೆ – ಪಬ್ಲಿಕ್ ಟಿವಿ ಗ್ರಾಮ ‘ವಾಸ್ತವ’ ವರದಿಗೆ ಸಿಎಂ ಸ್ಪಂದನೆ

Public TV
3 Min Read
CM HDK 1

ಬೆಂಗಳೂರು: ಎಚ್‍ಡಿ ಕುಮಾರಸ್ವಾಮಿ ಅವರು ಬಿಜೆಪಿಯೊಂದಿಗೆ ಸೇರಿ ಸಮ್ಮಿಶ್ರ ಸರ್ಕಾರ ನಡೆಸಿದ್ದ ವೇಳೆ ಕೈಗೊಂಡಿದ್ದ ಗ್ರಾಮ ವಾಸ್ತವ್ಯದ ಕುರಿತು ಪಬ್ಲಿಕ್ ಟಿವಿ ವರದಿ ಮಾಡಿತ್ತು. ಗ್ರಾಮ ವಾಸ್ತವ್ಯದ ಲೋಪ ದೋಷಗಳು ಏನು? ಯಾವೆಲ್ಲಾ ಗ್ರಾಮಗಳಲ್ಲಿ ಅಭಿವೃದ್ಧಿ ಆಗಿದೆ. ಇಂದಿಗೂ ಗ್ರಾಮದಲ್ಲಿ ಯಾವೆಲ್ಲಾ ಸಮಸ್ಯೆಗಳು ಇದೆ ಎಂಬುವುದರ ವಾಸ್ತವತೆಯನ್ನು ತೆರೆದಿಟ್ಟಿತ್ತು.

ಪಬ್ಲಿಕ್ ಟಿವಿಯ ವರದಿಯ ನೋಡಿರುವ ಸಿಎಂ ಕುಮಾರಸ್ವಾಮಿ ಅವರು ವರದಿಯ ಸಕರಾತ್ಮಕ ಅಂಶಗಳನ್ನು ಸ್ವೀಕರಿಸಿ, ಗ್ರಾಮಗಳ ಕುಂದು ಕೊರತೆಗಳ ನಿವಾರಣೆಗೆ ಕಾರ್ಯ ನಿರ್ವಹಿಸುತ್ತೇನೆ. ಅಲ್ಲದೇ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಅಧಿಕಾರ ವ್ಯಾಪ್ತಿಯಲ್ಲಿ ಕಾರ್ಯಗಳನ್ನು ಕೈಗೊಳ್ಳುತ್ತೇನೆ ಎಂದು ಪತ್ರಿಕಾ ಹೇಳಿಕೆಯ ಮೂಲಕ ತಿಳಿಸಿದ್ದಾರೆ.

reality check 7

ಪಬ್ಲಿಕ್ ಟಿವಿ ವರದಿಯಲ್ಲಿ ಸಿಎಂ ಕುಮಾರಸ್ವಾಮಿ ಅವರು ವಾಸ್ತವ್ಯ ಮಾಡಿದ್ದ ಗ್ರಾಮದಗಳಲ್ಲಿ ಇಂದಿಗೂ ಯಾವ ಸಮಸ್ಯೆಗಳಿವೆ ಎಂಬುವುದನ್ನು ವಿಸ್ತಾವರವಾಗಿ ವಿವರಿಸಲಾಗಿತ್ತು. ಈ ಬಗ್ಗೆ ಮಾಹಿತಿ ಪಡೆಯುತ್ತೇನೆ. ಅಧಿಕಾರಿಗಳು, ಸ್ಥಳೀಯ ನಾಯಕರ ಗಮನಕ್ಕೆ ತಂದು ಕಾರ್ಯಗಳನ್ನು ಮಾಡುತ್ತೇನೆ. ಮುಂದಿನ ಕಾರ್ಯಕ್ರಮಗಳಲ್ಲಿ ಕಾನೂನಿನ ಚೌಕಟ್ಟಿನಲ್ಲಿ ಸಾಧ್ಯವಾಗುವುದನ್ನು ಅನುಸರಿಸಲು ಖಂಡಿತ ಪ್ರಯತ್ನಿಸುವೆ ಎಂದಿದ್ದಾರೆ. ಇದನ್ನು ಓದಿ: ಸಿಎಂ ವಾಸ್ತವ್ಯ ಮಾಡಿದ್ದ ಗ್ರಾಮಗಳ ಸ್ಥಿತಿ ಈಗ ಹೇಗಿದೆ? ಎಷ್ಟು ಭರವಸೆ ಪೂರ್ಣವಾಗಿದೆ? – ಕಂಪ್ಲೀಟ್ ವರದಿ ಓದಿ

