ಉಡುಪಿ: ಲೋಕಸಭಾ ಚುನಾವಣೆಯ ಪ್ರಚಾರದ ಹಿನ್ನೆಲೆಯಲ್ಲಿ ಉಡುಪಿಗೆ ಆಗಮಿಸಿದ್ದ ಸಿಎಂ ಕುಮಾರಸ್ವಾಮಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದು, ಮಠದ ಸುವರ್ಣ ಗೋಪುರ ಯೋಜನೆಯನ್ನು ವೀಕ್ಷಿಸಿದ ಬಳಿಕ ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶ ತೀರ್ಥ ಸ್ವಾಮೀಜಿಯ ಆಶೀರ್ವಾದ ಪಡೆದರು.
ಕೃಷ್ಣ ಮಠಕ್ಕೆ ಆಗಮಿಸಿದ್ದ ಸಿಎಂ, ಕನಕ ಕಿಂಡಿಯ ಮೂಲಕ ಶ್ರೀ ಕೃಷ್ಣನ ದರ್ಶನ ಪಡೆದ ಬಳಿಕ ಮುಖ್ಯಪ್ರಾಣ ದೇವರ ದರ್ಶನ ಮಾಡಿದರು. ಇದೇ ವೇಳೆ ಪೇಜಾವರ ಮಠಕ್ಕೂ ಸಿಎಂ ತೆರೆಳಿದ್ದು, ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಹಾಗೂ ವಿಶ್ವಪ್ರಸನ್ನ ಸ್ವಾಮೀಜಿಗಳನ್ನು ಭೇಟಿ ಮಾಡಿ ಚುನಾವಣೆಗೆ ಆಶೀರ್ವಾದ ಮಾಡಿ ಎಂದು ಕೋರಿಕೊಂಡರು.
Advertisement
Advertisement
ತದನಂತರ ಶ್ರೀಗಳ ಬಳಿ ಪೇಜಾವರ ಮಠದ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಿ, ನೀಲಾವರ ಗೋಶಾಲೆಯ ಬಗ್ಗೆ ಸಿಎಂ ಮಾಹಿತಿ ಪಡೆದುಕೊಂಡರು. ಈ ವೇಳೆ ಮೂರು ಕಡೆ ಗೋಶಾಲೆ ನಿರ್ಮಾಣಕ್ಕೆ ಪೇಜಾವರ ಶ್ರೀ ಒತ್ತಾಯಿಸಿದ್ದು, ಈಗ ನೀತಿಸಂಹಿತೆ ಜಾರಿಯಲ್ಲಿದೆ. ಚುನಾವಣೆ ನಂತರ ಈ ಬಗ್ಗೆ ತೀರ್ಮಾನಿಸಲಾಗುವುದು ಎಂದು ಕುಮಾರಸ್ವಾಮಿ ಅವರು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲಾ, ವಿಧಾನ ಪರಿಷತ್ ಸದಸ್ಯ ಬೋಜೆಗೌಡ ಸಿಎಂಗೆ ಸಾಥ್ ನೀಡಿದರು