– ಜನನಿಬಿಡ ಸ್ಥಳಗಳಲ್ಲಿ ಪೊಲೀಸ್ ಗಸ್ತು ಹೆಚ್ಚಿಸಿ
– ತನಿಖೆಯಲ್ಲಿ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿ
– ಉನ್ನತಮಟ್ಟದ ಸಭೆಯಲ್ಲಿ ಪೊಲೀಸ್ ಅಧಿಕಾರಿಗಳಿಗೆ ಸಿದ್ದರಾಮಯ್ಯ ತಾಕೀತು
ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಸಂಪೂರ್ಣ ಸತ್ಯ ಹೊರಗೆ ಬರಲಿ. ತಂತ್ರಜ್ಞಾನದ ಸಾಧ್ಯತೆಗಳನ್ನು ತನಿಖೆಯಲ್ಲಿ ಪರಿಣಾಮಕಾರಿಯಾಗಿ ಬಳಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.
ಗೃಹ ಇಲಾಖೆಯ ಅಧಿಕಾರಿಗಳೊಂದಿಗೆ ಅವರಿಂದು ಉನ್ನತಮಟ್ಟದ ಸಭೆ ನಡೆಸಿ ಮಾತನಾಡಿದರು. ಜನನಿಬಿಡ ಸ್ಥಳಗಳನ್ನು ಗುರುತಿಸಿ ಅಂತಹ ಪ್ರದೇಶಗಳಲ್ಲಿ ಪೊಲೀಸ್ ಗಸ್ತು ಹೆಚ್ಚಿಸಿ, ಜನರಿಗೆ ರಕ್ಷಣೆ ಒದಗಿಸಬೇಕು ಎಂದು ಸೂಚಿಸಿದರು. ಇದನ್ನೂ ಓದಿ: ಆರೋಗ್ಯ ಸುಧಾರಣೆ – ಮಾವಿನಕೆರೆ ರಂಗನಾಥಸ್ವಾಮಿಗೆ ಹರಕೆ ತೀರಿಸಿದ ದೊಡ್ಡಗೌಡ್ರು
ಇಂತಹ ಪ್ರಕರಣಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು. ಪೊಲೀಸರು ಇಂತಹ ಘಟನೆ ನಡೆದಾಗ ಎಚ್ಚರಿಕೆ ವಹಿಸಿ ನಂತರ ಮರೆಯುವಂತಾಗಬಾರದು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಜನರ ದಾರಿ ತಪ್ಪಿಸುವ ಕೆಲಸವನ್ನು ಮಟ್ಟ ಹಾಕಬೇಕು ಎಂದು ತಾಕೀತು ಮಾಡಿದರು.
ಸಮಾಜ ದ್ರೋಹಿಗಳ ಬಗ್ಗೆ ಯಾವುದೇ ಸಹಾನುಭೂತಿ ಇಲ್ಲದೇ ಕ್ರಮ ಜರುಗಿಸಿ, ಗುಪ್ತಚರ ಇಲಾಖೆ ಹೆಚ್ಚು ಜಾಗೃತವಾಗಿರಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವ ಸಮಾಜ ದ್ರೋಹಿಗಳ ಬಗ್ಗೆ ಯಾವುದೇ ಸಹಾನುಭೂತಿ ಇಲ್ಲದೇ ಕ್ರಮ ಜರುಗಿಸಬೇಕು ಎಂದು ಹೇಳಿದರು. ಇದನ್ನೂ ಓದಿ: ಲೋಕಸಭೆಗೆ ಬಿಜೆಪಿ ಅಭ್ಯರ್ಥಿಗಳ ಫಸ್ಟ್ ಲಿಸ್ಟ್ ಔಟ್ – ಮಥುರಾದಿಂದ ಹೇಮಾ ಮಾಲಿನಿ ಕಣಕ್ಕೆ
ಸಭೆಯಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ, ಜಿ. ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ ಅತೀಕ್, ಕಾರ್ಯದರ್ಶಿ ಡಾ.ತ್ರಿಲೋಕ್ ಚಂದ್ರ, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್ ಉಮಾಶಂಕರ್, ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ್, ಮೊದಲಾದವರು ಉಪಸ್ಥಿತರಿದ್ದರು.