ಸಿಎಂ ಹೇಳಿಕೆಯಲ್ಲಿ ಏನಿದೆ?
ನಾನು ಗ್ರಾಮ ವಾಸ್ತವ್ಯ ಮಾಡುವೆನೆಂದು ಘೋಷಿಸಿದ ದಿನದಿಂದ ಮಾಧ್ಯಮಗಳಲ್ಲಿ ನಾನು 2006-07 ರ ಅವಧಿಯಲ್ಲಿ ವಾಸ್ತವ್ಯ ಮಾಡಿದ ಗ್ರಾಮಗಳ ಸ್ಥಿತಿ-ಗತಿ, ಕುಟುಂಬಗಳ ಕುರಿತು ವರದಿಗಳನ್ನು ಪ್ರಕಟಿಸುತ್ತಿರುವುದನ್ನು ಗಮನಿಸುತ್ತಿರುವೆ. ಈ ಹಿನ್ನೆಲೆಯಲ್ಲಿ ಎರಡು ಮಾತು:

ಗ್ರಾಮ ವಾಸ್ತವ್ಯ ಎನ್ನುವುದು ಯಾವುದೇ ಜನಪ್ರಿಯತೆ ಗಿಟ್ಟಿಸುವ ಗಿಮಿಕ್ ಅಲ್ಲ. ಈ ಪರಿಕಲ್ಪನೆಯ ಮೂಲ ಪುರುಷನೂ ನಾನಲ್ಲ. ನನ್ನ ಗ್ರಾಮ ವಾಸ್ತವ್ಯ ಪ್ರಾರಂಭವಾಗಿದ್ದು ಆಕಸ್ಮಿಕವಾಗಿ, ಪ್ರವಾಹ ಪೀಡಿತ ಕೃಷ್ಣಾ ನದಿ ದಂಡೆಯ ಪಿ.ಕೆ. ನಾಗನೂರಿನಿಂದ ಎನ್ನುವುದು ನಿಮಗೆಲ್ಲಾ ತಿಳಿದ ವಿಚಾರ. ಗ್ರಾಮ ವಾಸ್ತವ್ಯ ಎಂಬ ಪದವನ್ನು ಚಾಲ್ತಿಗೆ ತಂದವರೂ ನಮ್ಮ ಮಾಧ್ಯಮ ಮಿತ್ರರೇ. ಆದರೆ ಈ ಸಂದರ್ಭದಲ್ಲಿ ಜನರು ತೋರಿದ ಪ್ರೀತಿ, ವಿಶ್ವಾಸ ನನ್ನನ್ನು ಮೂಕವಿಸ್ಮಿತನನ್ನಾಗಿಸಿದೆ. ಜನರ ಸಮಸ್ಯೆಗಳು, ಬದುಕಿನ ಕಟು ವಾಸ್ತವಗಳನ್ನು ಅರಿಯಲು ನೆರವಾಗಿದೆ. ಸರ್ಕಾರದಿಂದ ಆಗಬೇಕಾದ್ದು ಏನು ಎಂಬ ಬಗ್ಗೆ ನೇರ, ಸರಳವಾದ ಅತ್ಯುತ್ತಮ ಸಲಹೆಗಳೂ ಬಂದಿವೆ.

reality check 6

ಸಾರಾಯಿ ನಿಷೇಧ, ಲಾಟರಿ ನಿಷೇಧ, ಸಾಲ ಮನ್ನಾ, ಸಾವಿರಕ್ಕೂ ಹೆಚ್ಚು ಪ್ರೌಢಶಾಲೆಗಳು, 500ಕ್ಕೂ ಹೆಚ್ಚು ಪಿಯು ಹಾಗೂ ಪದವಿ ಕಾಲೇಜುಗಳ ಸ್ಥಾಪನೆ, ಗ್ರಾಮಗಳ ಸಮಗ್ರ ಅಭಿವೃದ್ಧಿಯ ಪರಿಕಲ್ಪನೆಯ ಸುವರ್ಣ ಗ್ರಾಮ ಯೋಜನೆ – ಇವೆಲ್ಲಾ ಗ್ರಾಮವಾಸ್ತವ್ಯದ ಫಲಶ್ರುತಿಗಳು. ನನ್ನ ಅಧಿಕಾರಾವಧಿಯ ನಂತರ ಸುವರ್ಣ ಗ್ರಾಮ ಯೋಜನೆ ಪರಿಣಾಮಕಾರಿಯಾಗಿ ಜಾರಿಗೆ ಬಾರದೇ ಇರುವುದು ವಿಷಾದನೀಯ.

