ಮುರುಡೇಶ್ವರದಲ್ಲಿ ಮೃತಪಟ್ಟ ವಿದ್ಯಾರ್ಥಿನಿಯರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
2 Min Read
CM Siddaramaiah 2

ಕಾರವಾರ: ಮುರುಡೇಶ್ವರದಲ್ಲಿ (Murudeshwar) ಸಮುದ್ರ ಪಾಲಾಗಿದ್ದ ನಾಲ್ವರು ವಿದ್ಯಾರ್ಥಿನಿಯರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah) 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಈ ಕುರಿತು ಸಿಎಂ ತಮ್ಮ ಎಕ್ಸ್ (X) ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಕೋಲಾರ (Kolar) ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿಯರಾದ ದೀಕ್ಷಾ, ಲಾವಣ್ಯ, ವಂದನಾ ಹಾಗೂ ಶ್ರಾವಂತಿ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿ, ಸಂತಾಪ ಸೂಚಿಸಿದ್ದಾರೆ.ಇದನ್ನೂ ಓದಿ: ಮುರುಡೇಶ್ವರದಲ್ಲಿ ಮೃತಪಟ್ಟ ವಿದ್ಯಾರ್ಥಿನಿಯರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಟ್ವೀಟ್‌ನಲ್ಲೇನಿದೆ?
ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಹೋದ ಸಂದರ್ಭದಲ್ಲಿ ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನೀರುಪಾಲಾದ ಸುದ್ದಿ ತಿಳಿದು ಆಘಾತವಾಯಿತು. ಮೃತ ಮಕ್ಕಳ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮಕ್ಕಳ ದುಃಖತಪ್ತ ಪೋಷಕರಿಗೆ ನನ್ನ ಸಂತಾಪಗಳು.

ಈ ದುರ್ಘಟನೆಯಲ್ಲಿ ಮಡಿದ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮೃತದೇಹಗಳನ್ನು ಹುಟ್ಟೂರಿಗೆ ತಲುಪಿಸುವ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದೇನೆ.

ಪ್ರವಾಸದ ಸಂದರ್ಭದಲ್ಲಿ ಶಿಕ್ಷಕರು ಮಕ್ಕಳ ಬಗ್ಗೆ ಹೆಚ್ಚು ಜಾಗೃತೆ ವಹಿಸಬೇಕು. ಅಪಾಯಕಾರಿ ಸ್ಥಳಗಳಿಗೆ ಭೇಟಿನೀಡುವಾಗ ಮಕ್ಕಳ ಮೇಲೆ ನಿಗಾ ಇಡಬೇಕು. ಮಕ್ಕಳನ್ನು ಕಳೆದುಕೊಂಡ ಹೆತ್ತವರ ನೋವು ಸಂಕಟವನ್ನು ನಾನು ಅರ್ಥೈಸಿಕೊಳ್ಳಬಲ್ಲೆ, ಇಂತಹ ಅವಘಡಗಳು ಮತ್ತೆಂದೂ ಸಂಭವಿಸದಿರಲಿ ಎಂದು ಪ್ರಾರ್ಥಿಸುತ್ತೇನೆ.

ಘಟನೆ ಏನು?
ಕೊತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೇರಿ ಒಟ್ಟು 57 ಮಂದಿ ಸೇರಿ ಮುರುಡೇಶ್ವರ ಪ್ರವಾಸಕ್ಕೆ ಬಂದಿದ್ದರು. ಮಂಗಳವಾರ (ಡಿ.10) ಸಮುದ್ರದಲ್ಲಿ ಆಟ ಆಡುವಾಗ ಅಲೆಯ ಹೊಡೆತದಿಂದ ವಿದ್ಯಾರ್ಥಿನಿಯರು ಕೊಚ್ಚಿ ಹೋಗಿದ್ದರು. ಈ ವೇಳೆ ಒಟ್ಟು ಏಳು ವಿದ್ಯಾರ್ಥಿನಿಯರು ನೀರು ಪಾಲಾಗಿದ್ದರು. ಆ ಪೈಕಿ ಮೂವರನ್ನು ಲೈಫ್ ಗಾರ್ಡ್ಸ್ ಸಿಬ್ಬಂದಿ ರಕ್ಷಣೆ ಮಾಡಿದ್ರೆ, ಶ್ರಾವಂತಿ ಎಂಬಾಕೆ ಸಾವನ್ನಪ್ಪಿದ್ದಳು. ಇಂದು (ಡಿ.11) ಮೂವರು ವಿದ್ಯಾರ್ಥಿನಿಯರ ಮೃತದೇಹ ಪತ್ತೆಯಾಗಿದೆ.ಇದನ್ನೂ ಓದಿ: ಮುರುಡೇಶ್ವರದಲ್ಲಿ ಸಮುದ್ರ ಪಾಲಾಗಿದ್ದ ಮೂವರು ವಿದ್ಯಾರ್ಥಿನಿಯರ ಮೃತದೇಹ ಪತ್ತೆ

Share This Article