ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಕಾಂಗ್ರೆಸ್ಸಿನಿಂದ ನಿತ್ಯವೂ ಕಿರುಕುಳ ಆಗುತ್ತಿದ್ದು, ಅದನ್ನು ತಡೆದುಕೊಳ್ಳಲು ಅವರಿಗೆ ಆಗುತ್ತಿಲ್ಲ ಎಂದು ಬಿಜೆಪಿ ಶಾಸಕ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕರು, ಸರ್ಕಾರ ಅಧಿಕಾರ ಪೂರೈಸುವ ಬಗ್ಗೆ ಸ್ವತಃ ಕುಮಾರಸ್ವಾಮಿ ಅವರಿಗೆ ವಿಶ್ವಾಸವಿಲ್ಲದ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ಯಾವುದೇ ಸಮಯದಲ್ಲಿ ಸರ್ಕಾರ ಬಿದ್ದು ಹೋಗುವ ಸಾಧ್ಯತೆ ಇದೆ ಎಂದು ಕಾಲೆಳೆದ ಅವರು, ವಿಧಾನಸಭೆ ಚುನಾವಣೆಯಲ್ಲಿ ತಮಗೆ ಮತ ಹಾಕಲಿಲ್ಲ ಅಂತಾ ಸಿಎಂ ಈಗ ರಾಜ್ಯದ ಜನರ ಮೇಲೆ ಕೋಪ ತೋರಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
Advertisement
ವಿಧಾನಸಭೆ ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಅನುಭವಿ ಹಾಗೂ ಮುತ್ಸದ್ದಿ ರಾಜಕಾರಣಿ. ಅವರು ಎಲ್ಲವನ್ನೂ ಅರಿತು ಮಾತನಾಡುತ್ತಾರೆ ಎಂದ ಶಾಸಕರು, ವೈದ್ಯಕೀಯ ಶಿಕ್ಷಣ ಸಚಿವ ಡಿಕೆ ಶಿವಕುಮಾರ್ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕಾಂಗ್ರೆಸ್ ಸಮಸ್ಯೆಗಳನ್ನು ಬಗೆಹರಿಸುತ್ತಾರೆ. ಹೀಗಾಗಿ ಅವರಿಗೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ನೀಡಿದ್ದಾರೆ ಎಂದು ವ್ಯಂಗ್ಯವಾಡಿದರು.
Advertisement
Advertisement
ಮೌನ ಪ್ರತಿಭಟನೆ:
ಚಿಕ್ಕಮಗಳೂರು ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಅತಿವೃಷ್ಠಿಯಿಂದಾಗಿ ಬೆಳೆ ಹಾನಿಯಾಗಿದೆ. ಇದಕ್ಕೆ ಸೂಕ್ತ ಪರಿಹಾರ ಘೋಷಿಸಬೇಕು ಅಂತಾ ಒತ್ತಾಯಿಸಿ ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಮುಂಭಾಗದಲ್ಲಿ ಶಾಸಕ ಸಿ.ಟಿ.ರವಿ ಹಾಗೂ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಸೇರಿ ಮೌನ ಪ್ರತಿಭಟನೆ ನಡೆಸಿದರು.
Advertisement
ಚಿಕ್ಕಮಗಳೂರಿನಲ್ಲಿ ಕೆಲವೊಮ್ಮೆ ಒಂದೇ ದಿನಕ್ಕೆ 14 ರಿಂದ 15 ಇಂಚು ಮಳೆಯಾಗಿದ್ದು, ಜಿಲ್ಲೆಯಲ್ಲಿ ಹರಿದು ಹೋಗುವ ನದಿಗಳಿಗೆ ನಿರ್ಮಾಣವಾದ ಡ್ಯಾಂಗಳು ತುಂಬಿವೆ. ಆದರೆ ಮಳೆಯಿಂದಾಗಿ ಕಾಫಿ, ಕರಿಮೆಣಸು ಸೇರಿದಂತೆ ಅನೇಕ ಬೆಳೆಗಳಿಗೆ ಹಾನಿಯಾಗಿದೆ. ಜಿಲ್ಲೆಯನ್ನು ಅತಿವೃಷ್ಟಿ ಪ್ರದೇಶ ಎಂದು ಘೋಷಣೆ ಮಾಡಬೇಕು ಹಾಗೂ ಪರಿಹಾರ ನೀಡಬೇಕು ಎಂದು ಸಿ.ಟಿ.ರವಿ ಒತ್ತಾಯಿಸಿದರು.
ಇಂದು ಸಾವಿನ ಮನೆಗೆ ಹೋದರೂ ರಸ್ತೆ ಹಾಳಾಗಿರುವ ಮಾತು ಕೇಳಿ ಬರುತ್ತಿದೆ. ಮಳೆಯಿಂದ ಹಾನಿಯಾದ ರಸ್ತೆ ಹಾಗೂ ಮನೆಗಳ ದುರಸ್ತಿಗೆ ಗ್ರಾಮ ಪಂಚಾಯತ್‍ಗಳಿಗೆ ವಿಶೇಷ ಪ್ಯಾಕೇಜ್ ನೀಡುವ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.