ಗ್ರಾಮ ವಾಸ್ತವ್ಯದ ಮುಖ್ಯ ಗುರಿ, ಆಡಳಿತ ಯಂತ್ರದ ಕಾರ್ಯವೈಖರಿ ಅರಿಯುವುದು. ಸರ್ಕಾರ ರೂಪಿಸಿದ ಯೋಜನೆ ಫಲಕಾರಿಯೇ? ಜನರ ಅಭಿಪ್ರಾಯವೇನು ಎಂಬುದನ್ನು ಅರಿಯುವುದು, ಸುತ್ತಲಿನ ಗ್ರಾಮಗಳ ಜನರೂ ಸೇರುತ್ತಾರೆ. ಅವರಿಂದ ಅಹವಾಲು ಸ್ವೀಕರಿಸಿ ಪರಿಹರಿಸುವುದು. ಕಾನೂನು ವ್ಯಾಪ್ತಿಯಲ್ಲಿ ಇವುಗಳನ್ನು ಪರಿಹರಿಸಲು ಅಧಿಕಾರಿಗಳಿಗೆ ಸೂಚಿಸುತ್ತೇನೆ. ಕೆಲವು ಮನವಿಗಳನ್ನು ಪರಿಗಣಿಸಲು ಸಾಧ್ಯವಾಗದೆ ಇರಬಹುದು. ಇಂಥವುಗಳನ್ನು ನೀವು ಮತ್ತೆ ಗಮನಕ್ಕೆ ತರುತ್ತಿದ್ದೀರಿ. ಖಂಡಿತವಾಗಿಯೂ ಅವುಗಳನ್ನು ಗಂಭೀರವಾಗಿ ಪರಿಶೀಲಿಸುವೆ. ಆ ಗ್ರಾಮದ ಅಭಿವೃದ್ಧಿ ಗ್ರಾಮ ವಾಸ್ತವ್ಯದ ಫಲಶ್ರುತಿಯ ಒಂದು ಭಾಗವಷ್ಟೆ. ಅದೇ ಕೇಂದ್ರ ಗುರಿಯಲ್ಲ.

reality check 5

ಜನರಿಗೆ ಅಗತ್ಯವಿರುವ ಯೋಜನೆಗಳನ್ನು ಜಾರಿಗೊಳಿಸಿದಾಗ ಅವು ಸಹಜವಾಗಿಯೇ ಯಶಸ್ವಿಯಾಗುತ್ತವೆ. ಅದೇ ರೀತಿ ಯೋಜನೆಗಳನ್ನು ರೂಪಿಸಿ, ಸರ್ಕಾರ ಜನರ ಮೇಲೆ ಹೇರಿದರೆ ಯಶಸ್ವಿಯಾಗದು. ಈ ನಿಟ್ಟಿನಲ್ಲಿ ಗ್ರಾಮ ವಾಸ್ತವ್ಯ ಪ್ರಮುಖ ಪಾತ್ರ ವಹಿಸುತ್ತದೆ ಎನ್ನುವುದು ನನ್ನ ಅನುಭವ.

ಅಂತೆಯೇ ಎಚ್‍ಐವಿ ಪೀಡಿತ ಕುಟುಂಬವೊಂದರ ಮನೆಯಲ್ಲಿ ನಾನು ವಾಸ್ತವ್ಯ ಹೂಡಿದ್ದರಿಂದ ಆ ಕುಟುಂಬ ಊರನ್ನೇ ತೊರೆದಿದೆ ಎಂದು ವರದಿಯಾಗಿದೆ. ಇದು ನಿಜಕ್ಕೂ ದುರದೃಷ್ಣಕರ. ಎಚ್‍ಐವಿ/ ಏಯ್ಡ್ಸ್ ಬಗ್ಗೆ ಜನರಿಗಿರುವ ಅಂಧ ವಿಶ್ವಾಸವನ್ನು ದೂರ ಮಾಡುವ ಉದ್ದೇಶದಿಂದ ಏಯ್ಡ್ಸ್ ನಿಯಂತ್ರಣ ಮಂಡಳಿ ಅಧಿಕಾರಿಗಳ ಮನವಿಯ ಮೇರೆಗೆ ಅಲ್ಲಿ ವಾಸ್ತವ್ಯ ಮಾಡಿದ್ದೆ. ಆದರೆ ಸಮಾಜ ಇದನ್ನು ಸಕಾರಾತ್ಮಕವಾಗಿ ಸ್ವೀಕರಿಸಿಲ್ಲ ಎನ್ನುವುದು ನಿಜಕ್ಕೂ ಬೇಸರದ ಸಂಗತಿ. ಆದರೆ ವೈಯಕ್ತಿಕವಾಗಿಯೂ ನಾನು ಆ ಕುಟುಂಬಕ್ಕೆ ನೆರವಾಗಿದ್ದು, ಅದನ್ನು ಇಲ್ಲಿ ಚರ್ಚಿಸಲು ಹೋಗುವುದಿಲ್ಲ. ಮತ್ತೊಮ್ಮೆ ಆ ಕುಟುಂಬ ವನ್ನು ಸಂಪರ್ಕಿಸಿ ಹೇಗೆ ನೆರವಾಗಬಹುದು ಎಂದು ಪರಿಶೀಲಿಸುವೆ.

https://www.youtube.com/watch?v=YgZ7K9ZSD2E

ಮಾಧ್ಯಮಗಳು ಪ್ರಕಟಿಸುತ್ತಿರುವ ವರದಿಗಳಲ್ಲಿರುವ ಸಕಾರಾತ್ಮಕ ಸಲಹೆಗಳನ್ನು ಮುಕ್ತ, ಪ್ರಾಂಜಲ ಮನಸ್ಸಿನಿಂದ ಸ್ವೀಕರಿಸುವೆ. ಮುಂದಿನ ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಕಾನೂನಿನ ಚೌಕಟ್ಟಿನಲ್ಲಿ ಸಾಧ್ಯವಾಗುವುದನ್ನು ಅನುಸರಿಸಲು ಖಂಡಿತ ಪ್ರಯತ್ನಿಸುವೆ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *